ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಗುಣಮಟ್ಟದ ಶಿಕ್ಷಣಕ್ಕೆ  ಆದ್ಯತೆ:ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 09:
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಹೊಸ ಶಿಕ್ಷಣ ನೀತಿಯಿಂದ ವಿದ್ಯಾರ್ಥಿಗಳು ಕಲಿಕೆಗೆ ಮುಕ್ತ ಅವಕಾಶದ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ಮತ್ತು ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ.ಸಿ.ಎನ್. ಅಶ್ವಥ್ ನಾರಾಯಣ  ಹೇಳಿದರು.
ಹಿರಿಯೂರು  ತಾಲ್ಲೂಕಿನ ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಹೊಸಯಳನಾಡು ಕರ್ನಾಟಕ ಪಬ್ಲಿಕ್ ಶಾಲೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಗುಣಮಟ್ಟ ಬಹಳ ಕಡಿಮೆ ಇದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿಯೂ ಗುಣಮಟ್ಟದ ಕಲಿಕೆ ಇಲ್ಲ.ಇದನ್ನು ಸಂಪೂರ್ಣ ಅರಿತು ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಸುಧಾರಣೆ ತರುತ್ತಿದೆ ಎಂದರು.
ರಾಷ್ಟ್ರೀಯ ಶಿಕ್ಷಣ ನೀತಿಯು ಕೇವಲ ಶೈಕ್ಷಣಿಕವಾಗಿ ಮಾತ್ರ ಸೀಮಿತವಾಗಿರದೇ ಸಾಂಸ್ಕøತಿಕ, ದೈಹಿಕ, ಶೈಕ್ಷಣಿಕ ಹಾಗೂ  ಸಾಮಾಜಿಕ ಚಟುವಟಿಕೆ ಸೇರಿದಂತೆ ಎಲ್ಲ ರೀತಿಯ ಚಟುವಟಿಕೆಯಲ್ಲಿಯೂ ಭಾಗವಹಿಸಲು ಅವಕಾಶವಿದೆ. ಕಲಿಕೆ ಕೇವಲ ತರಗತಿಯಲ್ಲಿ ಮಾತ್ರವಲ್ಲ. ಸಮಾಜದಲ್ಲಿ ಆಗುವಂತಹ ಪ್ರತಿಯೊಂದು ವಿಚಾರದಲ್ಲಿಯೂ ಕಲಿಯುವುದು ಅವಕಾಶವಿದೆ ಎಂದು ಹೇಳಿದರು.
ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ, ಗುಣಮಟ್ಟಕ್ಕೆ ಹೆಸರುವಾಸಿಯಾಗಿರುವಂತೆ ಗ್ರಾಮ ಪಂಚಾಯಿತಿ ಪಬ್ಲಿಕ್ ಶಾಲೆ ಹೆಸರಿನಲ್ಲಿ ಶಾಲೆ ಸ್ಥಾಪನೆ ಮಾಡಲು ಯೋಜನೆ ಕೈಗೆತ್ತಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ ಎಂದರು.
ನಮ್ಮ ಗ್ರಾಮಗಳಲ್ಲಿರುವ ಶಾಲೆಗಳನ್ನು ಉತ್ತಮವಾಗಿ ಅಭಿವೃದ್ಧಿ ಮಾಡಿ ಗುಣಮಟ್ಟದ ಶಿಕ್ಷಣಕ್ಕೆ ನಾವೆಲ್ಲರೂ ಪ್ರಯತ್ನ ಮಾಡಿದರೆ ಸಮೃದ್ಧಿಯ ಸಮಾಜ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯ ಪಟ್ಟರು.
ಹಿರಿಯೂರು ಶಾಸಕಿ ಪೂರ್ಣಿಮಾ ಕೆ.ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಗುರಿಯಿದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಿದೆ. ಶ್ರಮದಿಂದ ಮಾತ್ರ ಸಾಧನೆ ಸಾಧ್ಯ ಎಂದು ಹೇಳಿದರು.
ಹಿರಿಯೂರು ತಾಲ್ಲೂಕಿನ ವೇದಾವತಿ, ವಾಣಿ ಸಕ್ಕರೆ, ಜವನಗೊಂಡನಹಳ್ಳಿ ಪ್ರಥಮ ದರ್ಜೆ ಕಾಲೇಜು ಹಾಗೂ ಹರಿಯಬ್ಬೆ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಸಚಿವರಿಗೆ ಮನವಿ ಮಾಡಿದ ಅವರು, ಹಿರಿಯೂರು ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಹೊಸಯಳನಾಡು ಗ್ರಾಮ ಪಂಚಾಯತಿ ಅಧ್ಯಕ್ಷ ದೇವರಾಜು, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆ ಜಂಟಿನಿರ್ದೇಶಕ ಜಿತೇಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್,  ಶಿಕ್ಷಣ ಪ್ರೇಮಿ ನಾ.ತಿಪ್ಪೇಸ್ವಾಮಿ, ಹೊಸಯಳನಾಡು ಶಾಲೆಯ ಪ್ರಾಂಶುಪಾಲ ತಿಪ್ಪೇಸ್ವಾಮಿ, ಶಾಲಾ ಅಭಿವೃದ್ಧಿ ಸಮಿತಿಯ ತಿಮ್ಮಾಶೆಟ್ಟಿ ಸೇರಿದಂತೆ ಮತ್ತಿತರರು ಇದ್ದರು.

 

 

[t4b-ticker]

You May Also Like

More From Author

+ There are no comments

Add yours