ಮಂಗಳೂರು, ಸೆ.18: ಸಿಎಂ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ಕರ್ನಾಟಕ ಸಚಿವ ಸಂಪುಟದ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಸುಮಾರು 32,611 ಕೋಟಿ ರೂ. ಮೊತ್ತದ ಯೋಜನೆಗಳು ಹಾಗೂ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.


ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಕರಾವಳಿ ಭಾಗದ ಅಭಿವೃದ್ಧಿ ಅಗತ್ಯಗಳಿಗೆ ಸಂಬಂಧಿಸಿದಂತೆ ಮೀನುಗಾರರು, ಕೈಗಾರಿಕೋದ್ಯಮಿಗಳು, ಸ್ಥಳೀಯ ನಿವಾಸಿಗಳು ಹಾಗೂ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಬಂದಿದ್ದವು” ಎಂದು ತಿಳಿಸಿದರು.”ಗ್ರಾಮೀಣಾಭಿವೃದ್ಧಿಗೆ ಸುಮಾರು 16,000 ಕೋಟಿ ರೂ. ಮೀಸಲಿಡಲಾಗಿದ್ದು, ಮತ್ತೊಂದು 16,000 ಕೋಟಿ ರೂ. ಮಂಗಳೂರು, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಹಂಚಿಕೆ ಮಾಡಲಾಗಿದೆ. ವೈಯಕ್ತಿಕ ಯೋಜನೆಗಳು ಹಾಗೂ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಯೋಜನೆಗಳ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೆಚ್ಚಿನ ವಿವರಗಳನ್ನು ನೀಡಲಿದ್ದಾರೆ” ಎಂದು ಮಾಹಿತಿ ನೀಡಿದರು.”ಮುಂದಿನ ದಿನಗಳಲ್ಲಿ ಬಾಕಿ ಇರುವ ಬೇಡಿಕೆಗಳು ಹಾಗೂ ವಿವಿಧ ಪ್ರಸ್ತಾವನೆಗಳನ್ನು ಆರ್ಥಿಕ ಮತ್ತು ಕಾನೂನು ಸಾಧ್ಯತೆಗಳನ್ನು ಪರಿಗಣಿಸಿ ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗುವುದು. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಿರುವುದು ವಿಶೇಷ ಮಹತ್ವ ಹೊಂದಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೆಂಗಳೂರಿನ ಹೊರಗೆ ನಡೆದ ಮೊದಲ ಸಚಿವ ಸಂಪುಟ ಸಭೆ ಇದಾಗಿದೆ” ಎಂದರು.”ತುಳುನಾಡಿನ ಜನರು, ಯುವಜನರು, ಪೋಷಕರು ಹಾಗೂ ಮಾಧ್ಯಮಗಳು ತೋರಿದ ಪ್ರೀತಿ, ವಿಶ್ವಾಸ ಮತ್ತು ಬೆಂಬಲಕ್ಕೆ ಧನ್ಯವಾದ. ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಸರ್ಕಾರದ ಆದ್ಯತೆ ಜನರ ಜೀವನೋಪಾಯ ಮತ್ತು ಸಾಮಾಜಿಕ ನ್ಯಾಯಕ್ಕೆ ಇರಲಿದೆ. ಕೇವಲ ಭಾವನೆಗಳನ್ನು ಆಧರಿಸಿದ ರಾಜಕಾರಣಕ್ಕೆ ಆದ್ಯತೆ ನೀಡುವುದಿಲ್ಲ” ಎಂದು ಹೇಳಿದರು.”ವಿವಿಧ ರಾಜಕೀಯ ಪಕ್ಷಗಳಿಗೆ ಸೇರಿದ ಶಾಸಕರು, ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರು ಕರಾವಳಿ ಭಾಗದ ವಿವಿಧ ಸಮಸ್ಯೆಗಳು ಮತ್ತು ಪ್ರಾದೇಶಿಕ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಈ ಕುರಿತು ಮಂಗಳೂರು ಮತ್ತು ಬೆಂಗಳೂರಿನಲ್ಲಿ ಸಭೆಗಳನ್ನು ನಡೆಸಲಾಗಿದ್ದು, ಚುನಾಯಿತ ಪ್ರತಿನಿಧಿಗಳೊಂದಿಗೆ ನೇರವಾಗಿ ಸಮಾಲೋಚನೆಯನ್ನೂ ನಡೆಸಲಾಗಿದೆ” ಎಂದು ವಿವರಿಸಿದರು.”ಸರ್ಕಾರವು ‘ಟೀಮ್ ಕರ್ನಾಟಕ’ವಾಗಿ ಕಾರ್ಯನಿರ್ವಹಿಸಲಿದೆ. ಯಾವುದೇ ವ್ಯಕ್ತಿ ಅಥವಾ ನಿರ್ದಿಷ್ಟ ಪ್ರದೇಶದ ಹಿತಾಸಕ್ತಿಗೆ ಸೀಮಿತವಾಗದೆ, ರಾಜ್ಯದಾದ್ಯಂತ ಸಮತೋಲಿತ ಅಭಿವೃದ್ಧಿಗೆ ಒತ್ತು ನೀಡಲಾಗುವುದು” ಎಂದು ತಿಳಿಸಿದರು.



