ಪರಿಣಾಮಕಾರಿಯಾಗಿ ಅನುಷ್ಠಾನವಾಗಲಿ ಗ್ರಾಮ ವಾಸ್ತವ್ಯ: ಶಾಸಕ ಟಿ.ರಘುಮೂರ್ತಿ

 

 

 

 

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 16:
ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಕೈಗೊಳ್ಳುತ್ತಿರುವ ಗ್ರಾಮ ವಾಸ್ತವ್ಯದ ಕುರಿತು ಸಾರ್ವಜನಿಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಅನುಷ್ಠಾನಗೊಳ್ಳಲಿ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ಚಿತ್ರದುರ್ಗ ತಾಲ್ಲೂಕು ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ರಾಯನಹಳ್ಳಿ ಗ್ರಾಮದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾದ ಜಿಲ್ಲಾಧಿಕಾರಿ ಗ್ರಾಮವಾಸ್ತವ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೂ ಮುನ್ನಾ ಗ್ರಾಮದ ಸಮಸ್ಯೆಗಳನ್ನು ಪಟ್ಟಿ ಮಾಡಲಾಗುತ್ತದೆ. 39 ಇಲಾಖೆಗಳ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ. ಸಾಧ್ಯವಾಗದ ಸಮಸ್ಯೆಗಳನ್ನು ಆಯಾ ಇಲಾಖೆಗೆ ಕಳಿಸಿ ಪರಿಹರಿಸಲಾಗುತ್ತದೆ. ಜಿಲ್ಲಾಧಿಕಾರಿಗಳು ಸರ್ಕಾರದ ನಿಯಮದಡಿ ಸಾರ್ವಜನಿಕರಿಗೆ ಸೇವೆ ಒದಗಿಸಲು ಬದ್ದವಾಗಿದ್ದಾರೆ. ಗ್ರಾಮ ವಾಸ್ತವ್ಯದಿಂದ ಸಾರ್ಜನಿಕರು ಸಮಸ್ಯೆಗಳನ್ನು ಹೊತ್ತು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಕ್ಕೆ ಹೋಗುವುದು ತಪ್ಪಿದೆ. ತಾಲ್ಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸ್ಪಂದಿಸಿ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಬೇಕು. ಹಳ್ಳಿಗಳ ಸಮಸ್ಯೆಗೆ ಒಮ್ಮೆಲೇ ಪರಿಹಾರ ದೊರಕುವುದಿಲ್ಲ. ಇವುಗಳನ್ನು ಕಾಲ ಕಾಲಕ್ಕೆ ಪರಿಹರಿಸುತ್ತಲೇ ಇರಬೇಕು ಎಂದರು.

 

 


ಅದ್ಧೂರಿ ಸ್ವಾಗತ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯಕ್ಕೆ ಆಗಮಿಸಿದ ಶಾಸಕ ಟಿ.ರಘುಮೂರ್ತಿ ಹಾಗೂ ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿಯವರಿಗೆ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತ ಕೋರಿದರು. ಜಿಲ್ಲಾಧಿಕಾರಿಗಳ ಭೇಟಿ ಹಿನ್ನಲೆಯಲ್ಲಿ ಗ್ರಾಮವನ್ನು ಹಸಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಗ್ರಾಮಕ್ಕೆ ಆಗಮಿಸುವ ರಸ್ತೆಯಲ್ಲಿ ಜಮಾಯಿಸಿದ್ದ ಗ್ರಾಮಸ್ಥರು, ಸ್ವ ಸಹಾಯ ಸಂಘದ ಮಹಿಳೆಯರು ಜಿಲ್ಲಾಧಿಕಾರಿಗಳನ್ನು ಸಂಭ್ರಮದಿಂದ ಬರಮಾಡಿಕೊಂಡರು. ಗ್ರಾಮದ ಮಹಿಳೆಯರು ಆರತಿ ಎತ್ತಿ, ಪುಷ್ಪವೃಷ್ಠಿಗೈದರು. ಜನಪದ ಕಲಾತಂಡದೊಂದಿಗೆ ಪೂರ್ಣಕುಂಭ ಹೊತ್ತ ಮಹಿಳೆಯರು ಗ್ರಾಮದ ಮುಖ್ಯ ರಸ್ತೆ ಮೂಲಕ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದವರೆಗೆ ಸಂಚರಿಸಲಾಯಿತು.
ಸೌಲಭ್ಯ ವಿತರಣೆ : ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಆದೇಶ ಪ್ರತಿಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಪೌತಿ ಖಾತೆ ಮಾಡಿದ ಪಹಣಿ, ಅಮೃತ ಕಿರು ಉದ್ದಿಮೆ ಯೋಜನೆಯಡಿ ಸ್ತ್ರೀ ಶಕ್ತಿ ಸ್ವ ಸಹಾಯ ಸಂಘಗಳಿಗೆ ಬೀಜಧನ ಚೆಕ್ ವಿತರಣೆ, ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ವಿತರಿಸಲಾಯಿತು.
ಮನೆ ಮನೆಗೆ ತೆರಳಿ ಸಮಸ್ಯೆ ಆಲಿಸಿದ ಡಿಸಿ: ಗ್ರಾಮ ವಾಸ್ತವ್ಯದ ಅಂಗವಾಗಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ರಾಯನಹಳ್ಳಿ ಗ್ರಾಮದ ಮನೆ –ಮನೆಗೆ ತೆರಳಿ ಗ್ರಾಮಸ್ಥರ ಅಹವಾಲು ಆಲಿಸಿದರು.
299 ಅರ್ಜಿ ಸ್ವೀಕಾರ: ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚಿತ್ರದುರ್ಗ ತಾಲ್ಲೂಕಿನ ರಾಯಾನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಒಟ್ಟು 299 ಅರ್ಜಿಗಳನ್ನು ಸ್ವೀಕರಿಸಲಾಯಿತು.
ಕಂದಾಯ ಇಲಾಖೆಯ 90 ಅರ್ಜಿಗಳು ಸ್ವೀಕೃತಗೊಂಡವು. ಇದರಲ್ಲಿ 48 ಪೌತಿಖಾತೆ,  38 ವಿವಿಧ ಪಿಂಚಣಿಗಳ ಅರ್ಜಿ, 2 ನಕಾಶೆ ಕಂಡ ದಾರಿ ಬಗ್ಗೆ ಅರ್ಜಿ, 1 ಪೋಡ್ ರದ್ದು ಪಡಿಸುವ ಬಗ್ಗೆ, 1 ರೇಷನ್ ಕಾರ್ಡ್, 1 ಜಮೀನು ಹದ್ದುಬಸ್ತುಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕೆಇಬಿಗೆ ಸಂಬಂಧಿಸಿದಂತೆ 5 ಅರ್ಜಿಗಳನ್ನು ಸ್ವೀಕರಿಸಲಾಯಿತು. ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 204 ಅರ್ಜಿಗಳನ್ನು ಸ್ವೀಕರಿಸಿ ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಲಾಯಿತು.
ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಹಶೀಲ್ದಾರ್ ಸತ್ಯನಾರಾಯಣ್, ಗ್ರೇಡ್ -2 ತಹಶೀಲ್ದಾರ್ ಡಿ.ಬಿ.ಫಾತೀಮಾ, ಶಿರಸ್ತೆದಾರ ನಾಗರಾಜ್, ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಕಲ್ಲಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ.ಆರ್. ಬಣಕಾರ್, ಕೃಷಿ ಇಲಾಖೆ ಉಪನಿರ್ದೇಶಕ ಪ್ರಭಾಕರ್, ವಿಕಲಚೇತನ ಹಾಗೂ ಹಿರಿಯರ ನಾಗರಿಕರ ಕಲ್ಯಾಣಾಧಿಕಾರಿ ವೈಶಾಲಿ, ಭೂಧಾಖಲೆಗಳ ಸಹಾಯಕ ನಿರ್ದೇಶಕಿ ಯಾಸ್ಮೀನ್ ಬಾನು, ತಾಲೂಕು ಆರೋಗ್ಯ ಅಧಿಕಾರಿ ಬಿ.ವಿ.ಗಿರೀಶ್, ವಲಯ ಅರಣ್ಯ ಅಧಿಕಾರಿ ಸಂದೀಪ್ ನಾಯಕ್,  ಜಿ.ಪಂ.ಇಂಜಿನಿಯರ್ ಪಾತಪ್ಪ,  ಮಾಡನಾಯಕನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಗೌರಮ್ಮ, ಮಾಜಿ ಉಪಾಧ್ಯಕ್ಷ ಗೀತಮ್ಮ ಇದ್ದರು. ಶಿಕ್ಷಕ ಮೃತ್ಯುಂಜಯ ಸ್ವಾಗತಿಸಿದರು. ತಾಲ್ಲೂಕು ಕಚೇರಿಯ ರಂಗನಾಥ್ ಪ್ರಸ್ತಾವಿಕವಾಗಿ ಮಾತನಾಡಿದರು.

[t4b-ticker]

You May Also Like

More From Author

+ There are no comments

Add yours