ಬೆಂಗಳೂರು, ಜ. 13: ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಮುಸ್ಲಿಂ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಸರ್ಬಾನು ಖಾತುನ್ (25) ಎಂದು ಗುರುತಿಸಲಾಗಿದ್ದು, ಅವರು ಪಶ್ಚಿಮ ಬಂಗಾಳ ಮೂಲದವರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಸರ್ಬಾನು ಖಾತುನ್ ಹುಲಿಮಂಗಲದ ಪೋಡು ಪ್ರದೇಶದ ಬಳಿ ಇರುವ ಶೆಡ್ನಲ್ಲಿ ವಾಸವಾಗಿದ್ದರು.
ಕಳೆದ ಮೂರು ದಿನಗಳ ಹಿಂದೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಕ್ರಮ ವಲಸಿಗರ ಕುರಿತು ಕಾರ್ಯಾಚರಣೆ ನಡೆಸಿ, ಶೆಡ್ಗಳ ಮೇಲೆ ದಾಳಿ ನಡೆಸಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಸಂದರ್ಭದಲ್ಲಿ, ಅಕ್ರಮವಾಗಿ ವಾಸವಾಗಿದ್ದರೆನ್ನಲಾದ ಜಹಿದುಲ್ ಇಸ್ಲಾಂ (35) ಮತ್ತು ಫಿರ್ದೋಸ್ (32) ಎಂಬ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಈ ಶೆಡ್ಗಳ ಸಮೀಪದಲ್ಲೇ ವಾಸವಾಗಿದ್ದ ಸರ್ಬಾನು ಖಾತುನ್, ಶೆಡ್ಗಳನ್ನು ತೆರವುಗೊಳಿಸುವ ವೇಳೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ. ಆ ವೇಳೆ ಅಲ್ಲಿದ್ದ ಹಿಂದೂ ಕಾರ್ಯಕರ್ತರು ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ ಉದ್ದಟತನದಿಂದ ‘ಜೈ ಬಾಂಗ್ಲಾ’ ಎಂದು ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ.





