ಮಂಗಳೂರು, ನ.12 ಚರ್ಚ್ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ ವಿರುದ್ಧ ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ. ಈಗಾಗಲೇ 14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪಾದ್ರಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ 13 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಕೇಂದ್ರ ಉಪವಿಭಾಗದ ಎಸಿಪಿಗೆ ವಹಿಸಲಾಗಿದೆ.




ಬಿಷಪ್ ವಿರುದ್ಧ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ
ಈ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿರುವುದು ಮೈಸೂರು ಮೂಲದ ಒಡನಾಡಿ ಸೇವಾ ಸಂಸ್ಥೆ ಮಾಡಿರುವ ಗಂಭೀರ ಆರೋಪ. ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಪೀಟರ್ ಪೌಲ್ ಸಲ್ಡಾನ ಅವರು ಪಾದ್ರಿ ವಿರುದ್ಧದ ದೂರುಗಳ ಬಗ್ಗೆ ಮೊದಲೇ ಮಾಹಿತಿ ಹೊಂದಿದ್ದರೂ ಪೊಲೀಸರಿಗೆ ದೂರು ನೀಡದೆ ಆಂತರಿಕ ತನಿಖೆ ನಡೆಸುವ ಮೂಲಕ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಆಗಸ್ಟ್ನಲ್ಲಿಯೇ ಐವರು ಬಾಲಕರು ಹಾಗೂ ಅವರ ಪೋಷಕರು ಬಿಷಪ್ ಅವರನ್ನು ಭೇಟಿಯಾಗಿ ದೂರು ನೀಡಿದ್ದರು ಎನ್ನಲಾಗಿದೆ.


ಆದರೆ ಗಂಭೀರ ಸ್ವರೂಪದ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪವಿದ್ದರೂ ಪೊಲೀಸ್ ದೂರು ದಾಖಲಿಸುವ ಬದಲು ಚರ್ಚ್ ಮಟ್ಟದಲ್ಲಿ ವಿಚಾರಣೆ ನಡೆಸಲಾಗಿದೆ ಎಂಬುದು ಒಡನಾಡಿ ಸಂಸ್ಥೆಯ ಆಕ್ಷೇಪ. ಪೋಕ್ಸೋ ಕಾಯಿದೆ 2012ರ ಸೆಕ್ಷನ್ 19 ಮತ್ತು 21ರ ಅಡಿಯಲ್ಲಿ ಮಾಹಿತಿ ನೀಡುವ ಕಡ್ಡಾಯ ಜವಾಬ್ದಾರಿಯನ್ನು ಪಾಲಿಸಿಲ್ಲ ಎಂದು ಆರೋಪಿಸಿ ಬಿಷಪ್ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸಂಸ್ಥೆ ದೂರು ನೀಡಿದೆ.
