ಮೇಕೆದಾಟು ಯೋಜನೆ ಆರಂಭಿಸುವಂತೆ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ.

 

ಮೇಕೆದಾಟು ಯೋಜನೆ ಕಾಮಗಾರಿಯನ್ನು ಆರಂಭಿಸುವಂತೆ ಒತ್ತಾಯಿಸಿ ಡಿಸೆಂಬರ್ ಮೊದಲ ವಾರದಲ್ಲಿ ಮೇಕೆದಾಟುನಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನಲ್ಲಿ ಮಾತನಾಡಿದ ಉಭಯ ಮುಖಂಡರು “ಮೇಕೆದಾಟು ಯೋಜನೆ ಕಾಂಗ್ರೆಸ್ ಸರ್ಕಾರ ರೂಪಿಸಿತು. ವಿವರವಾದ ಯೋಜನಾ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿ ಒಪ್ಪಿಗೆ ಪಡೆದಿದೆ. ಕೇಂದ್ರ ಸರ್ಕಾರ ಪರಿಸರ ಕ್ಲಿಯರೆನ್ಸ್ ಕೊಡಬೇಕು. ರಾಜ್ಯ ಸರ್ಕಾರ ಮೇಕೆದಾಟು ಯೋಜನೆಯ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಸುಮ್ಮನೆ ಕ್ಯಾತೆ ತೆಗೆಯುತ್ತಿದೆ. ಮೇಕೆದಾಟು ಯೋಜನೆಯಿಂದ ತಮಿಳುನಾಡು ಮತ್ತು ಕರ್ನಾಟಕ ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ನಮಗೆ ವಿದ್ಯುತ್ ಉತ್ಪಾದನೆ ಮತ್ತು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ. ತಮಿಳುನಾಡಿಗೆ ಟ್ರಿಬ್ಯುನಲ್ ಹೇಳಿದಂತೆ ನೀರಿ ಹರಿಸಲು ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾವೇರಿ ನದಿಯಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿಯುವ ನೀರನ್ನು ಬಳಸಿಕೊಂಡು ಕುಡಿಯುವ ನೀರು ಕೊಡಲು ಮತ್ತು ವಿದ್ಯುತ್ ಉತ್ಪಾದನೆ ಮಾಡಲು ಸಹಾಯವಾಗಲಿದೆ. ಯೋಜನೆ ಕರ್ನಾಟಕ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ನೀರು ಪಡೆಯುವ ಹಕ್ಕು ಅವರಿಗಿದೆ. ಯೋಜನೆಯಿಂದ ತಮಿಳುನಾಡಿಗೆ ಏನೂ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಯೋಜನೆ ಆರಂಭಿಸಲು ನಮಗೆ ಯಾವುದೇ ಅಡ್ಡಿ ಇಲ್ಲ. ಸುಪ್ರೀಂಕೋರ್ಟ್ ಆದೇಶಗಳು ಯೋಜನೆಗೆ ಪೂರಕವಾಗಿವೆ. ತಮಿಳುನಾಡು ಕೂಡ ಯೋಜನೆಗೆ ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಸುಮ್ಮನೆ ಕ್ಯಾತೆ ತೆಗೆಯುತ್ತಿದೆ. ನಾವು ವ್ಯರ್ಥವಾಗಿ ಸಮುದ್ರಕ್ಕೆ ಹರಿದುಹೋಗುವ ಹೆಚ್ಚುವರಿ ನೀರನ್ನು ಮಾತ್ರ ಬಳಸಿಕೊಳ್ಳುತ್ತೇವೆ. ಆದ್ದರಿಂದ ಕೇಂದ್ರ ಸರ್ಕಾರ ಕೂಡಲೇ ಪರಿಸರ ಕ್ಲಿಯರೆನ್ಸ್ ಕೊಡಬೇಕು. ರಾಜ್ಯ ಸರ್ಕಾರ ಕಾಮಗಾರಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆ ಕೈಗೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಮೇಕೆದಾಟು ಯೋಜನೆ ನಮಗೆ ಅವಶ್ಯಕ ಇದೆ. ಕಾವೇರಿ ನದಿಪಾತ್ರದ ಬೆಂಗಳೂರು ನಗರ ಮತ್ತು ಏಳು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಅನುಕೂಲವಾಗಲಿದೆ. ಯೋಜನೆ ಕೈಗೊಳ್ಳುವಂತೆ ಒತ್ತಾಯಿಸಿ ಹೋರಾಟ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ತರುತ್ತೇವೆ ಎಂದರು.

[t4b-ticker]

You May Also Like

More From Author

+ There are no comments

Add yours