ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ವಿವಾದಕ್ಕೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಸರಣಿ ಸಭೆ ಹಾಗೂ ಮನವೊಲಿಕೆಯ ಪ್ರಯತ್ನಗಳು ಫಲ ನೀಡಿದ್ದು, ತಾವು ನೀಡಿದ್ದ ರಾಜೀನಾಮೆಯನ್ನು ಹಿಂಪಡೆಯಲು ರೆಡ್ಡಿ ಅವರು ಅಧಿಕೃತವಾಗಿ ಒಪ್ಪಿಗೆ ಸೂಚಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನೂತನ ಸಚಿವ ಸಂಪುಟ ರಚನೆಯ ವೇಳೆ ರಾಮಲಿಂಗಾರೆಡ್ಡಿ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ತಮಗೇ ನೀಡಬೇಕೆಂದು ಬಯಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಈ ಜವಾಬ್ದಾರಿಯನ್ನು ಕೃಷ್ಣ ಬೈರೇಗೌಡ ಅವರಿಗೆ ವಹಿಸಿ, ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆಯ ಉಸ್ತುವಾರಿಯನ್ನು ನೀಡಿತ್ತು. ಹೈಕಮಾಂಡ್ನ ಈ ನಿರ್ಧಾರದಿಂದ ತೀವ್ರ ಬೇಸರಗೊಂಡಿದ್ದ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಸಮಾಧಾನ ಹೊರಹಾಕಿದ್ದರು. ಆದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ರಾಜೀನಾಮೆಯನ್ನು ಅಂಗೀಕರಿಸಲು ನಿರಾಕರಿಸಿದ್ದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ‘ರಾಮಲಿಂಗಾರೆಡ್ಡಿ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜಾಣ್ಮೆ ಕಾಂಗ್ರೆಸ್ ಪಕ್ಷಕ್ಕೆ ಅತ್ಯಂತ ಅಮೂಲ್ಯವಾದುದು. ಅವರು ಕೇವಲ ಒಬ್ಬ ನಾಯಕರಲ್ಲ, ಬದಲಿಗೆ ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆದಿದ್ದಾರೆ,’ ಎಂದು ತಿಳಿಸಿದರು.
ರೆಡ್ಡಿ ರಾಜಕೀಯ ಜೀವನದ ಬಗ್ಗೆ ಸುರ್ಜೇವಾಲಾ ಮಹತ್ವದ ಮಾಹಿತಿ ಅಲ್ಲದೆ ರಾಮಲಿಂಗಾ ರೆಡ್ಡಿ ಅವರು 1989ರಿಂದ ಸತತ 8 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಲವು ಬಾರಿ ಸಚಿವರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ,’ ಎಂದು ಅವರ ಹಿರಿತನವನ್ನು ಶ್ಲಾಘಿಸಿದರು. ರಾಮಲಿಂಗಾ ರೆಡ್ಡಿ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಕರ್ನಾಟಕದಾದ್ಯಂತ ಲಕ್ಷಾಂತರ ಕಾರ್ಯಕರ್ತರೊಂದಿಗೆ ಭಾವನಾತ್ಮಕ ಮತ್ತು ಅವಿನಾಭಾವ ಸಂಬಂಧವನ್ನು ಹೊಂದಿದ್ದಾರೆ. ಇನ್ನು ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಸುದ್ದಿ ತಿಳಿಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್ ಹೈಕಮಾಂಡ್, ಸಿಎಂ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿ.ಕೆ. ಹರಿಪ್ರಸಾದ್ ಅವರನ್ನೊಳಗೊಂಡ ತಂಡ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿತು. ‘ಕೆಲ ತಪ್ಪು ಸಂವಹನಗಳಿಂದಾಗಿ ಈ ಗೊಂದಲ ಸೃಷ್ಟಿಯಾಗಿತ್ತು. ನಾವೆಲ್ಲರೂ ಒಟ್ಟಾಗಿ ಕುಳಿತು ಮಾತನಾಡಿದ ಬಳಿಕ ಗೊಂದಲಗಳು ಬಗೆಹರಿದಿವೆ. ರಾಮಲಿಂಗಾರೆಡ್ಡಿ ಅವರು ಮುಂದೆಯೂ ಕಾಂಗ್ರೆಸ್ ಪಕ್ಷದ ಸಚಿವರಾಗಿ ಜವಾಬ್ದಾರಿಯನ್ನು ಮುಂದುವರಿಸಲಿದ್ದಾರೆ,’ ಎಂದು ಸುರ್ಜೇವಾಲಾ ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಎದ್ದಿದ್ದ ಭಿನ್ನಮತ ಸದ್ಯಕ್ಕೆ ಸಂಪೂರ್ಣವಾಗಿ ಶಮನಗೊಂಡಂತಾಗಿದೆ.





