ಬೆಳ್ತಂಗಡಿ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಕಳೆದ ನಾಲ್ಕು ದಿನಗಳಿಂದ ಸಾವಿರಾರು ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರು, ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಕಾರ್ಯಕರ್ತೆಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಆರೋಗ್ಯ ವ್ಯವಸ್ಥೆಯ ತಳಮಟ್ಟದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದು ಹಗಲು-ರಾತ್ರಿ ಹೋರಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ. ಇದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.




ಪ್ರಣಾಳಿಕೆಯ ಭರವಸೆ ಈಡೇರಿಸಲು ಒತ್ತಾಯ
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹15,000 ಗೌರವಧನ ನೀಡುವುದಾಗಿ ಸ್ಪಷ್ಟ ಭರವಸೆ ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ಮೂರು ವರ್ಷಗಳೇ ಕಳೆದರೂ ತನ್ನದೇ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ ಎಂದು ಹರೀಶ್ ಪೂಂಜ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಭರವಸೆಗಳು ಕೇವಲ ಅಧಿಕಾರ ಪಡೆಯುವ ತಂತ್ರಗಳಾಗಬಾರದು; ಜನರಿಗೆ ನೀಡಿದ ಮಾತನ್ನು ಉಳಿಸಿಕೊಳ್ಳುವುದು ಸರ್ಕಾರದ ಕನಿಷ್ಠ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಬೆಲೆ ಏರಿಕೆ ನಡುವೆ ಜೀವನ ನಿರ್ವಹಣೆ ಕಷ್ಟ
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ದಿನನಿತ್ಯದ ಜೀವನ ನಿರ್ವಹಣೆಯ ವೆಚ್ಚದ ನಡುವೆ ಅಲ್ಪ ಗೌರವಧನದಲ್ಲಿ ಜೀವನ ಸಾಗಿಸುವುದು ಕಾರ್ಯಕರ್ತೆಯರಿಗೆ ಕಷ್ಟಕರವಾಗಿದೆ. ಗರ್ಭಿಣಿಯರ ಆರೈಕೆ, ತಾಯಿ-ಮಕ್ಕಳ ಆರೋಗ್ಯ ರಕ್ಷಣೆ, ಲಸಿಕಾ ಕಾರ್ಯಕ್ರಮ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣದಲ್ಲಿ ಹಗಲಿರುಳು ಶ್ರಮಿಸುವ ಈ ಮಹಿಳೆಯರ ಸೇವೆಗೆ ತಕ್ಕ ಪ್ರತಿಫಲ ದೊರೆಯಲೇಬೇಕು. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಸರ್ಕಾರ, ಸಾವಿರಾರು ಮಹಿಳೆಯರು ಬೀದಿಯಲ್ಲಿ ಹೋರಾಡುವಂತಾಗಿರುವುದಕ್ಕೆ ಉತ್ತರಿಸಬೇಕು ಮತ್ತು ಅವರ ಬದುಕಿನ ಭದ್ರತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ಕೂಡಲೇ ಮಾತುಕತೆ ನಡೆಸಲಿ
ಆಶಾ ಕಾರ್ಯಕರ್ತೆಯರು ಸರ್ಕಾರದ ಮುಂದೆ ಯಾವುದೇ ಹೊಸ ಬೇಡಿಕೆ ಇಟ್ಟಿಲ್ಲ, ಬದಲಾಗಿ ಕಾಂಗ್ರೆಸ್ ಪಕ್ಷವೇ ನೀಡಿದ್ದ ಭರವಸೆಯನ್ನು ಈಡೇರಿಸುವಂತೆ ಕೇಳುತ್ತಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಪ್ರತಿಭಟನಾ ನಿರತ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಮಾಸಿಕ ₹15,000 ಗೌರವಧನ ಘೋಷಿಸಬೇಕು ಹಾಗೂ ಇತರ ಬೇಡಿಕೆಗಳ ಬಗ್ಗೆ ಸಕಾರಾತ್ಮಕ ನಿರ್ಧಾರ ಕೈಗೊಂಡು ಹೋರಾಟವನ್ನು ಗೌರವಯುತವಾಗಿ ಅಂತ್ಯಗೊಳಿಸಬೇಕು. ಜನರ ಆರೋಗ್ಯಕ್ಕೆ ಆಶಾಕಿರಣವಾಗಿರುವ ಕಾರ್ಯಕರ್ತೆಯರ ಬದುಕಿಗೂ ಸರ್ಕಾರ ಆಶಾಕಿರಣವಾಗಲಿ ಎಂದು ಶಾಸಕ ಹರೀಶ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
