ನವದೆಹಲಿ: ದೇಶದ ರಾಜಕೀಯದಲ್ಲಿ ಕ್ರಿಮಿನಲೀಕರಣದ ಪ್ರಮಾಣದ ಕುರಿತು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿರುವ ವರದಿಯಲ್ಲಿ ಆತಂಕಕಾರಿ ಅಂಶಗಳು ಬಹಿರಂಗವಾಗಿವೆ. ಲೋಕಸಭೆ ಮತ್ತು ರಾಜ್ಯಸಭೆಯ ಒಟ್ಟು 326 ಸಂಸದರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದೇ ವೇಳೆ 28 ರಾಜ್ಯಗಳ ಪೈಕಿ 14 ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಘೋಷಿಸಿದ್ದಾರೆ.


ಸುಪ್ರೀಂ ಕೋರ್ಟ್ನಲ್ಲಿ ಅಮಿಕಸ್ ಕ್ಯೂರಿಯಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ವಕೀಲ ವಿಜಯ್ ಹನ್ಸಾರಿಯಾ ಸಲ್ಲಿಸಿರುವ ಅಫಿಡವಿಟ್ನಲ್ಲಿ ಈ ಮಾಹಿತಿ ನೀಡಲಾಗಿದೆ. ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತವಾಗಿ ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ವರದಿ ಸಲ್ಲಿಸಲಾಗಿದೆ.
ಅಫಿಡವಿಟ್ ಪ್ರಕಾರ, 543 ಲೋಕಸಭಾ ಸದಸ್ಯರ ಪೈಕಿ 251 ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.ಇವರಲ್ಲಿ 170 ಮಂದಿ ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚು ಶಿಕ್ಷೆ ವಿಧಿಸಬಹುದಾದ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ರಾಜ್ಯಸಭೆಯ 233 ಸದಸ್ಯರ ಪೈಕಿ 75 ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳಿದ್ದು, ಇವರಲ್ಲಿ 40 ಮಂದಿ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಡಿ.ಕೆ.ಶಿವಕುಮಾರ್ಗೆ 19 ಪ್ರಕರಣ
ಮುಖ್ಯಮಂತ್ರಿಗಳ ಪೈಕಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಅತಿ ಹೆಚ್ಚು 89 ಪ್ರಕರಣಗಳಿವೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ವಿರುದ್ಧ 29 ಪ್ರಕರಣಗಳಿದ್ದು, ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಡಿ.ಕೆ.ಶಿವಕುಮಾರ್ ಮೂರನೇ ಸ್ಥಾನದಲ್ಲಿದ್ದಾರೆ. ದೇಶದ ಹಾಲಿ ಮತ್ತು ಮಾಜಿ ಸಂಸದರು ಹಾಗೂ ಶಾಸಕರ ವಿರುದ್ಧ ಒಟ್ಟು 4,192 ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ ಎಂದು ಅಫಿಡವಿಟ್ನಲ್ಲಿ ತಿಳಿಸಲಾಗಿದೆ. 2025ರಲ್ಲಿ 1,243 ಪ್ರಕರಣಗಳು ಇತ್ಯರ್ಥವಾಗಿದ್ದರೆ, ಇದೇ ಅವಧಿಯಲ್ಲಿ 1,050 ಹೊಸ ಪ್ರಕರಣಗಳು ದಾಖಲಾಗಿವೆ.
ರಾಜ್ಯವಾರು ಅಂಕಿ-ಅಂಶಗಳ ಪ್ರಕಾರ, ಕೇರಳದ 20 ಸಂಸದರ ಪೈಕಿ 19 ಮಂದಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ತೆಲಂಗಾಣದ 17 ಸಂಸದರ ಪೈಕಿ 14 ಮಂದಿ, ಒಡಿಶಾದ 21ರಲ್ಲಿ 16 ಮಂದಿ ಮತ್ತು ಜಾರ್ಖಂಡ್ನ 14ರಲ್ಲಿ 10 ಮಂದಿ ವಿರುದ್ಧ ಪ್ರಕರಣಗಳಿವೆ.



