ಬೆಂಗಳೂರು, ನ. 25: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಗೌರವಧನವನ್ನು ₹15,000ಕ್ಕೆ ಹೆಚ್ಚಿಸಬೇಕು ಹಾಗೂ ಈ ಕುರಿತು ಸರ್ಕಾರದಿಂದ ಲಿಖಿತ ಭರವಸೆ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ.




ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು, ಪುಟ್ಟ ಮಕ್ಕಳೊಂದಿಗೆ ಮಳೆ, ಚಳಿ, ಬಿಸಿಲನ್ನೂ ಲೆಕ್ಕಿಸದೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಇದುವರೆಗೂ 15-20ಕ್ಕೂ ಹೆಚ್ಚು ಕಾರ್ಯಕರ್ತೆಯರು ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಳೆ ಸುರಿದ ಕಾರಣ ಫ್ರೀಡಂ ಪಾರ್ಕ್ನಲ್ಲಿ ಕೊಚ್ಚೆ, ಗಲೀಜು ತುಂಬಿದ್ದು, ಹಲವರು ರಸ್ತೆ ಬದಿಯಲ್ಲೇ ಟಾರ್ಪಾಲ್ ಹಾಕಿಕೊಂಡು ಮಲಗುವ ಸ್ಥಿತಿ ನಿರ್ಮಾಣವಾಗಿದೆ.

ಈ ಹಿಂದೆ ನಡೆದ ಯು.ಟಿ. ಖಾದರ್ ಮತ್ತು ಮುಖ್ಯಮಂತ್ರಿ ಅವರೊಂದಿಗಿನ ಎರಡು ಸಂಧಾನ ಸಭೆಗಳು ವಿಫಲವಾಗಿವೆ. ಮುಖ್ಯಮಂತ್ರಿ ಅವರು ಜಪಾನ್ನಿಂದಲೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಿ ಪ್ರತಿಭಟನೆ ಹಿಂಪಡೆಯುವಂತೆ ಮನವಿ ಮಾಡಿದ್ದರು. ಆದರೆ, ಮಾತಿನ ಭರವಸೆಗಳು ಬೇಡ, ಲಿಖಿತ ಭರವಸೆ ಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.
