ಕರ್ನಾಟಕ ವಿಧಾನಮಂಡಲ ವಿಶೇಷ ಅಧಿವೇಶನ: ಇಂದಿನಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ರಾಜ್ಯದ ಬರ ಪರಿಸ್ಥಿತಿ ಹಾಗೂ ಕಸ್ತೂರಿರಂಗನ್ ವರದಿ ಪ್ರಮುಖ ಅಜೆಂಡಾಗಳಾಗಿವೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಬಿಜೆಪಿ ವಾಗ್ದಾಳಿ ನಡೆಸಲು ಸಿದ್ಧವಾಗಿದ್ದರೆ, ಇದಕ್ಕೆ ತಿರುಗೇಟು ನೀಡಲು ಕಾಂಗ್ರೆಸ್ ಕೂಡ ಸಜ್ಜಾಗಿದೆ.


ಕಳೆದ ತಿಂಗಳು 11 ದಿನಗಳ ಮುಂಗಾರು ಅಧಿವೇಶನ ಗದ್ದಲದಲ್ಲೇ ಮುಗಿದಿತ್ತು. ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದು ಪ್ರತಿದಿನ ಧರಣಿ, ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಗಿತ್ತು. ಬರ ಸೇರಿದಂತೆ ಯಾವುದೇ ಸಮಸ್ಯೆಗಳ ಬಗ್ಗೆ ಚರ್ಚೆಯಾಗದೆ ಮೂರು ದಿನ ಮೊದಲೇ ಅಧಿವೇಶನವನ್ನು ಮೊಟಕುಗೊಳಿಸಲಾಗಿತ್ತು.
ಆದರೆ, ಇದೀಗ ಬರ ಪರಿಸ್ಥಿತಿ ಮತ್ತು ಕಸ್ತೂರಿರಂಗನ್ ವರದಿ ಕರಡು ಅಧಿಸೂಚನೆಯಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಜನರ ಮೇಲಾಗುವ ಪರಿಣಾಮಗಳ ಬಗ್ಗೆ ಗಂಭೀರ ಚರ್ಚೆ ನಡೆಸಲು ಸರ್ಕಾರ ಮೂರು ದಿನಗಳ ವಿಶೇಷ ಅಧಿವೇಶನ ನಡೆಸುತ್ತಿದೆ. ಬೆಳಗ್ಗೆ 11 ಗಂಟೆಗೆ ಸದನ ಆರಂಭವಾಗಲಿದ್ದು, ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.



