ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ ಚಟುವಟಿಕೆಗೆ ಪೋತ್ಸಾಹಿಸುವುದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚಿಸಿದ್ದಾರೆ.


ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ಮಂಗಳಮುಖಿಯರು ನಿಂತು ವಾಹನ ಸವಾರರಿಗೆ ತೊಂದರೆ ಮಾಡುವ ಬಗ್ಗೆ ಹಲವಾರು ದೂರುಗಳು ಕೇಳಿ ಬಂದಿವೆ. ಈ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲದಂತೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಇದೇ ರೀತಿ ಸಮಸ್ಯೆ ಮುಂದುವರಿದರೆ ಕ್ರಮ ಕೈಗೊಳ್ಳುವಂತೆ ಪೋಲಿಸರಿಗೆ ಸೂಚಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಟ್ರಾನ್ಸ್ಜೆಂಡರ್ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ಹೊರರಾಜ್ಯದ ಮಂಗಳಮುಖಿಯರು ಮಂಗಳೂರಿಗೆ ಬಂದು ಅಕ್ರಮ ಚಟುವಟಿಕೆಗಳಲ್ಲಿ ತೊಡಗುತ್ತಿದ್ದು, ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹೇಳಿದರು.


