ಬಾಲಕಾರ್ಮಿಕ ಪದ್ಧತಿ ತಡೆ ಪ್ರತಿಯೊಬ್ಬರ ಜವಾಬ್ದಾರಿ

 

 

 

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.24:
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಯಲ್ಲಿ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಸೆಕ್ಷನ್ 16 ಮತ್ತು 17ರ ಅಡಿಯಲ್ಲಿ ನೇಮಕಗೊಂಡ ನಿರೀಕ್ಷಕರುಗಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ ಕಾಯ್ದೆ 1986) ಹಾಗೂ ತಿದ್ದುಪಡಿ ಕಾಯ್ದೆಯಡಿ 2016ರ ಕಾಯ್ದೆಗಳ ಕುರಿತು ಕರ್ತವ್ಯ ನಿರ್ವಹಿಸಲು ಕ್ರಮಬದ್ಧ ಕಾರ್ಯವಿಧಾನ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿ ಕಂಡುಬಂದಾಗ ಜಾಗರೂಕರಾಗಿ, ಸಂವಿಧಾನದ ಆಶಯ ಪೂರೈಕೆಗಾಗಿ ತಕ್ಷಣವೇ ಮಾಹಿತಿ ರವಾನೆ ಮಾಡಿ, ನಮ್ಮ ಸುತ್ತ-ಮುತ್ತ ಆಗುವ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಜಾಗೃತಿಯಾಗಬೇಕು. ಆ ಮೂಲಕ ಸಂವಿಧಾನದ ಆಶಯ ಪಾಲನೆ ಮಾಡೋಣ ಎಂದು ಸಲಹೆ ನೀಡಿದರು.
ಬಾಲಕಾರ್ಮಿಕ ಪದ್ಧತಿಯನ್ನು ಸಂವಿಧಾನ ವಿರೋಧಿಸಿದೆ. ಸಂವಿಧಾನದಲ್ಲಿ ಹೇಳಿದ ಅಂಶವನ್ನೇ ಪ್ರತ್ಯೇಕವಾಗಿ ಕಾನೂನು ಮಾಡಲಾಗಿದೆ. ಸಂವಿಧಾನದಲ್ಲಿ ಹೇಳಿದ ವಿಷಯನ್ನು ನಾವುಗಳ ಜಾರಿಗೆ ತರಲು ಪ್ರಯತ್ನ ಮಾಡದಿದ್ದರೆ ಸಂವಿಧಾನದ ಉಲ್ಲಂಘನೆಯಾಗುತ್ತದೆ. ಬಾಲಕಾರ್ಮಿಕರನ್ನು ನೋಡಿ, ಕಣ್ಣಿಗೆ ಕಂಡರೂ ಕಾಣಿಸದಂತೆ ಹೋಗುವುದು ಆತ್ಮವಂಚನೆ ಮಾಡಿಕೊಂಡಂತೆ ಎಂದು ಅಭಿಪ್ರಾಯಪಟ್ಟರು.
ಬಾಲ ಕಾರ್ಮಿಕರ ಬಳಸಿಕೊಂಡು, ಬಾಲ ಕಾರ್ಮಿಕರ ದುಡಿಮೆ ಮೇಲೆ ಅವಲಂಬಿಸಿದರೆ ಅದನ್ನು ನಾವು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಕಳೆದ ವರ್ಷ ಮೊಳಕಾಲ್ಮುರು ತಾಲ್ಲೂಕಿನಲ್ಲಿ ಇಟ್ಟಿಗೆ ಭಟ್ಟಿಯಲ್ಲಿ ಕೆಲಸ ಮಾಡುತ್ತಿದ್ದ 9 ಮಂದಿ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ರಕ್ಷಣೆ ಮಾಡಲಾಯಿತು ಎಂದು ತಿಳಿಸಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಮಾತನಾಡಿ, ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸಿಗದಿದ್ದರೆ ದೇಶದಲ್ಲಿ ಉತ್ತಮ ಪ್ರಜೆಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಲು ಅವರಿಗೆ ಸರಿಯಾದ ಸವಲತ್ತುಗಳು ಸಿಗಬೇಕು ಎಂದರು.
ಬಡತನ, ಅನಕ್ಷರತೆ, ಭವಿಷ್ಯದ ಬಗ್ಗೆ ಅರಿವಿಲ್ಲದೆ ಪೋಷಕರು ತಮ್ಮ ಮಕ್ಕಳನ್ನು ಬಾಲಕಾರ್ಮಿಕರಾಗಿ ನೇಮಿಸುವ ಸಾಧ್ಯತೆ ಇದೆ. ಬಾಲ ಕಾರ್ಮಿಕರು ಕಂಡುಬಂದಲ್ಲಿ 112  ಅಥವಾ 1098  ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ರಕ್ಷಣೆ ಮಾಡಬೇಕು ಎಂದು ತಿಳಿಸಿದರು.
ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಯ ಮಕ್ಕಳ ಸಂರಕ್ಷಣಾ ಯೋಜನೆಯ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಹಾಗೂ ಸಂಪನ್ಮೂಲ ವ್ಯಕ್ತಿ ಕೆ.ರಾಘವೇಂದ್ರ ಭಟ್ ಅವರು ಸೆಕ್ಷನ್ 16 ಮತ್ತು 17ರ ಅಡಿಯಲ್ಲಿ ನೇಮಕಗೊಂಡ ನಿರೀಕ್ಷಕರುಗಳಿಗೆ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ ಕಾಯ್ದೆ 1986) ಹಾಗೂ ತಿದ್ದುಪಡಿ ಕಾಯ್ದೆಯಡಿ 2016ರ ಕಾಯ್ದೆಗಳ ಕುರಿತು ಕರ್ತವ್ಯ ನಿರ್ವಹಿಸಲು ಕ್ರಮಬದ್ಧ ಕಾರ್ಯವಿಧಾನ ಕುರಿತು ತರಬೇತಿ ನೀಡಿದರು.
ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ಅವರು ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ, ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

 

[t4b-ticker]

You May Also Like

More From Author

+ There are no comments

Add yours