ಉಡುಪಿ, ಜು. 25: ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಅಕ್ಕ ಸ್ಕ್ವಾಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಡುಪಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆಹಚ್ಚಿದ್ದಾರೆ. ಬಳಿಕ ಬಾಲಕನನ್ನು ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ನಿಯಂತ್ರಣ ಕೊಠಡಿಯಿಂದ ಅಕ್ಕ ಸ್ಕ್ವಾಡ್ಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ದೊರೆಯುತ್ತಿದ್ದಂತೆಯೇ ಅಕ್ಕ ಸ್ಕ್ವಾಡ್ ಸಿಬ್ಬಂದಿ ಬಾಲಕನ ಪತ್ತೆಗಾಗಿ ತಕ್ಷಣವೇ ಶೋಧ ಕಾರ್ಯಾಚರಣೆ ಆರಂಭಿಸಿದರು.ಉಡುಪಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ, ಮುದ್ದೇಬಿಹಾಳ ಕಡೆಗೆ ತೆರಳುತ್ತಿದ್ದ ಬಸ್ನಲ್ಲಿ ನಾಪತ್ತೆಯಾಗಿದ್ದ ಬಾಲಕ ಪ್ರಯಾಣಿಸುತ್ತಿರುವುದು ಸಿಬ್ಬಂದಿಯ ಗಮನಕ್ಕೆ ಬಂದಿದೆ. ತಕ್ಷಣವೇ ಬಸ್ನ್ನು ತಡೆದು ಬಾಲಕನನ್ನು ಸುರಕ್ಷಿತವಾಗಿ ವಶಕ್ಕೆ ಪಡೆದ ಅಕ್ಕ ಸ್ಕ್ವಾಡ್ ಸಿಬ್ಬಂದಿ, ಮುಂದಿನ ಕಾನೂನು ಕ್ರಮಕ್ಕಾಗಿ ಮಹಿಳಾ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



