ಬೆಳ್ತಂಗಡಿ, ಅ. 15: ತಾಲೂಕಿನ ನಾವೂರು ಪೇಟೆಯ ಸ್ವಾತಿ ಕಟ್ಟಡದಲ್ಲಿ ಡಾ. ಪ್ರದೀಪ್ ಅವರು ನಡೆಸುತ್ತಿದ್ದ ಆರೋಗ್ಯ ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ನಾವೂರು ನಿವಾಸಿ ರವಿ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ.
ಇನ್ನಿಬ್ಬರು ಶಂಕಿತರಾದ ನಾವೂರು ನಿವಾಸಿ ಸುರೇಶ್ ಇಂಚರ ಮತ್ತು ಪುತ್ತೂರಿನ ಕೌಡಿಚಾರು ನಿವಾಸಿ ದಿನೇಶ್ ಪ್ರಭು ನಾವೂರು ಎಂಬವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅ.5ರಂದು ತಡರಾತ್ರಿ ದುಷ್ಕರ್ಮಿಗಳು ಕ್ಲಿನಿಕ್ಗೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕುವ ಪ್ರಯತ್ನ ಮಾಡಿದ್ದರು. ಈ ಕೃತ್ಯದಿಂದ ಔಷಧಿಗಳು, ವೈದ್ಯಕೀಯ ಸಲಕರಣೆಗಳು ಸಂಪೂರ್ಣ ಸುಟ್ಟು ಸುಮಾರು 2 ರಿಂದ 3 ಲಕ್ಷ ರೂ. ನಷ್ಟ ಉಂಟಾಗಿತ್ತು.


