ಕೈಕಂಬ: ಮೂಡುಬಿದಿರೆ-ಮಂಗಳೂರು ರಾಷ್ಟ್ರೀಯ ಹೆದ್ದಾರಿ-169ರ ಗಂಜಿಮಠ ಸಮೀಪದ ಸೂರಲ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿರುವ ನೂತನ ಟೋಲ್ಗೇಟ್ ಪ್ರದೇಶದಲ್ಲಿ ಭಾನುವಾರ ಸಂಜೆ ಖಾಸಗಿ ಎಕ್ಸ್ಪ್ರೆಸ್ ಬಸ್ ರಸ್ತೆ ಬದಿಯ ಸಿಮೆಂಟ್ ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.


ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಎಕ್ಸ್ಪ್ರೆಸ್ ಬಸ್ ಸೂರಲ್ಪಾಡಿ ಸಮೀಪ ಸಾಗುತ್ತಿದ್ದ ವೇಳೆ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಯು ಏಕಾಏಕಿ ಎಡಭಾಗಕ್ಕೆ ತಿರುಗಿದೆ. ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಬಲಭಾಗಕ್ಕೆ ತಿರುಗಿಸಿದಾಗ ವಾಹನದ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಸಿಮೆಂಟ್ ಬ್ಯಾರಿಕೇಡ್ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿಗೆ ಸ್ಥಳೀಯರು ತಕ್ಷಣ ನೆರವು ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬಗ್ಗೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.



