ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಖಾಸಗಿ ಶಾಲಾ ಶಿಕ್ಷಕರ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮುನ್ಸೂಚನೆ ನೀಡಿದೆ. ಸರ್ಕಾರಿ ಶಾಲಾ ಶಿಕ್ಷಕರ ಮಾದರಿಯಲ್ಲೇ ಖಾಸಗಿ ಶಾಲೆಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಅರ್ಹ ಬೋಧಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.


ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ವಿಷಯವನ್ನ ಹಂಚಿಕೊಂಡರು.
ಖಾಸಗಿ ಶಾಲೆಗಳ ಶಿಕ್ಷಕರು ಕೂಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಅಪಾರ ಶ್ರಮ ವಹಿಸುತ್ತಿದ್ದಾರೆ. ಹೀಗಾಗಿ, ಅವರ ಸೇವೆಯನ್ನ ಗುರುತಿಸಿ ರಾಜ್ಯ ಪ್ರಶಸ್ತಿಗೆ ಪರಿಗಣಿಸಬೇಕು ಎಂಬ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಕುರಿತು ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಸಂಬಂಧಪಟ್ಟ ವೇದಿಕೆಗಳಲ್ಲಿ ಸಮಗ್ರವಾಗಿ ಚರ್ಚಿಸಿ ಮುಂಬರುವ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಅಲ್ಲದೆ, ಖಾಸಗಿ ಶಾಲೆಗಳು ಸರ್ಕಾರಕ್ಕೆ ನಿಗದಿತ ಶುಲ್ಕ ಪಾವತಿಸಿ ಸರ್ಕಾರಿ ಪಠ್ಯಪುಸ್ತಕಗಳನ್ನ ಪಡೆಯಲು ಸಲ್ಲಿಸಿರುವ ಮನವಿಯನ್ನ ಸಹ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.



