ಚಿತ್ರದುರ್ಗ ಜಿಲ್ಲೆಯಲ್ಲಿ ಮಾರ್ಚ್ 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.23:  ರಾಷ್ಟ್ರೀಯ ಪಲ್ಸ್ ಕಾರ್ಯಕ್ರಮವು ಮಾರ್ಚ್ 03 ರಿಂದ 06 ರವರೆಗೆ ನಡೆಯಲಿದ್ದು, ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೋ ಹನಿ ಹಾಕಿಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ 2024ರ ಮಾರ್ಚ್ 3 ರಿಂದ 6 ರವರೆಗೆ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಏರ್ಪಡಿಸಿದ್ದು, ಜಿಲ್ಲೆಯ 1,35,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ವ್ಯವಸ್ಥಿತವಾಗಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶಾಲಾ ಮಕ್ಕಳಿಂದ ಪ್ರಭಾತಫೇರಿ ನಡೆಸಬೇಕು. ನಗರ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಡಿಯಲ್ಲಿಯೂ ಜಾಥಾ ಕಾರ್ಯಕ್ರಮ ಆಯೋಜಿಸಬೇಕು. ಪೋಲಿಯೋದಿಂದ  ಉಂಟಾಗುವ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಜತೆಗೆ ವಿವಿಧ ಇಲಾಖೆಗಳ ಸಮನ್ವಯತೆ, ಸಹಕಾರದೊಂದಿಗೆ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಕ್ರಿಯಾ ಯೋಜನೆ ಕುರಿತು ಮಾಹಿತಿ ನೀಡಿ, ಈ ಬಾರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮವು ಮಾರ್ಚ್ 03 ರಿಂದ 06 ರವರೆಗೆ ನಡೆಯಲಿದ್ದು, 0-5 ವರ್ಷದೊಳಗಿನ ನಗರ ಪ್ರದೇಶದ 31829 ಮಕ್ಕಳು, ಗ್ರಾಮೀಣ ಪ್ರದೇಶದ 103276 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1,35,105 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.  ಲಸಿಕಾ ಕಾರ್ಯಕ್ರಮಕ್ಕಾಗಿ  1084 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿ, 2,291 ಲಸಿಕಾ ಕಾರ್ಯಕರ್ತರು, 259 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಮಾರ್ಚ್ 3 ರಂದು ಲಸಿಕಾ ಕೇಂದ್ರಗಳಲ್ಲಿಯೇ ಶೇ.95 ರಷ್ಟು ಪೋಲಿಯೋ ಲಸಿಕೆ ಹಾಕಲಾಗುವುದು. ನಂತರದ ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡುವುದರ ಮೂಲಕ ಲಸಿಕೆ ಹಾಕಲಾಗುವುದು ಎಂದರು.
ಬೇಸಿಗೆಯಲ್ಲಿ ಬಿಸಿಲು ಹೆಚ್ಚಳದಿಂದಾಗಿ ಲಸಿಕೆ ಹಾಳಾಗುವ ಸಾಧ್ಯತೆ ಇರುವುದರಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಗಮನಹರಿಸಿ, ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ವಿಶ್ವ ಆರೋಗ್ಯ ಸಂಸ್ಥೆಯ  ಶ್ರೀಧರ್ ಮಾತನಾಡಿ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನದಲ್ಲಿ ಕಳೆದ ವರ್ಷ 11 ಮಕ್ಕಳು ಪೋಲಿಯೋಗೆ ತುತ್ತಾಗಿದ್ದಾರೆ. ಹಾಗಾಗಿ ನಾವು  ಪೋಲಿಯೋ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ನಮ್ಮ ರಾಜ್ಯದಲ್ಲಿ 2007 ರ ನಂತರ ಇಲ್ಲಿಯವರೆಗೂ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ಕಳೆದ ಬಾರಿ ಜಿಲ್ಲೆಯಲ್ಲಿ ಶೇ.95 ರಷ್ಟು ಸಾಧನೆಯಾಗಿದೆ. ಈ ಬಾರಿ ವಿಶೇಷವಾಗಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಿಗೆ ಹೆಚ್ಚಿನ ಗಮನಹರಿಸಿ, ಹೆಚ್ಚಿನ ಸಾಧನೆ ಮಾಡಲು ವಿವಿಧ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕಿದೆ ಎಂದರು.
ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅಭಿನವ್ ಮಾತನಾಡಿ, ಈಗಾಗಲೇ ಪೋಲಿಯೋ ಮುಕ್ತ ಭಾರತ ಎಂದು ಘೋಷಣೆಯಾಗಿದ್ದು, ಒಂದು ಪೋಲಿಯೋ ಪ್ರಕರಣ ದಾಖಲಾದರೂ ರಾಷ್ಟ್ರಮಟ್ಟದಲ್ಲಿ ಮಾತ್ರವಲ್ಲದೇ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಸುದ್ದಿಯಾಗಲಿದೆ. ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.
ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಬಹಳ ಮುಖ್ಯ ಪಾತ್ರವಹಿಲಿಸಲಿದ್ದಾರೆ. ಶಾಲಾ ಮಕ್ಕಳಿಂದ ಜಾಥಾ ಕಾರ್ಯಕ್ರಮ ನಡೆಸುವುದು, ಬೆಸ್ಕಾಂ ನವರು ಮಾರ್ಚ್ 01 ರಿಂದ 6 ರವರೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಬೆಸ್ಕಾಂ ಅಧಿಕಾರಿಗಳು ಕ್ರಮವಹಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕಾಗಿ 173 ವಾಹನಗಳ ಅವಶ್ಯಕತೆ ಇದೆ. ವಾಹನಗಳ ವ್ಯವಸ್ಥೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅನುಷ್ಠಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಇದ್ದರು
[t4b-ticker]

You May Also Like

More From Author

+ There are no comments

Add yours