ಬಾಲ್ಯ ಹಾಗೂ ಕಿಶೋರ ಕಾರ್ಮಿಕರ ಪದ್ಧತಿ ನಿರ್ಮೂಲನೆ: ಜನ ಜಾಗೃತಿಗೆ ಚಾಲನೆ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 15:
ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ಆಟೋ ಮೂಲಕ ಜನ ಜಾಗೃತಿಗೆ ಕಾರ್ಮಿಕ ಅಧಿಕಾರಿ ಇಬ್ರಾಹಿಂ ಸಾಬ್ ಶುಕ್ರವಾರ ಚಾಲನೆ ನೀಡಿದರು.
ನಗರದ ಜೆ.ಸಿ.ಆರ್ ಬಡಾವಣೆಯಲ್ಲಿರುವ ಕಾರ್ಮಿಕ ಅಧಿಕಾರಿ ಕಚೇರಿ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಸಮಿತಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಅಂಗವಾಗಿ ಆಟೋ ಮೂಲಕ ಜನ ಜಾಗೃತಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳು ರಾಷ್ಟ್ರದ ಸಂಪತ್ತು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿಯು ಮಕ್ಕಳನ್ನು ದೈಹಿಕವಾಗಿ ನೈತಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿ ಶೋಷಣೆಗೆ ಒಳಪಡಿಸಿ ಅವರ ಶಿಕ್ಷಣ ಅವಕಾಶಗಳನ್ನು ತಡೆಗಟ್ಟುತ್ತದೆ. ಕಲಿಯುವ ವಯಸ್ಸಿನಲ್ಲಿ ಮಕ್ಕಳು ಶಿಕ್ಷಣದಿಂದ ದೂರ ಉಳಿದು ದುಡಿಮೆಯಲ್ಲಿ ತೊಡಗಿಸಿಕೊಳ್ಳುವುದು ಅತ್ಯಂತ ಕಳವಳಕಾರಿಯಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಈ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ತರಲು ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ 1986ರಂತೆ ಬಾಲ್ಯಾವಸ್ಥೆ ಹಾಗು ಕಿಶೋರಾವಸ್ಥೆಯ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವೆರೆಗೆ ಜೈಲು ಶಿಕ್ಷೆ ಮತ್ತು ರೂ.20,000/- ರಿಂದ ರೂ.50,000/- ರವರೆಗೆ ದಂಡ ಅಥವಾ ಎರಡನ್ನು ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಎಂದರು.
ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ ಮಾತನಾಡಿ, ಬಾಲ್ಯಾವಸ್ಥೆಯಲ್ಲಿ ಮಕ್ಕಳು ದುಡಿಮೆ ಮಾಡುತ್ತಿದ್ದರೆ ಅಂಥವರನ್ನು ಗುರುತಿಸಿ 1098 ಟೋಲ್ ಫ್ರೀ ನಂಬರ್‍ಗೆ ಮಾಹಿತಿ ನೀಡಿದರೆ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ದುಡಿಸಿಕೊಳ್ಳುತ್ತಿರುವಂತಹ ಮಾಲೀಕರ ವಿರುದ್ಧವಾಗಿ ಪ್ರಕರಣಗಳನ್ನು ದಾಖಲಿಸಲಾಗುವುದೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಡಿ.ಸತೀಶ್ ಕುಮಾರ್, ವಿಷಯ ನಿರ್ವಾಹಕ ತೀರ್ಥಪ್ರಸಾದ್, ಸಿಬ್ಬಂದಿಗಳಾದ ಸತೀಶ್, ತೇಜು, ವಿರೂಪಾಕ್ಷಪ್ಪ, ಸಿದ್ದಲಿಂಗಪ್ಪ ಹಾಗೂ ಕಟ್ಟಡ ಕಾರ್ಮಿಕ ಸಂಘದ ರಮೇಶ್, ತಿಪ್ಪೇಸ್ವಾಮಿ, ಶಫೀ, ಚಂದ್ರಣ್ಣ, ಕುಮಾರ್, ಗೌಸ್‍ಪೀರ್ ಭಾಗವಹಿಸಿದ್ದರು.

 

 

[t4b-ticker]

You May Also Like

More From Author

+ There are no comments

Add yours