ಕೋವಿಡ್ ಪಾಸಿಟಿವ್ ಬಂದರೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಿರಿ: ಡಿಸಿ ಕವಿತಾ ಎಸ್ ಮನ್ನಿಕೇರಿ ಸೂಚನೆ

 

ಚಳ್ಳಕೆರೆ ತಾಲ್ಲೂಕಿನ ಬಾಲೇನಹಳ್ಳಿಯಲ್ಲಿ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮ
ಕೋವಿಡ್ ನಿಯಮ ಪಾಲಿಸಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ
ಚಿತ್ರದುರ್ಗ,ಮೇ.27:
ಜಿಲ್ಲೆಯಲಿ ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸೂಚನೆ ನೀಡಿದರು.
ಚಳ್ಳಕೆರೆ ತಾಲ್ಲೂಕಿನ ಬಾಲೇನಹಳ್ಳಿ ಗ್ರಾಮದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ರಾಮಸ್ಥರು ಅನಾವಶ್ಯಕವಾಗಿ ಮನೆಯಿಂದ ಹೊರಗಡೆ ಬರಬಾರದು. ಮನೆಯಿಂದ ಹೊರಗಡೆ ಹೋಗುವಾಗ ಪ್ರತಿಯೊಬ್ಬರು ಮಾಸ್ಕ್ (ಮುಖಗವಸು) ಧರಿಸಬೇಕು. ಯಾರಿಗಾದರೂ ಜ್ವರ, ಕೆಮ್ಮು, ನೆಗಡಿ ಅಂತಹ ಕೋವಿಡ್ ಲಕ್ಷಣಗಳು ಕಂಡು ಬಂದರೆ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಮಾಡಿಸಿಕೊಳ್ಳಬೇಕು. ಕೋವಿಡ್ ಸೋಂಕು ದೃಢಪಟ್ಟರೆ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಹಾಸ್ಟೆಲ್‍ಗಳಲ್ಲಿ ತೆರೆಯಲಾಗಿರುವ ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಎಂದು ಹೇಳಿದರು.
ಕೋವಿಡ್‍ಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದರಿಂದ ಕುಟುಂಬದ ಇತರ ಸದಸ್ಯರಿಗೂ ಕೋವಿಡ್ ಸೋಂಕು ಹರಡಲಿದೆ. ಹಾಗಾಗಿ ಕೋವಿಡ್ ಆರೈಕೆ ಕೇಂದ್ರಗಳಲ್ಲಿಯೇ ಚಿಕಿತ್ಸೆ ಪಡೆಯಬೇಕು. ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಕೋವಿಡ್-19 ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಮಾತನಾಡಿ, ಕೋವಿಡ್ ಸೋಂಕಿತರು ತಕ್ಷಣವೇ ಚಿಕಿತ್ಸೆ ಪಡೆಯಬೇಕು ಹಾಗೂ ಕೋವಿಡ್ ಸೋಂಕಿತರ ಸಂಪರ್ಕದಲ್ಲಿರುವವರು ಕೋವಿಡ್-19 ಪರೀಕ್ಷೆಗೆ ಒಳಗಾಗಬೇಕು. ಗ್ರಾಮಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಕೊರೊನಾ ಮುಕ್ತ ಗ್ರಾಮಕ್ಕೆ ಸಹಕರಿಸಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಮಾತನಾಡಿ, ಕೋವಿಡ್ ತಡೆಗಟ್ಟಲು ಗ್ರಾಮಸ್ಥರು ಮನೆಯಲ್ಲಿಯೇ ಸುರಕ್ಷಿತವಾಗಿರಬೇಕು. ಅನಾವಶ್ಯಕವಾಗಿ ವಾಹನಗಳಲ್ಲಿ ಓಡಾಡಿದರೆ ಅಂತಹ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುವುದು ಎಚ್ಚರಿಕೆ ನೀಡಿದರು.
ಕೋವಿಡ್ ಸೋಂಕು ದೃಢವಾದಾಗ ಗ್ರಾಮಸ್ಥರು ಯಾವುದೇ ಭಯ ಪಡಬಾರದು. ಧೈರ್ಯವಾಗಿರಬೇಕು. ಕೋವಿಡ್ ಮುಕ್ತ ಗ್ರಾಮವನ್ನಾಗಿ ಮಾಡುವಲ್ಲಿ ಗ್ರಾಮಸ್ಥರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಟಿ.ರಘುಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಆರ್‍ಸಿಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತುದ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours