ಕೋವಿಡ್ ನೆಪ ಹೇಳದೆ ಸಕಾಲದಲ್ಲಿ ಸೌಲಭ್ಯ ತಲುಪಿಸಿ:ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಡಿಸಿ ಕವಿತಾ ಎಸ್.ಮನ್ನಿಕೇರಿ ಸೂಚನೆ

 

 

 

 

ಚಿತ್ರದುರ್ಗ, ಜುಲೈ16:
ಕೋವಿಡ್-19ರ ನೆಪ ಹೇಳದೆ ದೌರ್ಜನ್ಯ ಪ್ರಕರಣಗಳಲ್ಲಿ ನೊಂದಿರುವ ಸಂತ್ರಸ್ಥರಿಗೆ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ 2021ನೇ ಸಾಲಿನ 3ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದಿರುವ ಸಂತ್ರಸ್ಥರಿಗೆ ಪರಿಹಾರ, ಪುನರ್ವಸತಿ ಸೇರಿದಂತೆ ಸರ್ಕಾರದ ಸೌಲಭ್ಯ ತಲುಪಿಸಲು ವಿಳಂಬ ಮಾಡದೇ ಸಕಾಲದಲ್ಲಿ ಸೌಲಭ್ಯ ತಲುಪಿಸಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಸಿದ್ದಮ್ಮ ಹಾಗೂ ಅರುಣ್ ಕುಮಾರ್ ಮಾತನಾಡಿ, ಭರಮಸಾಗರ ಹೋಬಳಿಯ ಇಸಾಮುದ್ರ ಗೊಲ್ಲರಹಟ್ಟಿಯ ಲಂಬಾಣಿಹಟ್ಟಿಯಲ್ಲಿ ಈಚೆಗೆ ವಿಷಾಹಾರ ಸೇವನೆಯಿಂದ ಮೃತಪಟ್ಟವರಿಗೆ ತಲಾ ರೂ.5ಲಕ್ಷ ಪರಿಹಾರ ಮಂಜೂರು ಮಾಡುವಂತೆ ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮಾಹಿತಿ ಸಂಗ್ರಹಿಸಲಾಗಿದ್ದು, ಪ್ರಯೋಗಾಲಯದ ವರದಿ ಹಾಗೂ ಪೊಲೀಸ್ ವರದಿ ಬಂದ ನಂತರ ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ಮಂಜೂರಾತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ತಿಳಿಸಿದರು.
ರೂ.88.64ಲಕ್ಷ ಪರಿಹಾರ: 2021ನೇ ಸಾಲಿನಲ್ಲಿ ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ 2021ರ ಫೆಬ್ರವರಿ 01 ರಿಂದ ಜೂನ್ 30ರವರೆಗೆ ಒಟ್ಟು 27 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು ರೂ.88,64,345/- ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಮತಾ ಸಭೆಗೆ ಮಾಹಿತಿ ನೀಡಿದರು.
ಪರಿಶಿಷ್ಟ ಜಾತಿಯ 23 ಪ್ರಕರಣಗಳು, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ 04 ಪ್ರಕರಣಗಳು ಸೇರಿ ಒಟ್ಟು 27 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.  03 ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರೂ.12,37,500 ಪರಿಹಾರ ಧನ ನೀಡಲಾಗಿದೆ. 01 ಅತ್ಯಾಚಾರ ಮತ್ತು 02 ಫೋಕ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ರೂ.4,00,000/- ಪರಿಹಾರ ಧನ ನೀಡಲಾಗಿದೆ. 18 ಜಾತಿ ನಿಂದನೆ, ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.14,25,000/- ಪರಿಹಾರ ಧನ ಮಂಜೂರು ಮಾಡಲಾಗಿದೆ. 03 ಪರಿಹಾರ, ಪುನರ್ವಸತಿಗೆ ಸಂಬಂಧಿಸಿದಂತೆ ರೂ.58,01,854/- ಪರಿಹಾರ ಧನ ಮಂಜೂರು ಮಾಡಲಾಗಿದೆ. ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ 2021ರ ಜನವರಿ 01 ರಿಂದ ಜೂನ್ 30 ರವರೆಗೆ ಹಿಂದಿನ ಬಾಕಿ ಇದ್ದ 62 ಪ್ರಕರಣಗಳು, ಜೂನ್ ಮಾಹೆಯ 04 ಪ್ರಕರಣಗಳು ಸೇರಿದಂತೆ ಒಟ್ಟು 66 ಪ್ರಕರಣಗಳು ಬಾಕಿ ಉಳಿದಿವೆ ಎಂದು ಸಭೆಗೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಪ್ರತ್ಯೇಕ ನ್ಯಾಯಾಲಯಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇಲಾಖೆ ಹಾಗೂ ಸರ್ಕಾರದ ಪ್ರಕ್ರಿಯೆ ಹಂತದಲ್ಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಮತಾ ತಿಳಿಸಿದರು.
ಸಭೆಯಲ್ಲಿ ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಮತಾ, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಭಕ್ತಪ್ರಹ್ಲಾದ್, ರಾಜಣ್ಣ, ಪೋಲಯ್ಯ, ಗೌರಮ್ಮ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿದರು. ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ಇದ್ದರು.

 

 

[t4b-ticker]

You May Also Like

More From Author

+ There are no comments

Add yours