ವೇಣೂರು: ಕುಂಭಶ್ರೀ ಪದವಿಪೂರ್ವ ಕಾಲೇಜಿನ ವತಿಯಿಂದ ನವೆಂಬರ್ 12 ಮತ್ತು 14ರಂದು ಎರಡು ದಿನಗಳ ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವ EXPLORIA 2K26 ಅನ್ನು ಸಂಭ್ರಮದಿಂದ ಆಯೋಜಿಸಲಾಯಿತು.




ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂಭಶ್ರೀ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗಿರೀಶ್ ಕೆ. ಎಚ್. ಅವರು ನೆರವೇರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ EXPLORIA 2K26 ಕ್ರೀಡಾ ಹಾಗೂ ಸಾಂಸ್ಕೃತಿಕ ಉತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರೀಡಾಸ್ಫೂರ್ತಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ನಿರಂಜನ ಸ್ವಾಮಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರವೀಂದ್ರ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡು ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕುಂಭಶ್ರೀ ಪದವಿಪೂರ್ವ ಕಾಲೇಜಿನ PTA ಅಧ್ಯಕ್ಷರಾದ ಶ್ರೀಮತಿ ಸುಜಾತಾ ಅವರು ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮಹತ್ವವನ್ನು ತಿಳಿಸಿ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಸಂಸ್ಥೆಯ ಪ್ರಯತ್ನವನ್ನು ಶ್ಲಾಘಿಸಿದರು.
ಕುಂಭಶ್ರೀ ಸಂಸ್ಥೆಯ ಸಂಚಾಲಕರಾದ ಲೆಫ್ಟಿನೆಂಟ್ ಅಶ್ವಿತ್ ಕುಲಾಲ್ ಅವರು ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿವೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿವಾಸ್ ನಾಯ್ಕ ಅವರು ಸ್ವಾಗತಿಸಿದರು. ಆಡಳಿತ ಸಲಹೆಗಾರರಾದ ಮನೋಜ್ ಎಸ್. ಅವರು ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕುಮಾರಿ ಶರಣ್ಯ ಕೆ. ಎಸ್. ಹಾಗೂ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಕುಮಾರಿ ಲಿಖಿತಾ ಎಂ. ಅವರು ನಿರೂಪಿಸಿದರು.
ವಿದ್ಯಾರ್ಥಿಗಳ ಪ್ರತಿಭೆ, ಕ್ರೀಡಾಸ್ಫೂರ್ತಿ ಹಾಗೂ ಸಾಂಸ್ಕೃತಿಕ ಅಭಿವ್ಯಕ್ತಿಗೆ ವೇದಿಕೆಯಾದ EXPLORIA 2K26 ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.
