ರಾಜ್ಯದ ಸರ್ಕಾರದ ಮಹತ್ವಾಕಾಂಕ್ಷೆಯ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ಶೀಘ್ರದಲ್ಲೇ ತೆರೆಯಲಿದೆ. ಮುಂದಿನ ವರ್ಷದಿಂದ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ನೀತಿ ಜಾರಿಗೊಳಿಸಲಿರುವ ರಾಜ್ಯ ಸರ್ಕಾರ ಅಗತ್ಯ ಅನುದಾನ ಮೀಸಲಿಟ್ಟಿದೆ. ವಿಶೇವೆಂದರೆ 2027ರಿಂದ ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾವಾಹನಗಳು ಓಡಾಲಿವೆ. ಈ ಕುರಿತು ಖುದ್ದಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ.


ಭಾನುವಾರ ಸೊರಬ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಸಾಗರ ತಾಲ್ಲೂಕಿನ ತಾಳಗುಪ್ಪ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಇಂದು ಸುಮಾರು ₹2 ಕೋಟಿ ಅನುದಾನದಲ್ಲಿ ವಿವಿಧ ಗ್ರಾಮಗಳ ರಸ್ತೆ ಅಭಿವೃದ್ಧಿ ಮತ್ತು ವಿವಿಧ ಕಾಮಗಾರಿಗಳಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರೂ ಆದ ಶ್ರೀ ಮಧು ಬಂಗಾರಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು.
ಕೆಪಿಎಸ್ ಶಾಲೆಗಳಿಗೆ ಉಚಿತ ಶಾಲಾ ವಾಹನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾರಿಗೆ ಸಮಸ್ಯೆಯ ಬಗ್ಗೆ ಪ್ರಸ್ತಾಪಿಸಿದರು. ನಾನು ಎಲ್ಲಿಗೆ ಹೋದರೂ ಸರ್ಕಾರಿ ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆಯ ಸಮಸ್ಯೆ ಗಮನಕ್ಕೆ ಬರುತ್ತಿದೆ. ಇನ್ನು ಮುಂದೆ ಈ ಸಮಸ್ಯೆ ಇರಬಾರದು ಎಂಬ ಉದ್ದೇಶದಿಂದ ಮುಂದಿನ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ವಿಶೇಷ ಶಾಲಾ ವಾಹನಗಳ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲು ತೀರ್ಮಾನಿಸಿದ್ದೇವೆ ಎಂದು ಘೋಷಿಸಿದರು.
31 ಸಾವಿರ ಶಿಕ್ಷಕರ ನೇಮಕಾತಿ
ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪಿಯುಸಿ ಹಂತದವರೆಗೆ ಒಂದೇ ಕ್ಯಾಂಪಸ್ನಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆ ಕಲ್ಪಿಸಲಾಗುವುದು. ಖಾಸಗಿ ಶಾಲೆಗಳಿಗಿಂತ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಕೆಪಿಎಸ್ ಶಾಲೆಗಳಲ್ಲಿ ನೀಡುವ ಗುರಿ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.
ಸಚಿವನಾದ ಬಳಿಕ ಹಿಂದಿನ ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ ಶಿಕ್ಷಕರಿಗೆ ನೇಮಕಾತಿ ಆದೇಶ ನೀಡಿದ್ದೇನೆ. ಇದೀಗ 17,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಡಿಸೆಂಬರ್ ಒಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ನನ್ನ ಅವಧಿಯಲ್ಲಿ ಒಟ್ಟು 31 ಸಾವಿರ ಶಿಕ್ಷಕರ ನೇಮಕಾತಿ ಮಾಡಿದಂತಾಗಲಿದೆ ಎಂದು ವಿವರಿಸಿದರು.



