ಮಂಗಳೂರು ನಗರದಲ್ಲಿ ಅಕ್ರಮ ವಲಸಿಗರ ವಿರುದ್ಧ ಪೊಲೀಸರು ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಉರ್ವಾ ಸಮೀಪದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ದಾಳಿ ನಡೆಸಿದ ಪೊಲೀಸರು, ನಾಲ್ವರು ಅಪ್ರಾಪ್ತರು ಸೇರಿದಂತೆ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂರ್ ಅಮೀನ್, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಜಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ನಕಲಿ ವಿಳಾಸದಲ್ಲಿ ಬಂದವರು
ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳ ಮೂಲದ ಏಜೆಂಟ್ ಒಬ್ಬರ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಬಂಧಿತರಿಂದ ಬಾಂಗ್ಲಾ ಗುರುತಿನ ಚೀಟಿ ವಶ
ಕಾರ್ಯಾಚರಣೆಯ ವೇಳೆ ಬಂಧಿತರ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ ಗುರುತಿನ ಚೀಟಿ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳ ಆಧಾರದ ಮೇಲೆ ಅವರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಸುರತ್ಕಲ್ನಲ್ಲಿ 11 ಮಂದಿಯ ಬಂಧಿಸಿದ್ದ ಪೊಲೀಸರು
ಇತ್ತೀಚೆಗೆ ಸುರತ್ಕಲ್ನಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಎಂಟು ಮಂದಿ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದೀಗ ಉರ್ವಾದಲ್ಲಿ 11 ಮಂದಿಯನ್ನು ಬಂಧಿಸಿರುವುದರಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಪತ್ತೆಯಾದ ಅಕ್ರಮ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದ ವರದಿಯನ್ನು ಬೆಂಗಳೂರಿನ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO)ಗೆ ಸಲ್ಲಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ. ಅಕ್ರಮ ವಲಸೆ ಜಾಲದಲ್ಲಿ ಭಾಗಿಯಾಗಿರುವ ಇತರ ವ್ಯಕ್ತಿಗಳ ಬಗ್ಗೆ ಕೂಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



