ವಿವಿ ಸಾಗರ ಜಲಾಶಯಕ್ಕೆ ಡಿಸಿ ದಿವ್ಯಪ್ರಭು ಭೇಟಿ , ವ್ಯವಸ್ಥಿತವಾಗಿ ಮುಖ್ಯಮಂತ್ರಿಗಳಿಂದ ಬಾಗಿನ ಕಾರ್ಯಕ್ರಮ ಆಯೋಜನೆಗೆ ಸೂಚನೆ

 

ಚಿತ್ರದುರ್ಗ ನ. 19 (ಕರ್ನಾಟಕ ವಾರ್ತೆ) :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ. 22 ರಂದು ಜಿಲ್ಲೆಗೆ ಆಗಮಿಸಿ, ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ವಿವಿ ಸಾಗರ ಜಲಾಶಯಕ್ಕೆ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಳೆದ 89 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಾಣಿವಿಲಾಸ ಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿಗಳು ನ. 22 ರಂದು ವಿವಿ ಸಾಗರಕ್ಕೆ ಭೇಟಿ ನೀಡಿ, ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿರುತ್ತದೆ. ಅಲ್ಲದೆ ಅಂದು ಜಿಲ್ಲಾ ಉಸ್ತುವಾರಿ ಸಚಿವರೂ ಸೇರಿದಂತೆ ವಿವಿಧ ಸಚಿವರು, ಗಣ್ಯಮಾನ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವುದರಿಂದ, ಕಾರ್ಯಕ್ರಮ ಮಹತ್ವ ಪಡೆದುಕೊಂಡಿದೆ. ಹೀಗಾಗಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ, ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮವಾಗಿ ಆಯೋಜಿಸಲು ಅಧಿಕಾರಿಗಳು ಅಗತ್ಯ ಸಿದ್ಧತಾ ಕ್ರಮಗಳನ್ನು ಕೈಗೊಳ್ಳುವಂತೆ, ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು. ಮುಖ್ಯಮಂತ್ರಿಗಳು ಜಲಾಶಯಕ್ಕೆ ಬಾಗಿನ ಅರ್ಪಿಸುವ ಸ್ಥಳ, ಗಣ್ಯರ ಆಗಮನ, ನಿರ್ಗಮನಕ್ಕೆ ಮಾಡಿರುವ ವ್ಯವಸ್ಥೆಗೆ ಸಂಬಂಧಿಸಿದಂತೆ ಸ್ಥಳ ಪರಿಶೀಲನೆಯನ್ನು ಜಿಲ್ಲಾಧಿಕಾರಿಗಳು ನಡೆಸಿದರು.
ವಿಶ್ವೇಶ್ವರಯ್ಯ ಜಲ ನಿಗಮದ ಮುಖ್ಯ ಅಭಿಯಂತರ ಎಂ. ರವಿ, ಅಧೀಕ್ಷಕ ಅಭಿಯಂತರ ಶಿವಪ್ರಕಾಶ್, ಕಾರ್ಯಪಾಲಕ ಅಭಿಯಂತರ ಚಂದ್ರಮೌಳಿ, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಉಪವಿಭಾಗಾಧಿಕಾರಿ ಚಂದ್ರಯ್ಯ, ತಹಸಿಲ್ದಾರ್ ಪ್ರಶಾಂತ್ ಪಾಟೀಲ್, ತಾ.ಪಂ. ಇಒ ಈಶ್ವರ ಪ್ರಸಾದ್ ಸೇರಿದಂತೆ ರೈತ ಸಂಘದ ಹಲವು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

[t4b-ticker]

You May Also Like

More From Author

+ There are no comments

Add yours