ಮತದಾನ ಹೆಚ್ಚಳ ಜಾಗೃತಿಗಾಗಿ ದ್ವಿಚಕ್ರ ವಾಹನದೊಂದಿಗೆ ಜಾಥಾ

 

 ಸ್ವೀಪ್ ಸಮಿತಿ ಅಯೋಜಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿದ ಡಿಸಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏಪ್ರಿಲ್07:
ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶುಕ್ರವಾರ ನಗರದ ಪ್ರಮುಖ ರಸ್ತೆಗಳಲ್ಲಿ ದ್ವಿಚಕ್ರ ವಾಹನದೊಂದಿಗೆ ಜಾಥಾ ನಡೆಸಲಾಯಿತು.
ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಪ್ರಯುಕ್ತ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಹೆಚ್ಚಳಕ್ಕೆ ಜಾಗೃತಿ ಮೂಡಿಸಲು ನಗರದ ಕನಕ ವೃತ್ತದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಮತದಾನ ಜಾಗೃತಿ ಸಂಬಂಧ ಬೈಕ್ ರ್ಯಾಲಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಸೇರಿದಂತೆ ಹಲವು ಅಧಿಕಾರಿಗಳು ಖುದ್ದು ಬೈಕ್ ಚಲಾಯಿಸಿ ಮುಖ್ಯ ರಸ್ತೆಗಳಲ್ಲಿ ಸಾಗಿದರು. ಈ ಮೂಲಕ ನಿಷ್ಪಕ್ಷಪಾತ ಹಾಗೂ ಕಡ್ಡಾಯ ಮತದಾನದ ಕುರಿತು ಅರಿವು ಮೂಡಿಸಿದರು.
ಚಿತ್ರದುರ್ಗ ನಗರದ ಕನಕವೃತ್ತದಿಂದ ಆರಂಭವಾದ ದ್ವಿಚಕ್ರ ವಾಹನ ಜಾಥಾವು ಸಂಗೊಳ್ಳಿ ರಾಯಣ್ಣ ವೃತ್ತ, ಗಾಂಧಿ ವೃತ್ತ, ಎಸ್.ಬಿ.ಎಂ ವೃತ್ತ ಹಾಗೂ ಪ್ರವಾಸಿ ಮಂದಿರ ಮಾರ್ಗವಾಗಿ ಮಹಾವೀರ ವೃತ್ತ, ಅಂಬೇಡ್ಕರ್ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದವರೆಗೂ ನಡೆಯಿತು.
ಮತದಾನ ಜಾಗೃತಿ ಸಂಬಂಧ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು, ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮೇ 10ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಸ್ವೀಪ್ ಸಮಿತಿಯಿಂದ ಬೈಕ್ ರ್ಯಾಲಿ ಹಮ್ಮಿಕೊಂಡು ಸಾರ್ವಜನಿಕರ ಗಮನ ಸೆಳೆದು ಮತದಾನ ಜಾಗೃತಿ ಕುರಿತು ಸಾರ್ವಜನಿಕರಿಗೆ, ಮತದಾರರಿಗೆ ಅರಿವು ಮೂಡಿಸಲಾಗುತ್ತಿದೆ. ಜಿಲ್ಲೆಯ ಎಲ್ಲಾ ಮತದಾರರು ಮೇ. 10 ರಂದು ತಪ್ಪದೆ ತಮ್ಮ ಮತಗಟ್ಟೆಗಳಿಗೆ ತೆರಳಿ, ಪ್ರಜಾಪ್ರಭುತ್ವದಲ್ಲಿ ನಮಗೆ ನೀಡಲಾಗಿರುವ ಹಕ್ಕುನ್ನು ಮರೆಯದೆ ಚಲಾಯಿಸಬೇಕು ಎಂದು ಹೇಳಿದರು.
ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗದೇ ಸ್ವ ಇಚ್ಛೆಯಿಂದ ನಿರ್ಧಾರ ಕೈಗೊಂಡು ಮತದಾನ ಮಾಡಬೇಕು. ಯಾರಾದರೂ ಆಮಿಷಕ್ಕೆ ಒಳಪಡಿಸಲು ಪ್ರಯತ್ನಿಸಿದರೆ ಅಂತಹ ವಿಚಾರಗಳ ಕುರಿತು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬೈಕ್ ರ್ಯಾಲಿ ಮುಕ್ತಾಯಗೊಂಡ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ, ಎಲ್ಲರೂ ನೈತಿಕ ಮತದಾನ ಮಾಡುವ ಕುರಿತು ಇದೇ ವೇಳೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಕೆ.ರವಿಶಂಕರ್ ರೆಡ್ಡಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನಾಗೇಂದ್ರನಾಯ್ಕ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ತಿಮ್ಮಾರೆಡ್ಡಿ ಸೇರಿದಂತೆ ಶಿಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours