ಕೋವಿಡ್ ರೋಗಿಗಳ ಹಾರೈಕೆ ನಮ್ಮ ಕೆಲಸ, ಯಾವುದೇ ಕಾರಣಕ್ಕೂ ಸಂಬಂಧಿಕರು ಆಸ್ಪತ್ರೆ ಭೇಟಿ ನೀಡಬೇಡಿ: ಉಸ್ತುವಾರಿ ಕಾರ್ಯದರ್ಶಿ ಆದೇಶ.

 

 

 

 

ಕೋವಿಡ್ ರೋಗಿಗಳ ಕಡೆಯವರು ಆಸ್ಪತ್ರೆಗೆ ತೆರಳಿ ಹೊರ ಹೋಗುವುದರಿಂದ ಇತರರಿಗೆ ತೊಂದರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಂಜುನಾಥ್ ಅವರು ರೋಗಿಗಳ ಕಡೆಯವರಿಗೆ ತಿಳಿಸಿದರು.

ಚಿತ್ರದುರ್ಗ ಕೋವಿಡ್ ಆಸ್ಪತ್ರೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ, ಪರಿಶೀಲನೆ
ಚಿತ್ರದುರ್ಗ,ಮೇ17:
ನಗರದ ಜಿಲ್ಲಾಸ್ಪತ್ರೆಯ ಜಿಲ್ಲಾ ಕೋವಿಡ್ ಆಸ್ಪತ್ರೆ ಸೇರಿದಂತೆ ನಗರದ ಕೋವಿಡ್ ಕೇರ್ ಸೆಂಟರ್ ಹಾಗೂ ಕೋವಿಡ್ ಚಿಕಿತ್ಸೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ವಿಪತ್ತು ಮತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಪಿ.ಪಿ.ಇ ಕಿಟ್ ಧರಿಸಿ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕೋವಿಡ್ ಸೋಂಕಿತ ರೋಗಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.
ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ರೋಗಿಗಳ ಸಂಬಂಧಿಕರು ಸಮಸ್ಯೆ ಆಲಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕೋವಿಡ್ ರೋಗಿಗಳ ಸಂಬಂಧಿಕರು ಯಾವುದೇ ಕಾರಣಕ್ಕೂ ಆಸ್ಪತ್ರೆಗೆ ಭೇಟಿ ನೀಡಬಾರದು. ಆಸ್ಪತ್ರೆಗೆ ಭೇಟಿ ನೀಡುವುದರಿಂದ ತಮಗೂ ಹಾಗೂ ಇತರರಿಗೂ ಸೋಂಕು ತಗುಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದೆ. ಹಾಗಾಗಿ ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಸಹಕಾರ ನೀಡಬೇಕು. ರೋಗಿಗಳಿಗೆ ಜಿಲ್ಲಾಡಳಿತದ ವತಿಯಿಂದ ಊಟೋಪಚಾರದ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಿ, ಸೋಂಕಿತರನ್ನು ಶೀಘ್ರವಾಗಿ ಗುಣ ಪಡಿಸಲಾಗುವುದು. ಹಾಗಾಗಿ ಕೋವಿಡ್ ರೋಗಿಗಳ ಸಂಬಂಧಿಕರು ಆಸ್ಪತ್ರೆಗಳಿಗೆ ಭೇಟಿ ನೀಡಬಾರದು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ದಿನೇ ದಿನೇ ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಪ್ರತಿಯೊಬ್ಬರು ಮಾಸ್ಕ್ ಅನ್ನು ಸರಿಯಾಗಿ ಧರಿಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ದೈಹಿಕ ಅಂತರ ಕಾಯ್ದುಕೊಳ್ಳಬೇಕು. ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ಮೂಲನೆ ಮಾಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಜಿಲ್ಲೆಯ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ನಗರದ ಬಿವಿಕೆಎಸ್ ಲೇಔಟ್‍ನಲ್ಲಿರುವ ಕೋವಿಡ್ ಕೇರ್ ಸೆಂಟರ್ ಹಾಗೂ ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಸೌಲಭ್ಯಗಳು ಹಾಗೂ ಸೋಂಕಿತರಿಗೆ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.
ಮುಕ್ತಿಧಾಮಕ್ಕೆ ಭೇಟಿ; ನಗರದ ಮುಕ್ತಿಧಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾರ್ಯದರ್ಶಿಯವರು ಕೋವಿಡ್ ಸಂದರ್ಭದಲ್ಲಿ ರೋಗಿಗಳ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಹಣವನ್ನು ಪಡೆಯಬಾರದು, ಈ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. 
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಿ.ಎಲ್.ಫಾಲಾಕ್ಷ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಹೆಚ್.ಜೆ.ಬಸವರಾಜಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

[t4b-ticker]

You May Also Like

More From Author

+ There are no comments

Add yours