ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಯಾವುದೇ ಹಿನ್ನಡೆಯಾಗದಂತೆ ಎಚ್ಚರ ವಹಿಸಲು ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯಾದ್ಯಂತ ಒಟ್ಟು 6,086 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಅಧಿಕೃತವಾಗಿ ಒಪ್ಪಿಗೆ ನೀಡಿದೆ. ಈ ಕುರಿತು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ನಿರ್ದೇಶಕರಿಗೆ ಅನುಮತಿ ನೀಡಿ ಸರ್ಕಾರವು ಆದೇಶ ಹೊರಡಿಸಿದೆ.
ಈ ಬೃಹತ್ ನೇಮಕಾತಿ ಪ್ರಕ್ರಿಯೆಗಾಗಿ ಮತ್ತು ಉಪನ್ಯಾಸಕರಿಗೆ ಗೌರವ ಧನ ಪಾವತಿಸುವ ಉದ್ದೇಶದಿಂದ 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಬರೋಬ್ಬರಿ 8,520.00 ಲಕ್ಷ ರೂಪಾಯಿಗಳ ಅನುದಾನವನ್ನು ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಪ್ರಕಟಣೆ ಸ್ಪಷ್ಟಪಡಿಸಿದೆ. ಪಿಯುಸಿ ಹಂತವು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತ್ಯಂತ ಪ್ರಮುಖ ಘಟ್ಟವಾಗಿದೆ. ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳು, ಸಿಇಟಿ, ನೀಟ್, ಹಾಗೂ ಜೆಇಇನಂತಹ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಸಿದ್ಧರಾಗಬೇಕಿರುತ್ತದೆ. ಆದರೆ, ಗ್ರಾಮೀಣ ಹಾಗೂ ನಗರ ಪ್ರದೇಶದ ಅನೇಕ ಸರ್ಕಾರಿ ಕಾಲೇಜುಗಳಲ್ಲಿ ಕಾಯಂ ಉಪನ್ಯಾಸಕರ ಕೊರತೆ ಎದ್ದು ಕಾಣುತ್ತಿತ್ತು. ಇದರಿಂದ ಪಠ್ಯಕ್ರಮವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ತೊಂದರೆಯಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕವಿತ್ತು. ಇದನ್ನು ಅರಿತ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅತಿಥಿ ಉಪನ್ಯಾಸಕರ ನೇಮಕಕ್ಕೆ ಮಂಜೂರಾತಿ ನೀಡಿದೆ.





