ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದಿದೆ. ಈ ಘಟನೆಯಲ್ಲಿ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಚಿತ್ರದುರ್ಗ, ಡಿ.25: ಆಂಧ್ರ ಪ್ರದೇಶದ ಕರ್ನೂಲ್ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದೆ. ಕ್ರಿಸ್ಮಸ್ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ನೆನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ಸೊಂದು ಹೊತ್ತಿಉರಿದಿದೆ. ಖಾಸಗಿ ಸ್ಲೀಪರ್ ಕೋಚ್ ಬಸ್ನಲ್ಲಿದ್ದ 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ ಎಂದು ಪೂರ್ವ ವಲಯ ಐಜಿಪಿ ರವಿಕಾಂತೇಗೌಡ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಕರ್ನೂಲ್ ಬಳಿ ಹೊತ್ತಿ ಉರಿದ ಖಾಸಗಿ ಬಸ್: 20 ಜನ ಸಾವು
ಆಂಧ್ರ ಪ್ರದೇಶದ ಕರ್ನೂಲ್ ಸಮೀಪ 41 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ ಬಸ್ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಕೆಲವರು ಹೊರಹಾರಿ ಪ್ರಾಣ ಉಳಿಸಿಕೊಂಡಿದ್ದರೆ ಹಲವರು ಬೆಂಕಿ ಕೆನ್ನಾಲೆಗೆ ಸಿಲುಕಿ ಜೀವ ಕಳೆದುಕೊಂಡಿದ್ದರು. ಘಟನೆಯಲ್ಲಿ ಬೆಂಗಳೂರಲ್ಲಿ ನೆಲೆಸಿದ್ದ ಕುಟುಂಬ ಸೇರಿ 20 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಇದೀಗ ಇಂತಹದೇ ಮತ್ತೊಂದು ಘಟನೆ ನಡೆದಿದೆ.






