ಗೃಹಲಕ್ಷ್ಮೀ ಯೋಜನೆಗೆ ಆ. 30 ರಂದು ಚಾಲನೆ:ಡಿಸಿ ದಿವ್ಯ ಪ್ರಭು

 

ಜಿಲ್ಲೆಯ ಎಲ್ಲೆಡೆ ನೇರ ಪ್ರಸಾರ ವೀಕ್ಷಣೆ
*****************
ಜಿಲ್ಲೆಯಾದ್ಯಂತ ವ್ಯವಸ್ಥಿತವಾಗಿ ಕಾರ್ಯಕ್ರಮ ಸಂಘಟಿಸಲು ಡಿಸಿ ದಿವ್ಯಪ್ರಭು ಸೂಚನೆ
********************
ಚಿತ್ರದುರ್ಗ ಆ. 24 (ಕರ್ನಾಟಕ ವಾರ್ತೆ) :
ಸರ್ಕಾರದ ಪ್ರಮುಖ ಐದು ಗ್ಯಾರಂಟಿಗಳಲ್ಲಿ ಒಂದಾದ “ಗೃಹ ಲಕ್ಷ್ಮೀ” ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡಲಿರುವ ಹಿನ್ನೆಲೆಯಲ್ಲಿ ಅದರ ನೇರ ಪ್ರಸಾರದ ಕಾರ್ಯಕ್ರಮ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಉತ್ತಮವಾಗಿ ಸಂಘಟಿಸಬೇಕು. ಎಲ್ಲಿಯೂ ಶಿμÁ್ಠಚಾರಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಹೇಳಿದರು.
“ಗೃಹಲಕ್ಷ್ಮೀ” ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿದ ಅವರು, ಗೃಹಲಕ್ಷ್ಮೀ ಯೋಜನೆಯು ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಸರ್ಕಾರದ ಪ್ರಮುಖ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಹೀಗಾಗಿ ಕಾರ್ಯಕ್ರಮದ ಹಿಂದಿನ ದಿನವೇ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಹಾಗೂ ಜಿಲ್ಲೆಯಾದ್ಯಂತ ಜನರಲ್ಲಿ ಕಾರ್ಯಕ್ರಮದ ಬಗ್ಗೆ ಹಾಗೂ ಗೃಹಲಕ್ಷ್ಮೀ ಯೋಜನೆಯ ಸವಲತ್ತು ವಿತರಣೆ ಕುರಿತಂತೆ ಅಲ್ಲಲ್ಲಿ ಬ್ಯಾನರ್‍ಗಳನ್ನು ಅಳವಡಿಸಿ ವ್ಯಾಪಕವಾಗಿ ಪ್ರಚಾರಪಡಿಸಬೇಕು ಎಂದರು.
ಜಿಲ್ಲಾ ಕೇಂದ್ರದಲ್ಲಿ ಪ್ರಮುಖ ಕಾರ್ಯಕ್ರಮ ನಗರದ ತ.ರಾ.ಸು. ರಂಗಮಂದಿರದಲ್ಲಿ ನಡೆಯಲಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.  ಇದೇ ದಿನದಂದು ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳು ಅಲ್ಲದೆ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿಸಬೇಕು, ಸರ್ಕಾರದ ನಿರ್ದೇಶನದಂತೆ ಶಾಲೆ ಮತ್ತು ಶಾಲೆ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಬಾರದು.  ಕಾರ್ಯಕ್ರಮವನ್ನು ಸಮುದಾಯ ಭವನ, ಕಲ್ಯಾಣ ಮಂಟಪ, ಚೌಟ್ರಿಯಲ್ಲಿ ಇಲ್ಲವೆ ಬಯಲು ಪ್ರದೇಶದಲ್ಲಿ ಆಯೋಜಿಸಬೇಕು. ಆ. 30 ರಂದು ಮೈಸೂರಿನಲ್ಲಿ ಜರುಗುವ ರಾಜ್ಯ ಮಟ್ಟದ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಅನುಕೂಲವಾಗುವಂತೆ ಎಲ್‍ಇಡಿ ಪರದೆಗಳು, ಸೂಕ್ತ ಇಂಟರ್‍ನೆಟ್ ವ್ಯವಸ್ಥೆ ಮೊದಲೇ ಸಿದ್ಧಪಡಿಸಿಕೊಳ್ಳಬೇಕು.  ಕಾರ್ಯಕ್ರಮದ ಮುನ್ನಾ ದಿನವೇ ಇವೆಲ್ಲ ವ್ಯವಸ್ಥೆ ಮಾಡಿಕೊಳ್ಳಬೇಕು.  ಕಾರ್ಯಕ್ರಮಕ್ಕೆ ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿರುವ ಫಲಾನುಭವಿಗಳು ಪಾಲ್ಗೊಳ್ಳುವಂತೆ ಸಿದ್ಧತೆ ಮಾಡಿಕೊಳ್ಳಬೇಕು.  ಮಂಜೂರಾತಿ ಪತ್ರಗಳ ಸಿದ್ಧತೆ ಆಗಬೇಕು,  ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಸೂಕ್ತ ಆಸನ ವ್ಯವಸ್ಥೆ, ಎಲ್‍ಇಡಿ ಡಿಸ್‍ಪ್ಲೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಆಗಬೇಕು, ಮುಂಜಾಗ್ರತಾ ಕ್ರಮವಾಗಿ ಜನರೇಟರ್ ವ್ಯವಸ್ಥೆ ಇರಬೇಕು,  ಆಯಾ ನಗರ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್‍ಗಳಿಗೆ ಸಂಬಂಧಿಸಿದ ಎಲ್ಲ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಶಿಷ್ಟಾಚಾರದ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು, ಆಯಾ ವ್ಯಾಪ್ತಿಯಲ್ಲಿ ಶಾಸಕರುಗಳಿಗೆ ಕಾರ್ಯಕ್ರಮ ನಡೆಸುವ ಸ್ಥಳ, ದಿನಾಂಕ ಹಾಗೂ ಸಮಯದ ಕುರಿತು ಮುಂಚಿತವಾಗಿ ಮಾಹಿತಿ ನೀಡಬೇಕು.  ಇದಕ್ಕೆ ಪೂರ್ವಭಾವಿಯಾಗಿ ತಾಲ್ಲೂಕುವಾರು ಸಭೆಗಳನ್ನು ನಡೆಸಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು.  ಪ್ರತಿಯೊಂದು ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ಸುಸೂತ್ರವಾಗಿ ನಡೆಯುವಂತಾಗಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ಮತ್ತು ಮುಂದಾಳತ್ವ ವಹಿಸಬೇಕು. ಇತರೆ ಎಲ್ಲಾ ಇಲಾಖೆ ಅಧಿಕಾರಿಗಳು ಸಹಕಾರ ನೀಡಬೇಕು. ಪರಸ್ಪರ ಸಮನ್ವಯತೆಯಿಂದ ಒಟ್ಟಾರೆ ಎಲ್ಲಿಯೂ ಲೋಪವಾಗದಂತೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಣೆವಾಗಬೇಕು. ಕಾರ್ಯಕ್ರಮಕ್ಕೆ ಪ್ರಮುಖವಾಗಿ ಇಂಟರೆನಟ್ ವ್ಯವಸ್ಥೆ ಮತ್ತು ತಾಂತ್ರಿಕ ಸಿಬ್ಬಂದಿ ಅಗತ್ಯವಿದ್ದು, ಮುಂಚಿತವಾಗಿ ಇದರ ಖಾತ್ರಿ ಮಾಡಿಕೊಳ್ಳಬೇಕು. ಮೈಸೂರಿನಲ್ಲಿ ಜರುಗುವ ಚಾಲನಾ ಕಾರ್ಯಕ್ರಮದ ಲೈವ್ ಸ್ಟ್ರೀಮಿಂಗ್ ವ್ಯವಸ್ಥೆ ಮಾಡಬೇಕಾದ ಕಾರಣ ಜಿಲ್ಲೆಯ ಎಲ್ಲಾ ಕಾರ್ಯಕ್ರಮ ಸ್ಥಳಗಳಲ್ಲಿ ಎಲ್.ಇ.ಡಿ ವಾಲ್, ಸ್ಕ್ರೀನ್ ವ್ಯವಸ್ಥೆ, ಧ್ವನಿವರ್ಧಕ ಅಳವಡಿಸಬೇಕು. ಇದರ ನಿರ್ವಹಣೆಗೆ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ಎಲ್ಲಾ ನೋಡಲ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ನಗರಸಭೆ ಪೌರಾಯುಕ್ತ ಶ್ರೀನಿವಾಸ್, ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours