ವೇಣೂರು, ಜುಲೈ 29: ಕುಂಭಶ್ರೀ ಪದವಿ ಪೂರ್ವ ಕಾಲೇಜು, ನಿಟ್ಟಡೆ–ವೇಣೂರಿನಲ್ಲಿ ದಿನಾಂಕ 28-07-2026 ರಂದು ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಮಾದಕ ವಸ್ತು ವಿರೋಧಿ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂಭಶ್ರೀ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವೇಣೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ರೀಮತಿ ಓಮನಾ ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಭಾಗವಹಿಸಿದರು.
ತಮ್ಮ ಭಾಷಣದಲ್ಲಿ ಠಾಣಾಧಿಕಾರಿ ಶ್ರೀಮತಿ ಓಮನಾ ಅವರು, ವಿದ್ಯಾರ್ಥಿಗಳು ಮಾದಕ ವಸ್ತುಗಳ ಆಮಿಷಕ್ಕೆ ಒಳಗಾಗದೆ ಶಿಕ್ಷಣ, ಶಿಸ್ತು ಮತ್ತು ಉತ್ತಮ ಮೌಲ್ಯಗಳಿಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಮಾದಕ ವ್ಯಸನವು ವ್ಯಕ್ತಿ, ಕುಟುಂಬ ಹಾಗೂ ಸಮಾಜಕ್ಕೆ ಮಾರಕವಾಗಿದ್ದು, ಅದರ ವಿರುದ್ಧ ಜಾಗೃತಿಯೇ ಅತ್ಯಂತ ಪರಿಣಾಮಕಾರಿ ಅಸ್ತ್ರ ಎಂದು ತಿಳಿಸಿದರು. ವಿದ್ಯಾರ್ಥಿಗಳು ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಶಿಕ್ಷಕರು ಅಥವಾ ಪೊಲೀಸರಿಗೆ ಮಾಹಿತಿ ನೀಡುವಂತೆ ಸಲಹೆ ನೀಡಿದರು.
ಪ್ರಾಂಶುಪಾಲರಾದ ಶ್ರೀನಿವಾಸ್ ನಾಯ್ಕ್ ಅವರು ಮಾತನಾಡಿ, ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಇದುವರೆಗೆ ಯಾವುದೇ ರೀತಿಯ ಮಾದಕ ವಸ್ತುಗಳ ಬಳಕೆ ಅಥವಾ ಮಾದಕ ವ್ಯಸನಕ್ಕೆ ಸಂಬಂಧಿಸಿದ ಘಟನೆಗಳು ಕಂಡುಬಂದಿಲ್ಲ ಎಂಬುದು ಹೆಮ್ಮೆಯ ಸಂಗತಿ ಎಂದರು. ವಿದ್ಯಾರ್ಥಿಗಳು ಇದೇ ಶಿಸ್ತು ಮತ್ತು ಉತ್ತಮ ಮೌಲ್ಯಗಳನ್ನು ಮುಂದುವರಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು.
ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕ ಸಂತೋಷ್ ಅವರು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಶರಣ್ಯ ಕೆ. ಎಸ್. ಕಾರ್ಯಕ್ರಮ ನಿರೂಪಿಸಿದರು. ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಭಿಲಾಷ್ ಕಾಮತ್ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಪೊಲೀಸ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, “ಮಾದಕ ಮುಕ್ತ ಸಮಾಜ ನಿರ್ಮಾಣಕ್ಕೆ ನಾವು ಬದ್ಧರಾಗಿರುತ್ತೇವೆ” ಎಂಬ ಸಂಕಲ್ಪವನ್ನು ಕೈಗೊಂಡರು.



