ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ- ದಿವ್ಯಪ್ರಭು ಜಿ.ಆರ್.ಜೆ.

 

 

 

 

ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ

 

 

ಚಿತ್ರದುರ್ಗ ಸೆ. 27 (ಕರ್ನಾಟಕ ವಾರ್ತೆ) :
ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುವ ನಾನಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸೌಲಭ್ಯಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಹಾಗೂ ತ್ವರಿತವಾಗಿ ಸೌಲಭ್ಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ಏರ್ಪಡಿಸಲಾದ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳಲ್ಲಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ಪ್ರೋತ್ಸಾಹಧನ ನೀಡಿಕೆ ಸೇರಿದಂತೆ  ವಿವಿಧ ಸೌಲಭ್ಯಗಳನ್ನು ನೀಡಲು ಇದುವರೆಗೂ ಫಲಾನುಭವಿಗಳ ಆಯ್ಕೆ ಮಾಡದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲ ನಗರ, ಸ್ಥಳೀಯ ಸಂಸ್ಥೆಗಳು ಎಸ್‍ಸಿಪಿ, ಟಿಎಸ್‍ಪಿ ಯೋಜನೆಗೆ ಸಂಬಂಧಿಸಿದ ಎಲ್ಲ ಕಾರ್ಯಕ್ರಮಗಳಡಿ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ನಿಯಮಾನುಸಾರ ಪೂರ್ಣಗೊಳಿಸಿ, ಸವಲತ್ತು ವಿತರಣೆ ಮಾಡಬೇಕು, ಫಲಾನುಭವಿಗಳ ಆಯ್ಕೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು.  ಅದೇ ರೀತಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಯಡಿ ನಗರ, ಪಟ್ಟಣಗಳಲ್ಲಿ ವಿವಿಧ ರಸ್ತೆ, ಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೂಡ ಪೂರ್ಣಗೊಳಿಸಬೇಕಿದ್ದು, ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪೌರಕಾರ್ಮಿಕರಿಗೆ ಕಾಲಕಾಲಕ್ಕೆ ವೇತನ ಪಾವತಿಯಾಗದಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು.  ಪೌರಕಾರ್ಮಿಕರಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೌಕರ ವರ್ಗದವರಿಗೆ ಪ್ರತಿ ತಿಂಗಳು ಸರಿಯಾಗಿ ವೇತನ ನೀಡಬೇಕು, ಅನಗತ್ಯ ವಿಳಂಬ ಮಾಡುವುದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಚಿತ್ರದುರ್ಗ ನಗರಸಭೆ ವತಿಯಿಂದ ಪೌರಕಾರ್ಮಿಕರ ವಿಶ್ರಾಂತಿ ಕೊಠಡಿ ನಿರ್ಮಾಣ ಕೈಗೊಳ್ಳಬೇಕಾಗಿದ್ದು, ಇದುವರೆಗೂ ಸ್ಥಳ ಗುರುತಿಸಿಲ್ಲ, ಹೀಗಾಗಿ ಕೂಡಲೆ ಸ್ಥಳ ಗುರುತಿಸಿ ನಿಗದಿತ ಅನುದಾನದಲ್ಲಿ ಉತ್ತಮವಾಗಿ ಪೌರಕಾರ್ಮಿಕರ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು, ಈ ಕುರಿತ ಪ್ರಕ್ರಿಯೆ ಕೂಡಲೆ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.
 ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ಇಲಾಖೆಗಳಡಿ ಕೈಗೊಳ್ಳುವ ಐಇಸಿ ಕಾರ್ಯಕ್ರಮಗಳಡಿ ಕೈಗೊಳ್ಳುವ ಚಟುವಟಿಕೆಗಳಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕುರಿತಂತೆ ಹಾಗೂ ಕಾಯ್ದೆಯ ಬಗ್ಗೆಯೂ ವಿಷಯಗಳನ್ನು ಸೇರ್ಪಡೆಗೊಳಿಸಿಕೊಂಡು ಪ್ರಚಾರ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಎಸ್‍ಸಿಪಿ ಹಾಗೂ ಟಿಎಸ್‍ಪಿ ಯೋಜನೆಗಳಡಿ ವಿವಿಧ ಇಲಾಖೆಗಳಿಂದ ಆಗಿರುವ ಪ್ರಗತಿಯನ್ನು ಇದೇ ಸಂದರ್ಭದಲ್ಲಿ ಪರಿಶೀಲಿಸಲಾಯಿತು, ಅಲ್ಲದೆ ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯೊಳಗೆ ಎಸ್‍ಸಿಪಿ, ಟಿಎಸ್‍ಪಿ ಯೋಜನೆಯಡಿ ಒದಗಿಸಲಾಗುವ ಅನುದಾನವನ್ನು ಉದ್ದೇಶಿತ ಯೋಜನೆಗಳಿಗೆ ಖರ್ಚು ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರಕುಮಾರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
[t4b-ticker]

You May Also Like

More From Author

+ There are no comments

Add yours