ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಸಚಿವ ಎ.ನಾರಾಯಣಸ್ವಾಮಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್3:
ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಮಂಜೂರಾದ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಹಾಗೂ ಸಂಸದ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ 4 ಪ್ರಮುಖ ರಸ್ತೆಗಳ ನಿರ್ಮಾಣ ಹಾಗೂ ಸಿ.ಎನ್.ಜಿ ಗ್ಯಾಸ್ ಪೈಪ್‍ಲೈನ್ ಅಳವಡಿಕೆ ಕುರಿತು ಸಂಬಂಧಪಟ್ಟ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದಿಂದ ಜಿಲ್ಲೆಗೆ ಮಂಜೂರಾದ 4 ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣದ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿದೆ. ಹೆದ್ದಾರಿ ನಿರ್ಮಾಣದ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜೊತೆಗೆ ಈಗಾಗಲೇ ಗುರುತಿಸಲಾಗಿರುವ ಅಪಘಾತ ವಲಯಗಳಲ್ಲಿ, ಅಪಘಾತಗಳ ತಡೆಗೆ ಸಿಗ್ನಲ್ ಅಳವಡಿಕೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿವಮೊಗ್ಗ ಮತ್ತು ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯು ಮಂದಗತಿಯಲ್ಲಿ ಸಾಗುತ್ತಿದೆ. ಮುರುಘಾ ಮಠದ ಜಂಕ್ಷನ್ ಬಳಿಯಲ್ಲಿ ಅಪಘಾತ ವಲಯ ಗುರುತಿಸಲಾಗಿದ್ದು, ಹಾಗಾಗಿ ಪ್ರತ್ಯೇಕ ವಿಸ್ತøತ ಯೋಜನಾ ವರದಿ ತಯಾರಿಸಬೇಕು ಎಂದು ತಾಕೀತು ಮಾಡಿದರು.
ಹಿರಿಯೂರು ಮತ್ತು ಹುಳಿಯಾರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಹುಲುವಿನಕಟ್ಟೆ ಗ್ರಾಮದ ಸಹ ಸರ್ಕಾರಿ ಶಾಲೆ ಹಾಗೂ ಗ್ರಾಮಸ್ಥರ ಆಕ್ಷೇಪ ಸೇರಿದಂತೆ ಕೆಲವು ಸಮಸ್ಯೆಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ. ಈ ರಸ್ತೆ ನಿರ್ಮಾಣದ ಕಾಮಗಾರಿಯ ಎಲ್ಲ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಬಳಿ ಚರ್ಚಿಸಿ, ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.
ಹೊಸದುರ್ಗ ಮತ್ತು ಹೊಳಲ್ಕೆರೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿಯು ಕೇವಲ ಪಟ್ಟಣ ವ್ಯಾಪ್ತಿಯಲ್ಲಿ ಮಾತ್ರ ಕಾಮಗಾರಿ ಪ್ರಾರಂಭವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸಹ ಕಾಮಗಾರಿ ಆರಂಭವಾಗಿಲ್ಲ. ಹಾಗಾಗಿ ಶೀಘ್ರವಾಗಿ ಕಾಮಗಾರಿ ಕೈಗೆತ್ತಿಕೊಂಡು ಆರು ತಿಂಗಳೊಳಗೆ ಕಾಮಗಾರಿ ಮುಕ್ತಾಯಗೊಳಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಸಿರಾ ಹಾಗೂ ಬಿ.ಜಿ.ಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಕೈವಾಕ್ ಅವಶ್ಯಕತೆ ಇದೆ. ಈ ಎರಡು ಕಡೆಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಕೈವಾಕ್ ನಿರ್ಮಾಣ ಕಾರ್ಯ ಪೂರ್ಣಗೊಳಿಸಬೇಕು. ಚಳ್ಳಕೆರೆ ಮತ್ತು ಹಿರಿಯೂರು ರಸ್ತೆ ಕಾಮಗಾರಿಯು ಮಣ್ಣಿನ ಸಮಸ್ಯೆಯಿಂದಾಗಿ ಕಾಮಗಾರಿ ಸ್ಥಗಿತವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ, ಸೂಕ್ತ ಪರಿಹಾರಕೈಗೊಳ್ಳಬೇಕು ಎಂದು ಸೂಚಿಸಿದರು.
ಶಿವಮೊಗ್ಗ ಮತ್ತು ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುರುಘಾ ಮಠದಿಂದ ಹೊಳಲ್ಕೆರೆ ರಸ್ತೆಯ ಮುಖ್ಯ ರಸ್ತೆಯವರಗೆ ಸುಮಾರು 2 ಕಿ.ಮೀ ರಸ್ತೆ ನಿರ್ಮಾಣವಾಗಿದೆ. ನಗರ, ಪಟ್ಟಣ ವ್ಯಾಪ್ತಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಎಂದು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜಿನಿಯರ್ ಸಭೆಗೆ ಮಾಹಿತಿ ನೀಡಿದರು.
ಹೊಳಲ್ಕೆರೆ ಮತ್ತು ಹೊಸದುರ್ಗ ರಾಷ್ಟ್ರೀಯ ಹೆದ್ದಾರಿ ಸುಮಾರು 31.7 ಕಿ.ಮೀ ಉದ್ದವಿದ್ದು, ಹೊಸದುರ್ಗದಿಂದ ಕಾಮಗಾರಿ ಆರಂಭವಾಗಿದೆ. 2024ರ ಏಪ್ರಿಲ್ ಅಂತ್ಯದೊಳಗೆ ಕಾಮಗಾರಿ ಮುಕ್ತಾಯವಾಗಲಿದೆ. ಹಿರಿಯೂರು ಮತ್ತು ಹುಳಿಯಾರು ರಸ್ತೆಯು 31.3 ಕಿ.ಮೀ ಉದ್ದವಿದ್ದು, ಆದಷ್ಟು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಯಾವುದಾದರೂ ತೊಂದರೆ, ಸಮಸ್ಯೆಯಿಂದಾಗಿ ಕಾಮಗಾರಿಯು ಪ್ರಗತಿಯಿಲ್ಲದಿದ್ದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಪರಿಹಾರ ಕಂಡುಕೊಳ್ಳಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜಿನಿಯರ್‍ಗೆ ಸೂಚನೆ ನೀಡಿದರು.
ಮನೆ ಮನೆಗೆ ಗ್ಯಾಸ್ ಸಂಪರ್ಕ; ಶೀಘ್ರ ಪೂರ್ಣಗೊಳಿಸಿ: ಮನೆ ಮನೆಗೆ ನೇರವಾಗಿ ಪೈಪ್‍ಲೈನ್ ಮೂಲಕ ಗ್ಯಾಸ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸಚಿವ ಎ.ನಾರಾಯಣಸ್ವಾಮಿ ಗೇಲ್ ಇಂಡಿಯಾ ಹಾಗೂ ಅಶೋಕ್ ಗ್ಯಾಸ್ ಕಂಪನಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೈಪ್‍ಲೈನ್ ಮೂಲಕ ಪ್ರತಿ ಮನೆ ಮನೆಗೆ ಗ್ಯಾಸ್ ಅಳವಡಿಕೆ ಮಾಡುವುದರ ಮೂಲಕ ಗ್ಯಾಸ್ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದರಿಂದ ಕೇವಲ ರೂ.400 ರಿಂದ 450 ರೂಪಾಯಿಗೆ ಗ್ಯಾಸ್ ಸೌಲಭ್ಯ ಪಡೆಯಬಹುದಾಗಿದ್ದು, ಸಾರ್ವಜನಿಕರು ಕಡಿಮೆ ದರದ ಗ್ಯಾಸ್ ಸೌಲಭ್ಯ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
1.10 ಲಕ್ಷ ಗ್ಯಾಸ್ ಪೈಪ್‍ಲೈನ್ ಅಳವಡಿಕೆ ಗುರಿ: ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಎರಡು ಜಿಲ್ಲೆಗಳಿಂದ ಒಟ್ಟು 1.10 ಲಕ್ಷ ಮನೆಗಳಿಗೆ ಗ್ಯಾಸ್ ಪೈಪ್‍ಲೈನ್ ಅಳವಡಿಕೆಗೆ ಗುರಿ ನಿಗಧಿಪಡಿಸಲಾಗಿದೆ ಅಶೋಕ ಗ್ಯಾಸ್ ಕಂಪನಿಯ ವ್ಯವಸ್ಥಾಪಕರು ತಿಳಿಸಿದರು.
ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿ ಗ್ಯಾಸ್ ಪೈಪ್‍ಲೈನ್ ಅಳವಡಿಕೆಗಾಗಿ 62 ಕಿ.ಮೀ ಅನುಮತಿ ನೀಡಲಾಗಿದೆ. ಇದರಲ್ಲಿ 59 ಕಿ.ಮೀ ಪೈಪ್‍ಲೈನ್ ಅಳವಡಿಕೆ ಮಾಡಲಾಗಿದೆ. ಇದರಲ್ಲಿ 5500 ಮನೆಗಳಿಗೆ ಪೈಪ್‍ಲೈನ್ ಅಳವಡಿಕೆ ಮಾಡಬೇಕು. ಈಗಾಗಲೇ 1804 ಅಡುಗೆ ಮನೆಗಳಿಗೆ ಗ್ಯಾಸ್ ಪೈಪ್‍ಲೈನ್ ಅಳವಡಿಕೆಗೆ ನೋಂದಣಿಯಾಗಿದ್ದು, ಚಿತ್ರದುರ್ಗ ನಗರದ ದವಳಗಿರಿ ಬಡಾವಣೆ, ನೆಹರು ನಗರದಲ್ಲಿ 807 ಅಡುಗೆ ಮನೆಗಳಿಗೆ ಗ್ಯಾಸ್ ಪೈಪ್‍ಲೈನ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಟಿ.ಜವರೇಗೌಡ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಫೋಟೋ ವಿವರ: ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ 4 ಪ್ರಮುಖ ರಸ್ತೆಗಳ ನಿರ್ಮಾಣ ಹಾಗೂ ಸಿ.ಎನ್.ಜಿ ಗ್ಯಾಸ್ ಪೈಪ್‍ಲೈನ್ ಅಳವಡಿಕೆ ಕುರಿತು ಸಂಬಂಧಪಟ್ಟ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

[t4b-ticker]

You May Also Like

More From Author

+ There are no comments

Add yours