ಶಿಥಿಲಗೊಂಡಿರುವ ಅಂಗನವಾಡಿ ಕಟ್ಟಡಗಳ ದುರಸ್ತಿ ಕಾರ್ಯ ಶೀಘ್ರ ಕೈಗೊಳ್ಳಿ- ಹಾಲಪ್ಪ ಆಚಾರ್

 

 

 

 

ಚಿತ್ರದುರ್ಗ: (ಕರ್ನಾಟಕ ವಾರ್ತೆ) ಜುಲೈ 05:
ಜಿಲ್ಲೆಯಲ್ಲಿ ಶಿಥಿಲಗೊಂಡಿರುವ ಅಂಗನವಾಡಿ ಕೇಂದ್ರಗಳ ದುರಸ್ತಿ ಕಾರ್ಯವನ್ನು ಪ್ರಥಮಾದ್ಯತೆ ನೀಡಿ ಕೈಗೊಳ್ಳಬೇಕು  ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಹೇಳಿದರು.

 

 


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗನವಾಡಿ ಕೇಂದ್ರಗಳಿಗೆ ನೀರು, ಶೌಚಾಲಯ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ಒದಗಿಸಬೇಕು. ಅಂಗನವಾಡಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮವಹಿಸಬೇಕು ಎಂದು ಸೂಚನೆ ನೀಡಿದರು.
ಶಾಸಕಿ ಪೂರ್ಣಿಮಾ ಕೆ.ಶ್ರೀನಿವಾಸ್ ಮಾತನಾಡಿ, ಕಳೆದ ವರ್ಷದ ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆ ವತಿಯಿಂದ  ಅಂಗನವಾಡಿ ಕೇಂದ್ರಗಳಿಗೆ ನೀರು ಪೂರೈಕೆ ಮಾಡಲು ಕ್ರಮವಹಿಸಲಾಗಿತ್ತು. ಒಂದು ವರ್ಷ ಪೂರ್ಣಗೊಂಡರೂ ಕಾಮಗಾರಿ ಮುಕ್ತಾಯವಾಗಿಲ್ಲ. ಸರ್ಕಾರದ ಹಣ ವ್ಯರ್ಥವಾಗುತ್ತಿದೆ ಎಂದು ದೂರಿದರು.  ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಂಬಂಧಪಟ್ಟ ಪಂಚಾಯಿತಿ ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಕಾಮಗಾರಿ ಕುರಿತು ವರದಿ ಪಡೆದು ನಂತರ ಹಣವನ್ನು ಪಾವತಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒಗೆ ಸೂಚನೆ ನೀಡಿದ ಅವರು, ಕುಡಿಯುವ ನೀರು, ಶೌಚಾಲಯ ನಿರ್ಮಾಣವನ್ನು ಪಂಚಾಯಿತಿಯ 15ನೇ ಹಣಕಾಸು ಯೋಜನೆಯಡಿಯಲ್ಲಿ ಕೈಗೊಳ್ಳುವಂತೆ ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ ಮಾತನಾಡಿ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಕುಡಿಯುವ ನೀರು ಪೂರೈಕೆಗೆ ಜಲಜೀವನ್ ಮಿಷನ್ ವತಿಯಿಂದ ಕ್ರಿಯಾ ಯೋಜನೆ ತಯಾರಿಸಿ, ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಮಾತನಾಡಿ, ಇಲಾಖೆ ವತಿಯಿಂದ ಕಳೆದ ಎರಡು ವರ್ಷದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರ ವಿತರಣೆ ಮಾಡಲು ಸಾಧ್ಯವಾಗಿರಲಿಲ್ಲ. ಆದರೆ ಎರಡು ಸೀರೆ ತೆಗೆದುಕೊಳ್ಳಲು ನೇರವಾಗಿ ಹಣವನ್ನು ಅಂಗನವಾಡಿ ಕಾರ್ಯಕರ್ತೆಯರ ಖಾತೆಗೆ ಜಮೆ ಮಾಡಲಾಗಿದೆ. ಅದರಂತೆ ಔಷಧಿ ಕಿಟ್‍ಗೆ ಹಣ ವಿತರಣೆಗೆ ಕ್ರಮವಹಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅಪೌಷ್ಠಿಕತೆ ಹೋಗಲಾಡಿಸಲು ಕ್ರಮ: ಜಿಲ್ಲೆಯಲ್ಲಿ 126 ಮಂದಿ ತೀವ್ರ ಅಪೌಷ್ಠಿಕತೆ ಹೊಂದಿದ ಮಕ್ಕಳಿದ್ದು, ಈ ಮಕ್ಕಳ ಅಪೌಷ್ಠಿಕತೆ ಹೋಗಲಾಡಿಸಲು ಶೇಂಗಾ, ಹುರಿಗಡಲೆ, ಬೆಲ್ಲ ಮತ್ತಿತರ ಪೌಷ್ಠಿಕಾಂಶವುಳ್ಳ ಆಹಾರ ಮಿಶ್ರಣ (ದಾವಣಗೆರೆ ಮಿಕ್ಸ್) ವಿತರಣೆ ಮಾಡಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆ ವತಿಯಿಂದ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಪೌಷ್ಟಿಕ ಮಕ್ಕಳನ್ನು ಎನ್‍ಆರ್‍ಸಿ ಕೇಂದ್ರಗಳಿಗೆ ದಾಖಲು ಮಾಡಿ, ಪ್ರತಿಯೊಬ್ಬ ಮಕ್ಕಳ ಪ್ರೊಪೈಲ್‍ನ ನಿರ್ವಹಣೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ರಂಗನಾಥ್ ಮಾಹಿತಿ ನೀಡಿದರು.
ಮಹಿಳಾ ದೌರ್ಜನ್ಯ ತಡೆಗೆ ಜಾಗೃತಿ ಮೂಡಿಸಿ: ಜಿಲ್ಲೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆಯಲ್ಲಿ ಮಹಿಳಾ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಅಂದೋಲನ ನಡೆಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಮಹಿಳಾ ದೌರ್ಜನ್ಯ ಪ್ರಕರಣಗಳು ನಡೆದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಇಲಾಖೆ ವತಿಯಿಂದ ವರದಿ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಯುಡಿಐಡಿ ಕಾರ್ಡ್ ಶೇ.90.14 ಪ್ರಗತಿ ಸಾಧನೆ: ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ಕಾರ್ಡ್ ವಿತರಣೆಯಲ್ಲಿ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಗಿಂತ ಚಿತ್ರದುರ್ಗ ಜಿಲ್ಲೆಯು ಶೇ.90.14 ರಷ್ಟು ಪ್ರಗತಿ ಸಾಧನೆ ಸಾಧನೆಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವೈದ್ಯಕೀಯ ಮಂಡಳಿಯಲ್ಲಿ ಬಾಕಿ ಇರುವ ಅರ್ಜಿಗಳನ್ನು ವಿಲೇವಾರಿ ಮಾಡಲು ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಯುಡಿಐಡಿ ಕಾರ್ಡ್ ವಿತರಣೆಗೆ ಕ್ರಮವಹಿಸಬೇಕು. ಯುಡಿಐಡಿ ಕಾರ್ಡ್‍ನಿಂದ ವಿಕಲಚೇತನರು ಸರ್ಕಾರದ ಎಲ್ಲ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸ್ತ್ರೀಶಕ್ತಿ ಸಂಘಗಳಿಗೆ ಬೀಜಧನ ಚೆಕ್ ವಿತರಣೆ, ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರ ಮಿಶ್ರಣ (ದಾವಣಗೆರೆ ಮಿಕ್ಸ್), ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 8 ವಿಕಲಚೇತನರಿಗೆ ದ್ವಿಚಕ್ರ ಮೋಟಾರ್ ವಾಹನ ವಿತರಣೆ, ಶ್ರವಣದೋಷವುಳ್ಳ ಇಬ್ಬರು ವಿಕಲಚೇತನರಿಗೆ ಹೊಲಿಗೆ ಯಂತ್ರ, ಒರ್ವ ಅಂಧ ವಿದ್ಯಾರ್ಥಿಗೆ ಬ್ರೈಲ್ ಕಿಟ್ ವಿತರಿಸಲಾಯಿತು.
ಸಭೆಯಲ್ಲಿ ಕೆಎಸ್‍ಆರ್‍ಟಿಸಿ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಎಂ.ಚಂದ್ರಪ್ಪ, ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ, ಪೂರ್ಣಿಮಾ ಕೆ.ಶ್ರೀನಿವಾಸ್, ಕೆ.ಎಸ್.ನವೀನ್, ರಾಜ್ಯ ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ ರಮೇಶ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ನಂದಿನಿದೇವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಎಸ್.ಬಣಕಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ, ಮಕ್ಕಳ ರಕ್ಷಣಾಧಿಕಾರಿ ಲೋಕೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

[t4b-ticker]

You May Also Like

More From Author

+ There are no comments

Add yours