ಬಿಜೆಪಿ ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ

 

ಬೆಂಗಳೂರು: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಪದ್ಮನಾಭನಗರದ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ( R. Ashoka)  ಅವರನ್ನು ಆಯ್ಕೆ ಮಾಡಲಾಗಿದೆ.

ಶುಕ್ರವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್.ಅಶೋಕ್ ಹೆಸರನ್ನು ವಿಪಕ್ಷ ನಾಯಕನ ಸ್ಥಾನಕ್ಕೆ ಸೂಚಿಸಿದರೆ, ಮಾಜಿ ಸಚಿವ ವಿ.ಸುನೀಲ್ ಕುಮಾರ್ ಅನುಮೋದಿಸಿದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಶಾಸಕಾಂಗ ಪಕ್ಷದ ಸಭೆ ಆರಂಭಕ್ಕೂ ಮುನ್ನ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಪ್ರತ್ಯೇಕವಾಗಿ ಎಲ್ಲ ಶಾಸಕರನ್ನು ಕರೆದು ಅಭಿಪ್ರಾಯ ಸಂಗ್ರಹಿಸಿದರು. ಆದರೆ, ಇಂದು ಬೆಳಗ್ಗೆಯೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಶೋಕ್‍ರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ವಿಪಕ್ಷ ನಾಯಕನ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧವಿರುವಂತೆ ತಿಳಿಸಿದ್ದರು ಎನ್ನಲಾಗಿದೆ.

ಬಿಜೆಪಿ ನಾಯಕರೊಂದಿಗೆ ಚರ್ಚೆ: ವಿರೋಧ ಪಕ್ಷದ ನಾಯಕರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಬಿಜೆಪಿ ಹೈಕಮಾಂಡ್‍ನ ಪ್ರತಿನಿಧಿಗಳಾಗಿ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದರು.

ಇದನ್ನೂ ಓದಿ: ಹಸು ಘಟಕ ವಿತರಿಸಲು ಅರ್ಜಿ ಆಹ್ವಾನ

ಬೆಂಗಳೂರಿಗೆ ಶುಕ್ರವಾರ ಬೆಳಗ್ಗೆ ಆಗಮಿಸಿದ ನಿರ್ಮಲಾಸೀತಾರಾಮನ್ ಹಾಗೂ ದುಶ್ಯಂತ್ ಕುಮಾರ್ ಗೌತಮ್ ಮೊದಲು ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಆನಂತರ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಅವರೊಂದಿಗೆ ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿ ಮಾತುಕತೆ ನಡೆಸಿದರು.

ಆನಂತರ, ಆರ್.ಟಿ.ನಗರದಲ್ಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಹೈಕಮಾಂಡ್ ಪ್ರತಿನಿಧಿಗಳು ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು. ಬಳಿಕ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಅತೃಪ್ತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿವಾಸಕ್ಕೆ ಭೇಟಿ ಮಾಡಿ ಚರ್ಚೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಯಿತು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ವೇದಿಕೆ ಮೇಲೆ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours