ಮೇ.23 ರಿಂದ ಜೂನ್.3ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ

 

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.16: ಮೇ.23 ರಿಂದ ಜೂನ್.3ರ ವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆಗಳು ನಡೆಯಲಿವೆ. ಜಿಲ್ಲೆಯಲ್ಲಿ 4782 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದು, ಒಟ್ಟು 9 ಪರೀಕಾ ್ಷಕೇಂದ್ರದಲ್ಲಿ ಪರೀಕ್ಷೆ ಜರುಗಲಿದೆ.
ಈ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ಜರುಗಿತು.

ಪರೀಕ್ಷಾ ಕೇಂದ್ರಗಳ ಸುತ್ತ ಅಗತ್ಯ ಬಂದೊಬಸ್ತ್ ಕಲ್ಪಿಸಬೇಕು. ಪೂರಕ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲವಾಗದಂತೆ ಮಾಹಿತಿಯನ್ನು ನೀಡಬೇಕು. ಸೂಕ್ತ ಪೊಲೀಸ್ ರಕ್ಷಣೆಯಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷೆ ಕೇಂದ್ರಗಳಿಗೆ ಕೊಂಡಯ್ಯಬೇಕು. ವೀಕ್ಷಕರನ್ನಾಗಿ ನೇಮಿಸಿರುವ ಅಧಿಕಾರಿಗಳು ಪರೀಕ್ಷೆಗೆ ವೇಳೆ ಎರೆಡು ಗಂಟೆ ಮುಂಚಿತವಾಗಿಯೇ ಕೇಂದ್ರಗಳಿಗೆ ತೆರಳಬೇಕು. ವೀಕ್ಷಕರ ನೇತೃತ್ವದಲ್ಲಿ ಪ್ರಶ್ನೆ ಪತ್ರಿಕೆಗಳ ಬಂಡಲ್‍ಗಳನ್ನು ಪಡೆದುಕೊಂಡು ನಿಯಮಾನುಸಾರ ತೆರೆಯಬೇಕು. ಪರೀಕ್ಷೆಗೆ ಗೈರು ಹಾಜರಾದವರ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್ ಮೂಲಕ ಪಿ.ಯು. ಮಂಡಳಿಗೆ ಕಳುಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಗೆ ಅವಕಾಶವಿಲ್ಲ. ಪ್ರಶ್ನೆ ಪತ್ರಿಕೆಗಳ ರಕ್ಷಣೆಗಾಗಿ  ನೇಮಿಸಿರುವ ವಿಶೇಷ ಪ್ರಶ್ನೆಪತ್ರಿಕಾ ಪಾಲಕರ ತ್ರಿ ಸದಸ್ಯ ಸಮತಿ ನಿಯಮಾನುಸಾರ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಸೂಚನೆ ನೀಡಿದರು.

ನಿಷೇಧಾಜ್ಞೆ ಜಾರಿ: ಪೂರಕ ಪರೀಕ್ಷೆಗಳು ನಡೆಯುವ ದಿನಗಳಂದು, ಪರೀಕ್ಷೆ ಕೇಂದ್ರದ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ವ್ಯಾಪ್ತಿಯಲ್ಲಿ ಯಾವುದೇ ಜೆರಾಕ್ಸ್ ಹಾಗೂ ಕಂಪ್ಯೂಟರ್ ಸೆಂಟರ್‍ಗಳು ನಿಷೇಧಾಜ್ಞೆ ಸಮಯದಲ್ಲಿ ಕಾರ್ಯನಿರ್ವಹಿಸುವಂತಿಲ್ಲ.

ಮೊಬೈಲ್ ನಿಷೇಧ : ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಫೋನ್‍ಗಳನ್ನು ತರುವುದನ್ನು ಕಡ್ಡಾಯಾವಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೊಠಡಿಗೆ ವಿದ್ಯಾರ್ಥಿಗಳು ತೆರವಳುವ ಮುನ್ನಾ ಸೂಕ್ತವಾಗಿ ತಪಾಸಣೆ ನಡೆಸಬೇಕು. ಪರೀಕ್ಷೆ ನಡಯುವ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ.

ಚಿತ್ರದುರ್ಗ ನಗರದಲ್ಲಿ 3, ಚಳ್ಳಕೆರೆ ನಗರದಲ್ಲಿ 2 ಹಾಗೂ ಹಿರಿಯೂರು, ಹೊಸದುರ್ಗ, ಮೊಳಕಾಲ್ಮೂರು, ಹೊಳಲ್ಕೆರೆ ನಗರದಲ್ಲಿ ತಲಾ ಒಂದು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳಿಗೆ 129 ಕಾಲೇಜುಗಳು ಸಂಮಿಳಿತವಾಗಿವೆ. ಕಲಾ ವಿಭಾಗದಲ್ಲಿ 2142, ವಾಣಿಜ್ಯ ವಿಭಾಗದಲ್ಲಿ 1141 ಹಾಗೂ ವಿಜ್ಞಾನ ವಿಭಾಗದಲ್ಲಿ 1499 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ ಎಂದು ಪಿಯು ಉಪನಿರ್ದೇಶಕ ಎನ್.ರಾಜು ಸಭೆಯಲ್ಲಿ ಮಾಹಿತಿ ನೀಡಿದರು.

ಪರೀಕ್ಷಾ ವೇಳಾಪಟ್ಟಿ : ಮೇ.23 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ ಕನ್ನಡ ಮತ್ತು ಅರೇಬಿಕ್ ಭಾಷೆ, ಮೇ.24 ರಂದು ಐಚ್ಛಿಕ ಕನ್ನಡ, ರಸಾಯನ ಶಾಸ್ತ್ರ, ಮೂಲ ಗಣಿತ, ಮೇ.25 ರಂದು ಇಂಗೀಷ್ ಭಾಷೆ, ಇದನ್ನು ಹೊರತು ಪಡಿಸಿ ಮಧ್ಯಾಹ್ನ 2:15 ರಿಂದ 5:30 ವರೆಗೆ ಮಾಹಿತಿ ತಂತ್ರಜ್ಞಾನ, ರೀಟೆಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್, ಮೇ.26 ಶುಕ್ರವಾರ ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಮೇ.27 ರಂದು ಇತಿಹಾಸ, ಸಂಖ್ಯಾಶಾಸ್ತ್ರ,  ಮೇ.29 ರಂದು ಹಿಂದಿ, ಇದನ್ನು ಹೊರತು ಪಡಿಸಿ ಮಧ್ಯಾಹ್ನ 2:15 ರಿಂದ 5:30 ವರೆಗೆ ತಮಿಳು,ತೆಲುಗು,ಮಾಲಯಾಳಂ, ಮರಾಠಿ,ಉರ್ದು, ಸಂಸ್ಕøತಿ, ಫ್ರೆಂಚ್, ಮೇ.30ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ವರೆಗೆ ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ, ಮೇ.31 ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣಶಾಸ್ತ್ರ,ಗೃಹ ವಿಜ್ಞಾನ, ಜೂನ್.1 ರಂದು ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ, ಮೇ.2 ತರ್ಕಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ವ್ಯವಹಾರ  ಅಧ್ಯಯನ, ಮೇ.3 ಅರ್ಥಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.
ಈ ಸಂದರ್ಭದಲ್ಲಿ ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಇದ್ದರು.

************

ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ
11 ಪರೀಕ್ಷಾ ಕೇಂದ್ರ, 5379 ವಿದ್ಯಾರ್ಥಿಗಳು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.16: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇದೇ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 5379 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು, ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಾಮಾನ್ಯ ಪ್ರವೇಶ ಪರೀಕ್ಷಾ ಸಿದ್ದತೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ತುಂಬಾ ನಿಗಾವಹಿಸಿ, ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದರು.

ಸಾಮಾನ್ಯ ಪ್ರವೇಶ ಪರೀಕ್ಷೆ ಸಂಬಂಧ 11 ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು ನೇಮಿಸಲಾಗಿದೆ. ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ವಿಶೇಷಾ ಜಾಗೃತದಳದ ಸದಸ್ಯರು ಹಾಗೂ ತ್ರಿಸದಸ್ಯ ಸಮಿತಿಯ ನಾಲ್ಕು ತಂಡಗಳ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಕೊಂಡೊಯ್ಯುವ ಮತ್ತು ವಿತರಣೆ ಮಾಡುವ ಸಮಯಕ್ಕೆ ಪ್ರತಿ ತಾಲ್ಲೂಕಿನ ಮಾರ್ಗಾಧಿಕಾರಿಗಳ ಜೊತೆಗೆ ಪೊಲೀಸ್ ರಕ್ಷಣೆ ನೀಡಬೇಕು. ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಪ್ರಾರಂಭವಾಗುವುದಕ್ಕಿಂತ ಒಂದು ಗಂಟೆ ಮೊದಲು ಹಾಗೂ ಪರೀಕ್ಷೆ ನಂತರ 30 ನಿಮಿಷಗಳು ಪೊಲೀಸ್ ಬಂದೋಬಸ್ತಿನ ಅವಶ್ಯಕತೆ ಇರುತ್ತದೆ ಎಂದರು.

ವಿಜ್ಞಾನ ವಿಷಯವನ್ನು ಬೋಧಿಸುವ ಉಪನ್ಯಾಸಕರು, ಶಿಕ್ಷಕರು ಹಾಗೂ ಸಂಬಂಧಿಕರ, ಸ್ವಂತ ಮಕ್ಕಳು ಸಿಇಟಿ ಪರೀಕ್ಷೆಗೆ ಹಾಜರಾಗುತ್ತಿದ್ದರೆ ಅಂತಹ ಉಪನ್ಯಾಸಕರು, ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವಂತೆ ಇಲ್ಲ ಎಂದು ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವುದು ಮತ್ತು ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗುವುದು ಎಂದು ಹೇಳಿದರು.
ಮೊಬೈಲ್ ಬಳಕೆ ನಿಷೇಧ, ವಾಚ್ ಹಾಗೂ ಆಭರಣ ಧರಿಸುವಂತಿಲ್ಲ:
ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನುಗಳನ್ನು ತರುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ವಾಚ್, ಆಭರಣ, ತುಂಬು ತೋಳಿನ ವಸ್ತ್ರಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ಗೋಡೆ ಗಡಿಯಾರ ಇರುತ್ತದೆ. ವಿದ್ಯಾರ್ಥಿಗಳು ಸರಿಯಾಗಿ ತಪಾಸಣೆ ಮಾಡಿ  ಪರೀಕ್ಷಾ ಕೇಂದ್ರಗಳಿಗೆ ಕಳುಹಿಸಿಕೊಡಬೇಕು. ಸಿಇಟಿ ಪರೀಕ್ಷೆಗಳ ಮೂಲಕ ಪ್ರತಿಭಾವಂತ  ವಿದ್ಯಾರ್ಥಿಗಳು ಮೆಡಿಕಲ್ ಹಾಗೂ ಇಂಜಿನಿಯರ್ ವ್ಯಾಸಂಗದ ಸೀಟುಗಳನ್ನು ಪಡೆಯುಲಿದ್ದಾರೆ.

ಕೊಠಡಿ ಮೇಲ್ವಿಚಾರಕರಾಗಿ ಯಾವುದೇ ಕಾರಣಕ್ಕೆ ವಿಜ್ಞಾನ ಉಪನ್ಯಾಸಕರನ್ನು ನಿಯೋಜಿಸಬಾರದು. ಕಲಾ ಮತ್ತು ವಾಣಿಜ್ಯ ವಿಭಾಗದ ಉಪನ್ಯಾಸಕರನ್ನು ನಿಯೋಜಿಸಬೇಕು ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಉಪನ್ಯಾಸಕರು, ಕಚೇರಿ ಸಿಬ್ಬಂದಿಯವರು ಪರೀಕ್ಷೆ ನಡೆಯುವ ಅವಧಿಯಲ್ಲಿ ಮೊಬೈಲ್ ಫೋನುಗಳನ್ನು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮುಖ್ಯ ಅಧೀಕ್ಷಕರು ಬೇಸಿಕ್ ಸೆಟ್ ಉಪಯೋಗಿಸಲು ಅವಕಾಶ ನೀಡಿದೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ಮಾತನಾಡಿ, ಇದೇ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಎಂ.ಕೆ.ಹಟ್ಟಿ ಎಸ್‍ಜೆಎಂ ಪದವಿಪೂರ್ವ ಕಾಲೇಜು, ಪಿ.ಕೆ.ಹಳ್ಳಿ ಕೆಎಂಎಸ್ ಪದವಿಪೂರ್ವ ಕಾಲೇಜು, ಎಸ್‍ಆರ್‍ಎಸ್ ಪದವಿಪೂರ್ವ ಕಾಲೇಜು, ಮಹಾರಾಣಿ ಪದವಿಪೂರ್ವ ಕಾಲೇಜು, ವಾಸವಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಡಾನ್‍ಬಾಸ್ಕೋ ಪದವಿಪೂರ್ವ ಕಾಲೇಜು, ಗಾರೇಹಟ್ಟಿ ಬೃಹನ್ಮಠ ಪದವಿಪೂರ್ವ ಕಾಲೇಜು, ಹೊಳಲ್ಕೆರೆ ರಸ್ತೆಯ ಎಸ್‍ಜೆಎಂ ಪದವಿಪೂರ್ವ ಕಾಲೇಜು, ಚಿನ್ಮೂಲಾದ್ರಿ ಪದವಿಪೂರ್ವ ಕಾಲೇಜು ಸೇರಿದಂತೆ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಮೇ.20ರಂದು ಬೆಳಿಗ್ಗೆ 10 ರಿಂದ 11.50 ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಮೇ.21ರಂದು ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ ಹಾಗೂ ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ ಎಂದರು.

ಸಭೆಯಲ್ಲಿ ತಹಶೀಲ್ದಾರ್ ಡಾ.ನಾಗವೇಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಇದ್ದರು.

[t4b-ticker]

You May Also Like

More From Author

+ There are no comments

Add yours