ಮಂಗಳೂರು, ನ.22: ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವಜನತೆ ತಂಬಾಕು ವ್ಯಸನಕ್ಕೆ ಬಲಿಯಾಗುತ್ತಿರುವ ಆತಂಕದ ನಡುವೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯಲ್ಲಿ ಬಿಡಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಇನ್ಮುಂದೆ ಅಂಗಡಿ, ಹೋಟೆಲ್ಗಳಿಗೆ ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಅಥವಾ ನವೀಕರಿಸುವಾಗ ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಬಿಡಿಯಾಗಿ ಮಾರಾಟ ಮಾಡುವಂತಿಲ್ಲ’ ಎಂಬ ಎಚ್ಚರಿಕೆ ಸಂದೇಶ ಪ್ರದರ್ಶಿಸುವುದು ಕಡ್ಡಾಯವಾಗಲಿದೆ. ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ಪರವಾನಗಿಯನ್ನೇ ರದ್ದುಗೊಳಿಸುವ ಎಚ್ಚರಿಕೆಯನ್ನೂ ಅಧಿಕಾರಿಗಳು ನೀಡಿದ್ದಾರೆ




ಅಂಗಡಿ, ಹೋಟೆಲ್ಗಳಿಗೆ ಹೊಸ ನಿಯಮ ಜಾರಿ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಮಹತ್ವದ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ನವೀಕರಿಸುವಾಗ ಈ ಷರತ್ತನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ನಿರ್ದೇಶಿಸಿದ್ದಾರೆ.

