ಬೆಂಗಳೂರು, ಸೆ. 23: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಂಗಳವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ಕಾರದ ಯೋಜನೆಗಳ ಅನುಷ್ಠಾನ, ಗ್ಯಾರಂಟಿ ಯೋಜನೆಗಳು, ಬರ ನಿರ್ವಹಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಸಭೆಯಲ್ಲಿ ಎರಡು ಪ್ರಮುಖ ವಿಚಾರಗಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಒತ್ತು ನೀಡಿದ್ದಾರೆ.


ಭಾರತ್ ಜೋಡೋ ಯುವಕ ಸಂಘದ ಅನುಷ್ಠಾನ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಶಾಸಕರಿಗೆ ಸೂಚನೆ ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿ ಗ್ಯಾರಂಟಿ ಸಮಿತಿಗೆ ಆರು ಮಂದಿಯ ಹೆಸರನ್ನು ಶಾಸಕರು ಶಿಫಾರಸು ಮಾಡಬೇಕು. ಆದರೆ, ಇದುವರೆಗೆ ಹಲವು ಶಾಸಕರು ಹೆಸರು ಶಿಫಾರಸು ಮಾಡಿಲ್ಲ. ಈ ವಿಚಾರವನ್ನು ಹೈಕಮಾಂಡ್ ಕೂಡ ಗಂಭೀರವಾಗಿ ಪರಿಗಣಿಸಿದೆ ಎಂದು ಶಾಸಕರಿಗೆ ಮುಖ್ಯಮಂತ್ರಿ ಎಚ್ಚರಿಕೆ ನೀಡಿದ್ದಾರೆ.
ಆದರೆ ದ.ಕ. ಜಿಲ್ಲೆಯ ಕಾಂಗ್ರೆಸ್ ಮುಖಂಡ ಶೇಖರ ಕುಕ್ಕೇಡಿಯವರ ಬೇಡಿಕೆಯ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆಯಾ ಅನ್ನುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿಯ ವಿವಿಧ ಧಾರ್ಮಿಕ ಕೇಂದ್ರ ಸಾಮಾಜಿಕ ಕಾರ್ಯಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಘೋಷಿಸಲಾಗಿತ್ತು. ಆದರೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ ಕುಕ್ಕೇಡಿಯವರು ಸಮುದಾಯದ ಪರ ಇರಿಸಿದ ಬೇಡಿಕೆಗಳನ್ನು ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಅವರು ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಈ ಬಗ್ಗೆ ತಾಲೂಕು, ಜಿಲ್ಲಾ ಮುಖಂಡರು ಸಿಎಂ ಹಾಗೂ ರಾಜ್ಯ ನಾಯಕರ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದರು. ಆದರೆ ನಿನ್ನೆ ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ಯಾವುದೇ ಪ್ರಸ್ತಾಪವಾಗಿಲ್ಲ ಎನ್ನಲಾಗಿದೆ. ತಾಲೂಕು ಹಾಗೂ ಜಿಲ್ಲಾ ಮುಖಂಡರು ಈ ಬಗ್ಗೆ ರಾಜ್ಯ ನಾಯಕರ ಗಮನಕ್ಕೆ ತಂದಿಲ್ಲವೇ ಅಥವಾ ರಾಜ್ಯ ನಾಯಕರು ಇವರ ಬೇಡಿಕೆಗಳಿಗೆ ಮನ್ನಣೆ ನೀಡಿಲ್ಲವೇ ಅನ್ನುವ ಚರ್ಚೆ ಕಾರ್ಯಕರ್ತರ ವಲಯದಲ್ಲಿ ಶುರವಾಗಿದೆ.



