ಕೆಂಪೇಗೌಡ ಪ್ರತಿಮೆ: ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ಹಬ್ಬದ ಸಂಭ್ರಮದಂತೆ ನಡೆಯಲಿ: ಜಿಲ್ಲಾಧಿಕಾರಿ ದಿವ್ಯಾ ಪ್ರಭು

 

 

 

 

ಚಿತ್ರದುರ್ಗ ಅ.27(chitrdaurga)
ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಕ್ಕಾಗಿ ಕೋಟೆನಾಡು ಚಿತ್ರದುರ್ಗದ ಮಣ್ಣನ್ನು ಹೆಮ್ಮೆಯಿಂದ ವಿಭಿನ್ನವಾಗಿ, ಹಬ್ಬದ ಸಂಭ್ರಮದ ರೀತಿಯಲ್ಲಿ ಸಮರ್ಪಿಸಿ, ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ರಾಜ್ಯದ ಎಲ್ಲೆಡೆಯಿಂದ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಮತ್ತು ಕೆಂಪೇಗೌಡ ಥೀಮ್ ಪಾರ್ಕ್‍ನ ಉದ್ಘಾಟನಾ ಅಂಗವಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಅನುಷ್ಠಾನವನ್ನು ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಹಬ್ಬದ ರೀತಿಯಲ್ಲಿ ವ್ಯವಸ್ಥಿತವಾಗಿ ಕಾರ್ಯಗತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವ ಉದ್ದೇಶದಿಂದ ಕಂದಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ನವೆಂಬರ್ 7ರೊಳಗೆ ಪವಿತ್ರ ಮೃತ್ತಿಕೆ ಸಂಗ್ರಹ ಮಾಡಿ ಕಳುಹಿಸಬೇಕಾಗಿರುವುದರಿಂದ ತ್ವರಿತಗತಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಜಿಲ್ಲೆಯ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿಯ ಹಾಗೂ ನಗರ ಪ್ರದೇಶಗಳಲ್ಲಿ ಅಭಿಯಾನ ವಾಹನವು ಸಂಚರಿಸುವಂತೆ ಮಾರ್ಗನಕ್ಷೆ ತಯಾರಿಸಬೇಕು. ಈ ಅಭಿಯಾನದ ಕೆಂಪೇಗೌಡರಥವನ್ನು ಕಲಾತಂಡಗಳು ಹಾಗೂ ಪೂರ್ಣ ಕುಂಭಕಳಶದೊಂದಿಗೆ ವಿಜೃಂಭಣೆಯಿಂದ ಸ್ವಾಗತಿಸಿ, ಪವಿತ್ರ ಮಣ್ಣನ್ನು ಸಂಗ್ರಹಿಸಬೇಕು. ಈ ಅಭಿಯಾನದ ಕುರಿತು  ಪ್ರತಿಯೊಂದ ಗ್ರಾಮ ಮಟ್ಟದಲ್ಲಿ ವ್ಯಾಪಕ ಪ್ರಚಾರ ನೀಡಿ, ಜನರಿಗೆ ಉತ್ತಮ ಸಂದೇಶ ನೀಡಿ ಎಂದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ ಮಾತನಾಡಿ, ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳ್ಳಲು ಪವಿತ್ರ ಮೃತ್ತಿಕೆ ಸಂಗ್ರಹ ಮಾಡುವ ನಿಟ್ಟಿನಲ್ಲಿ “ಕೆಂಪೇಗೌಡರಥ” ನವೆಂಬರ್ 6 ಅಥವಾ 7 ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿಗೆ ಆಗಮಿಸಲಿದೆ ಎಂದರು.
 ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕಾಗಿ ಜಿಲ್ಲಾಮಟ್ಟದ ಸಮಿತಿ ರಚಿಸಲಾಗಿದೆ.   ತಾಲ್ಲೂಕುನಲ್ಲಿ ತಹಶೀಲ್ದಾರ್ ಹಾಗೂ ತಾಪಂ ಇಒ ನೋಡಲ್ ಅಧಿಕಾರಿಗಳಾಗಿರುತ್ತಾರೆ. ಪವಿತ್ರ ಮಣ್ಣು ಸಂಗ್ರಹಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ  ಪಿಡಿಒ ಹಾಗೂ ಗ್ರಾಮ ಲೆಕ್ಕಿಗರಿಗೆ ವಹಿಸಲಾಗಿದ್ದು, ಆ ಗ್ರಾಮದಲ್ಲಿ ಒಂದು ಮುಷ್ಠಿಯಷ್ಟು ಮೃತ್ತಿಕೆ (ಮಣ್ಣು) ಸಮರ್ಪಿಸಬೇಕು ಎಂದರು.
 ಪವಿತ್ರ ಮಣ್ಣು ಸಂಗ್ರಹ ಅಭಿಯಾನವನ್ನು ಈಗಾಗಲೇ ಅಕ್ಟೋಬರ್ 21ರಂದು ಚಾಲನೆ ನೀಡಲಾಗಿದ್ದು, ನವೆಂಬರ್ 7 ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

 

 

[t4b-ticker]

You May Also Like

More From Author

+ There are no comments

Add yours