ಸ್ಥಳೀಯ ಚುನಾಯಿತ ಸದಸ್ಯರಿಗೆ ಅರಿವು ಮೂಡಿಸಲು “ಅಂತ್ಯೋದಯ” ಕಾರ್ಯಾಗಾರ : ಕೆ.ಎಸ್.ನವೀನ್.

 

 

 

 

ಚಿತ್ರದುರ್ಗ,ಏ.14:
ಚಿತ್ರದುರ್ಗ ನಗರದ ಮುರುಘ ರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ಇದೇ ಏಪ್ರಿಲ್ 18ರಂದು ಬೆಳಿಗ್ಗೆ 10ಕ್ಕೆ ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಚುನಾಯಿತ ಸದಸ್ಯರಿಗೆ  ಅರಿವು ಮೂಡಿಸುವ ಸಂಬಂಧ ಅಂತ್ಯೋದಯ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ತಿಳಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ರಾಜ್ಯಮಟ್ಟದ ಮಾಹಿತಿ ಕಾರ್ಯಾಗಾರ ನಡೆಯಲಿದೆ ಎಂದರು.
ರಾಜ್ಯದ ಕೊಡಗು, ಉತ್ತರ ಕನ್ನಡ, ಉಡುಪಿ, ಯಾದಗಿರಿ ಹಾಗೂ ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಈಗಾಗಲೇ ಅಂತ್ಯೋದಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗ ಆರನೇ ಜಿಲ್ಲೆಯಾಗಿದೆ. ಅಂತ್ಯೋದಯ ಕಾರ್ಯಾಗಾರವನ್ನು ಜಿಲ್ಲೆಯಲ್ಲಿ ವಿಶೇಷವಾಗಿ ಆಯೋಜಿಸಲಾಗುವುದು. ಅಂತ್ಯೋದಯ ಕಾರ್ಯಾಗಾರದ ಮೂಲಕ ಸರ್ಕಾರದ ಒಟ್ಟು ಯೋಜನೆಗಳು, ಜನಕಲ್ಯಾಣ ಕಾರ್ಯಕ್ರಮಗಳು ಕುರಿತು ಸಂಪೂರ್ಣ ಮಾಹಿತಿ ನೀಡಲಾಗುವುದು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ದೊರೆಯಬೇಕು ಎಂಬ ನಿಟ್ಟಿನಲ್ಲಿ ಕಾರ್ಯಾಗಾರ ನಡೆಸಲಾಗುತ್ತಿದೆ. 3500ಕ್ಕೂ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಪಂಚಾಯತ್ ರಾಜ್ ಇಲಾಖೆಗೆ  ಸಂಬಂಧಿಸಿದ ಎಲ್ಲ ಹಂತದ ಅಧಿಕಾರಿ ವರ್ಗದವರು ಸೇರಿದಂತೆ ಕೃಷಿ, ಪಶುಸಂಗೋಪನೆ ಸೇರಿದಂತೆ ಬೇರೆಬೇರೆ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಗ್ರಾಮ ಪಂಚಾಯಿತಿಯಲ್ಲಿ ಶೇ.50ಕ್ಕೂ ಹೆಚ್ಚು ಮಹಿಳೆಯರು ಸದಸ್ಯರಿದ್ದಾರೆ ಹಾಗಾಗಿ ವಿಶೇಷವಾಗಿ ಮಹಿಳಾ ಗ್ರಾಮ ಪಂಚಾಯಿತಿ ಸದಸ್ಯರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ  ಮಹಿಳಾ ಕೇಂದ್ರಿತ ಯೋಜನೆ ಹಾಗೂ ಸವಲತ್ತುಗಳ ಕುರಿತು ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಅಂತ್ಯೋದಯ ಕಾರ್ಯಾಗಾರದ ಅಂಗವಾಗಿ ಜಿಲ್ಲಾಡಳಿದ ವತಿಯಿಂದ ವಿವಿಧ ಇಲಾಖೆಗಳ ವತಿಯಿಂದ 40ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಇಲಾಖೆಯ ಸೌಲಭ್ಯಗಳು ಹಾಗೂ ಸಕ್ಸಸ್ ಸ್ಟೋರಿ, ಸರ್ಕಾರದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಕುರಿತು ವೀಡಿಯೋ ಮೂಲಕ ಮಾಹಿತಿ ನೀಡಲಾಗುವುದು ಎಂದರು.
ಸ್ವಚ್ಛ ಪಂಚಾಯಿತಿ, ಕಸವಿಲೇವಾರಿಯಲ್ಲಿ ಮಾದರಿ ಪಂಚಾಯಿತಿ, ಜನಸ್ನೇಹಿ ಆಡಳಿತದ ಪಂಚಾಯಿತಿ ಸೇರಿದಂತೆ ಹಲವಾರು ಸ್ಪರ್ಧೆಗಳನ್ನು ಆಯೋಜನೆ ಮಾಡಿ, ಸ್ಪರ್ಧೆಗಳ ಮೂಲಕ ಪಂಚಾಯಿತಿಯಲ್ಲಿ ಉತ್ತಮ ಕಾರ್ಯ ನಿರ್ವಹಣೆಗೆ ಪಂಚಾಯಿತಿ ಸದಸ್ಯರನ್ನು ಅಣಿಗೊಳಿಸಲು ಕ್ರಮವಹಿಸಲಾಗುವುದು ಎಂದು ಮಾಹಿತಿ ನೀಡಿದರು.
ಅಂತ್ಯೋದಯ ಕಾರ್ಯಾಗಾರದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು, ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಹಾಗೂ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ನಂದಿನಿದೇವಿ ಇದ್ದರು.

 

 

[t4b-ticker]

You May Also Like

More From Author

+ There are no comments

Add yours