ಕೋವಿಡ್-19 ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಿ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ.

 

 

 

 

ಚಿತ್ರದುರ್ಗ,ಆಗಸ್ಟ್16:
ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಿಗೆ ಯಾವುದೇ ಮಾನದಂಡ ಇಲ್ಲದ ಕಾರಣ ಹಾಗೂ ಈಗಾಗಲೇ  ಪ್ರಕಟಿಸಲಾಗಿರುವ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿ ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಇದೇ ಆಗಸ್ಟ್ 19 ರಿಂದ ಸೆಪ್ಟೆಂಬರ್ 3ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಯನ್ನು ಕೋವಿಡ್ ಮಾರ್ಗಸೂಚಿ ಅನುಸರಿಸಿ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲಿಸಿ, ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪರೀಕ್ಷಾ ಕೊಠಡಿಯಲ್ಲಿ ಅಗತ್ಯವಿರುವ ಮೂಲಸೌಕರ್ಯಗಳು ಕ್ರಮಬದ್ಧವಾಗಿಯೇ ಎಂದು ಪರೀಕ್ಷೆಗೂ ಮುನ್ನ ಪರಿಶೀಲನೆ ಮಾಡಿ ಅಗತ್ಯ ಕ್ರಮಕೈಗೊಂಡು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ಎಂದು ತಿಳಿಸಿದರು.
ಕೋವಿಡ್-19ರ ಸಂಭಾವ್ಯ ಮೂರನೇ ಅಲೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಬೇಕು. ಸೋಂಕು ದೃಢಪಟ್ಟ ಪ್ರಕರಣಗಳು ಕಂಡುಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ವ್ಯವಸ್ಥೆ ಮಾಡಿ, ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು. ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಬೇಕು  ಎಂದು ಹೇಳಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಶೋಭಾ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿಲ್ಲ. ಎಸ್‍ಎಸ್‍ಎಲ್‍ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಸರಾಸರಿ ಆಧಾರದ ಮೇಲೆ ದ್ವಿತೀಯ ಪಿಯು ಫಲಿತಾಂಶ ನೀಡಲಾಗಿದೆ. ಈ ವಾರ್ಷಿಕ ಪರೀಕ್ಷೆ ಫಲಿತಾಂಶ ತಿರಸ್ಕರಿಸಿ, ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 344 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

 

 

ಜಿಲ್ಲೆಯಲ್ಲಿ ಆರು ಪರೀಕ್ಷಾ ಕೇಂದ್ರಗಳು: ಜಿಲ್ಲೆಯಲ್ಲಿ 344 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಹಾಜರಾಗಲಿದ್ದು, ತಾಲ್ಲೂಕಿಗೆ ಒಂದರಂತೆ ಒಟ್ಟು ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಚಿತ್ರದುರ್ಗ ತಾಲ್ಲೂಕಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 86 ವಿದ್ಯಾರ್ಥಿಗಳು, ಮೊಳಕಾಲ್ಮೂರು ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 59 ವಿದ್ಯಾರ್ಥಿಗಳು, ಚಳ್ಳಕೆರೆ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 70 ವಿದ್ಯಾರ್ಥಿಗಳು, ಹೊಳಲ್ಕೆರೆ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 19 ವಿದ್ಯಾರ್ಥಿಗಳು, ಹಿರಿಯೂರು ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 55 ವಿದ್ಯಾರ್ಥಿಗಳು, ಹೊಸದುರ್ಗ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 55 ವಿದ್ಯಾರ್ಥಿಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 06 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ, ಅತಿ ಸೂಕ್ಷ್ಮ ಕೇಂದ್ರಗಳನ್ನು ಗುರುತಿಸಿಲ್ಲ, ಪರೀಕ್ಷೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್  ನಿಷೇಧಾಜ್ಞೆ ಹಾಗೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಬೇಕು. ಪರೀಕ್ಷೆ ಕೇಂದ್ರಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಗಾವಿ, ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪದವಿಪೂರ್ವ ಶಿಕ್ಷಣ ಇಲಾಖೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours