ಬೆಳಗಾವಿ: ಜಿಲ್ಲೆಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ಶನಿವಾರ ಒಂದೇ ದಿನ 20 ಕೃಷ್ಣಮೃಗಗಳು ಮೃತಪಟ್ಟಿವೆ. ಇದರೊಂದಿಗೆ ಕಳೆದ ಎರಡು ದಿನಗಳ ಅವಧಿಯಲ್ಲಿ ಒಟ್ಟು 28 ಕೃಷ್ಣಮೃಗಗಳು ಮೃತಪಟ್ಟಂತಾಗಿದ್ದು, ಮೃತದೇಹದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಬ್ಯಾಕ್ಟೀರಿಯಾ ಸೋಂಕಿನಿಂದ ಕೃಷ್ಣಮೃಗಗಳು ಸಾವನ್ನಪ್ಪಿರುವ ಶಂಕೆಯೂ ವ್ಯಕ್ತವಾಗಿದೆ.
ಇಂದು ಒಂದೇ ದಿನ 20 ಕೃಷ್ಣ ಮೃಗಗಳ ಸಾವು
ನವೆಂಬರ್ 13 ರಂದು ಮೃಗಾಲಯದಲ್ಲಿ 8 ಕೃಷ್ಣ ಮೃಗಗಳ ಸಾವು ಸಂಭವಿಸಿತ್ತು. ಆದರೆ, ಇಂದು ಒಂದೇ ದಿನ 20 ಕೃಷ್ಣ ಮೃಗಗಳು ಸಾವನ್ನಪ್ಪಿರುವುದು ಅಧಿಕಾರಿಗಳನ್ನು ಬೆಚ್ಚಿಬೀಳಿಸಿದೆ. ಏಕಾಏಕಿ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ಅರಣ್ಯ ಇಲಾಖೆ ಎಚ್ಚೆತ್ತುಕೊಂಡಿದೆ.
ಬ್ಯಾಕ್ಟೀರಿಯಾ ಇನ್ಫೆಕ್ಷನ್ ಶಂಕೆ
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೃಷ್ಣ ಮೃಗಗಳು ಬ್ಯಾಕ್ಟೀರಿಯಾ ಸೋಂಕಿನಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಎರಡು ದಿನಗಳ ಹಿಂದೆ ಮೃತಪಟ್ಟ ಮೃಗಗಳ ಮೃತದೇಹಗಳನ್ನು ವಿಶ್ಲೇಷಣೆಗೆ ಲ್ಯಾಬ್ ಗೆ ಕಳುಹಿಸಲಾಗಿತ್ತು.





