ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳು, ಶೆಡ್ಗಳ ತೆರವು ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇರಳ ಸಿಎಂ ಪಿಣರಾಯಿ ವಿಜಯನ್ ತೀವ್ರ ವಾಗ್ದಾಳಿ ನಡೆಸಿದ್ದರು. ಆದರೆ, ಸರ್ಕಾರದ ಕ್ರಮವನ್ನು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡು ಕೇರಳ ಸಿಎಂಗೆ ತಿರುಗೇಟು ನೀಡಿದ್ದರು. ಅದಾದ ನಂತರ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಕೋಗಿಲು ನಿರಾಶ್ರಿತರಿಗೆ ತಕ್ಷಣವೇ ಮನೆಗಳನ್ನು ನೀಡಲು ಸರ್ಕಾರ ಮುಂದಾಗಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೇ ಸಂದರ್ಭದಲ್ಲಿ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅಲ್ಲಿನ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿಯಾಗಿದ್ದಾರೆ.
ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಉಪಸ್ಥಿತರಿದ್ದರು. ಈ ವೇಳೆ ವೇದಿಕೆಯಲ್ಲಿ ಪಿಣರಾಯಿ ವಿಜಯನ್, ಸಿದ್ದರಾಮಯ್ಯ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು.
ಕೇರಳದ ವರ್ಕಳದಲ್ಲಿ ನಡೆಯಲಿರುವ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ವೇಳೆ ಬ್ರಹ್ಮಶ್ರೀ ಜ್ಞಾನತೀರ್ಥ ಸ್ವಾಮೀಜಿಯವರು ಹಾಗೂ ಗುರುಗಳ ಅನುಯಾಯಿಗಳಿಂದ ದೊರೆತ ಆತ್ಮೀಯ ಸ್ವಾಗತದಿಂದ ಹರ್ಷಿತನಾದೆ ಎಂದು ಸಿದ್ದರಾಮಯ್ಯ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.






