ಮಂಗಳೂರು, ಜು. 10: ಮಂಗಳೂರಿನ ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ಕಳೆದ ವರ್ಷ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಥಮ ಮಾಹಿತಿ ವರದಿ (ಎಫ್ಐಆರ್)ಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಕಳೆದ ವರ್ಷದ ಮಾರ್ಚ್ನಲ್ಲಿ ನಡೆದ ಘಟನೆಗೆ ಸಂಬಂಧಿಸಿ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಎಫ್ಐಆರ್ ಅನ್ನು ಪ್ರಶ್ನಿಸಿ ಶಾಸಕ ವೇದವ್ಯಾಸ ಕಾಮತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಕಾಮತ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಶಾಸಕ ವೇದವ್ಯಾಸ ಕಾಮತ್ ಹಾಗೂ ಇತರ ಆರೋಪಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ಶಾಸಕ ವೇದವ್ಯಾಸ ಕಾಮತ್, “ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ದಾಖಲಿಸಲಾದ ಸುಳ್ಳು ಪ್ರಕರಣವಾಗಿತ್ತು. ಹೈಕೋರ್ಟ್ ನೀಡಿರುವ ತೀರ್ಪು ನ್ಯಾಯದ ಗೆಲುವಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನನ್ನನ್ನು ಒಳಗೊಂಡಂತೆ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ ಸತ್ಯ ಹೆಚ್ಚು ಕಾಲ ಮರೆಮಾಚಲು ಸಾಧ್ಯವಿಲ್ಲ ಎಂಬುದನ್ನು ಈ ತೀರ್ಪು ಮತ್ತೊಮ್ಮೆ ಸಾಬೀತುಪಡಿಸಿದೆ” ಎಂದು ತಿಳಿಸಿದ್ದಾರೆ.



