ದೌರ್ಜನ್ಯ ಪ್ರಕರಣ ತಡೆಗಾಗಿ ಜಾಗೃತಿ ಅರ್ಥಪೂರ್ಣವಾಗಿರಲಿ:ಡಿಸಿ ದಿವ್ಯ ಪ್ರಭು ಜಿ.ಆರ್.ಜೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮಾರ್ಚ್15:
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗದೇ ನಾಟಕ, ಹಾಡುಗಳ ಮೂಲಕ ಸಾರ್ವಜನಿಕರಿಗೆ ಕಾನೂನಿನ ತಿಳುವಳಿಕೆ ನೀಡಿ, ಅರ್ಥಪೂರ್ಣವಾಗಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ 2023ನೇ ಸಾಲಿನ 1ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಅತ್ಯವಶ್ಯಕವಾಗಿದ್ದು, ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಜಾಗೃತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದರು.
ಚಳ್ಳಕೆರೆ ಹಾಗೂ ಮೊಳಕಾಲ್ಮುರು ತಾಲ್ಲೂಕು ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರು ಹೆಚ್ಚು ಇರುವ ಕಡೆ ಗಮನಹರಿಸಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರ ಸಮಕ್ಷಮದಲ್ಲಿ ಜಾಗೃತಿ ಮೂಡಿಸಬೇಕು. ದೌರ್ಜನ್ಯ ಪ್ರಕರಣಗಳಿಗೆ ತ್ವರಿತವಾಗಿ ಪರಿಹಾರಧನ ನೀಡಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳ ಸಂಖ್ಯೆ ಎಷ್ಟಿದೆ? ಇದರಲ್ಲಿ ಎಷ್ಟು ಮಕ್ಕಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದ್ದಾರೆ? ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದ ಬಾಕಿ ಇರುವ ವಿದ್ಯಾರ್ಥಿಗಳ ಸಂಖ್ಯೆ ಎಷ್ಟು? ಎಂಬ ಸಂಪೂರ್ಣವಾದ ವಿವರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ ಮಾತನಾಡಿ, ಮೊಳಕಾಲ್ಮುರು ತಾಲ್ಲೂಕಿನಲ್ಲಿ ಹೆಚ್ಚು ಅಸ್ಪಶ್ಯತೆ ಆಚರಣೆ, ದೌರ್ಜನ್ಯಗಳು ನಡೆಯುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು,  ಹಾಗಾಗಿ ಕಂದಾಯ ಇಲಾಖೆ, ಪೆÇಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ ಭೇಟಿ ನೀಡಿ, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ದೌರ್ಜನ್ಯ ಪ್ರಕರಣಗಳು ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಜಾಗೃತಿ ಕಾರ್ಯಕ್ರಮಗಳ ಆಯೋಜನೆ ಸಂದರ್ಭದಲ್ಲಿ ಸಮಿತಿ ಸದಸ್ಯರ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.
ರೂ.29.81ಲಕ್ಷ ಪರಿಹಾರ: 2023ರ ಜನವರಿ 01 ರಿಂದ ಮಾರ್ಚ್ 10 ರವರೆಗೆ ದೌರ್ಜನ್ಯ ನಿಯಂತ್ರಣ ಕಾಯ್ದೆ 1989ರ ಅಡಿಯಲ್ಲಿ ಒಟ್ಟು 23 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ 36 ಸಂತ್ರಸ್ಥರಿಗೆ ಒಟ್ಟು ರೂ.29,81,250/- ಪರಿಹಾರ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಾಳ್ ತಿಳಿಸಿದರು.
ಪರಿಶಿಷ್ಟ ಜಾತಿಯ 19 ಪ್ರಕರಣಗಳು, ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ 04 ಪ್ರಕರಣಗಳು ಸೇರಿ ಒಟ್ಟು 23 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 1 ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರೂ.1,00,000/- ಪರಿಹಾರ ಧನ ನೀಡಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಯಾದ 1 ಪ್ರಕರಣಕ್ಕೆ ರೂ.2,06,250/- ಪರಿಹಾರ ಧನ ನೀಡಲಾಗಿದೆ. 21 ಜಾತಿ ನಿಂದನೆ, ಇತರೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು ರೂ.26,75,000/- ಪರಿಹಾರ ಧನ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ಹಾಗೂ ವಿಶೇಷ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ ಫೆಬ್ರವರಿ-2023ರ ಅಂತ್ಯಕ್ಕೆ 80 ಪ್ರಕರಣಗಳು ಬಾಕಿ ಇವೆ. ಫೆಬ್ರವರಿ ಮಾಹೆಯಲ್ಲಿ 02 ಪ್ರಕರಣಗಳನ್ನು ಸ್ವೀಕರಿಸಲಾಗಿದ್ದು, 02 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
2013-14ರಲ್ಲಿ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಂಬತ್ತನಹಳ್ಳಿ ಹಾಗೂ ಶಿವನಗರ ಗ್ರಾಮ, ಹೊಸದುರ್ಗ ತಾಲ್ಲೂಕಿನ ಜಂತಿಕೊಳಲು ಹಾಗೂ ದೊಡ್ಡಘಟ್ಟ ಗ್ರಾಮದಲ್ಲಿ ಜರುಗಿದೆ ಎನ್ನಲಾದ ಸಾಮಾಜಿಕ ಬಹಿಷ್ಕಾರದ ಪ್ರಕರಣಗಳ ಕುರಿತ ವರದಿ ಹಾಗೂ ಸಂತ್ರಸ್ತರ ವಿವರಗಳನ್ನು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರ ಕಚೇರಿಗೆ ಕೂಡಲೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸೂಚಿಸಿದರು. ಚಳ್ಳಕೆರೆ ತಾಲ್ಲೂಕಿನ ದೊಡ್ಡಬೀರನಹಳ್ಳಿ ಹಾಗೂ ಕೂನಿಗರಹಳ್ಳಿ ಗ್ರಾಮದ ಸಾಮಾಜಿಕ ಬಹಿಷ್ಕಾರ ಪ್ರಕರಣ ಕುರಿತು ವಾರದೊಳಗೆ ವರದಿ ಸಿದ್ದಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಾಳ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರನಾಯ್ಕ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಡಿ.ಓ.ಮೊರಾರ್ಜಿ, ಎಂ.ಡಿ.ನವಕೋಟಿ, ಬೋರಸ್ವಾಮಿ, ಓ.ಚಿನ್ನಪ್ಪ, ಬಿ.ಗುಜ್ಜಾರಪ್ಪ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours