ನವದೆಹಲಿ, ಆ. 4: ಫುಕೆಟ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಇಂದು ಆಗಸದಲ್ಲಿ ಹಾರಾಟ ನಡೆಸುತ್ತಿದ್ದಾಗ ಭಾರಿ ಗಾಳಿಗೆ ಸಿಲುಕಿದೆ. ಫುಕೆಟ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನವು ಆಗಸದಲ್ಲಿ ತೀವ್ರ ಸ್ವರೂಪದ ಗಾಳಿಗೆ ಸಿಲುಕಿ, ಕ್ಷಣಾರ್ಧದಲ್ಲಿ ಬರೋಬ್ಬರಿ 300 ಅಡಿ ಕೆಳಕ್ಕೆ ಕುಸಿದ ಪರಿಣಾಮವಾಗಿ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಸೇರಿದಂತೆ 14 ಜನರು ಗಾಯಗೊಂಡಿದ್ದಾರೆ. ವಿಮಾನವು ಇದ್ದಕ್ಕಿದ್ದಂತೆ ಸುಮಾರು 300 ಅಡಿಗಳಷ್ಟು ಆಳಕ್ಕೆ ಧುಮುಕಿದ್ದರಿಂದ ಒಳಗಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾದರು. ಸೀಟ್ ಬೆಲ್ಟ್ ಧರಿಸದಿದ್ದ ಪ್ರಯಾಣಿಕರು ಹಾಗೂ ಕರ್ತವ್ಯದಲ್ಲಿದ್ದ ವಿಮಾನದ ಸಿಬ್ಬಂದಿ ವಿಮಾನದ ಸೀಲಿಂಗ್ಗೆ ಬಡಿದು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪ್ರಯಾಣಿಕರು ಮತ್ತು ವಿಮಾನದ ಸಿಬ್ಬಂದಿ ಕೂಡ ಸೇರಿದ್ದಾರೆ.

ವಿಮಾನದಲ್ಲಿ ಉಂಟಾದ ತೀವ್ರ ಆತಂಕದ ವಾತಾವರಣದ ನಡುವೆಯೂ ಏರ್ ಇಂಡಿಯಾ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯುವಲ್ಲಿ ಯಶಸ್ವಿಯಾಗಿದೆ. ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ತುರ್ತು ವೈದ್ಯಕೀಯ ತಂಡವು ಸ್ಥಳಕ್ಕೆ ಧಾವಿಸಿ, ಗಾಯಗೊಂಡವರಿಗೆ ತಕ್ಷಣದ ಪ್ರಥಮ ಚಿಕಿತ್ಸೆ ನೀಡಿದೆ. ತೀವ್ರವಾಗಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರಗಳಲ್ಲಿ ವಿಮಾನದ ಒಳಗಿನ ಸೀಲಿಂಗ್ ಪ್ಯಾನೆಲ್ಗಳು ಜಖಂಗೊಂಡಿರುವುದು ಕಂಡುಬಂದಿದೆ. ಆರಂಭಿಕ ಮಾಹಿತಿಯ ಪ್ರಕಾರ, ಹಾರಾಟದ ಸಮಯದಲ್ಲಿ ವಿಮಾನವು ತಕ್ಷಣವೇ ಸುಮಾರು 300 ಅಡಿ ಕೆಳಕ್ಕೆ ಧುಮುಕಿದೆ ಎಂದು ಪೈಲಟ್ ತಿಳಿಸಿದ್ದಾರೆ. ಆಗಸದಲ್ಲೇ ವಿಮಾನ ಪಲ್ಟಿ ಹೊಡೆಯುತ್ತಾ ಕುಸಿದ ಕಾರಣದಿಂದ ಶೇ. 80ರಷ್ಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಒಟ್ಟು 14 ಜನರಿಗೆ ಹೆಚ್ಚಿನ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆಯ ಕುರಿತು ಪ್ರಕಟಣೆ ಹೊರಡಿಸಿರುವ ಏರ್ ಇಂಡಿಯಾ, “ಆಗಸ್ಟ್ 4ರಂದು ಫುಕೆಟ್ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ AI2379 ವಿಮಾನವು ಹಾರಾಟದ ಮಧ್ಯೆ ಹಠಾತ್ ಗಾಳಿಗೆ ಸಿಲುಕಿ ಕೆಲ ಕ್ಷಣಗಳ ಕಾಲ ಆಗಸದಲ್ಲೇ ಹೊಯ್ದಾಡಿತು ಎಂಬುವುದನ್ನು ದೃಢಪಡಿಸುತ್ತೇವೆ” ಎಂದು ಹೇಳಿದೆ. “ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಮುನ್ನೆಚ್ಚರಿಕೆ ವಹಿಸಿ ಸಣ್ಣಪುಟ್ಟ ಗಾಯಗೊಂಡ ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗಾಗಿ ವಿಮಾನ ನಿಲ್ದಾಣದ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆಯಾಗಿದೆ. ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಲಾಗುತ್ತಿದ್ದು, ತನಿಖೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ” ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.



