- ನವಿ ಮುಂಬೈ: ವುಮೆನ್ಸ್ ಪ್ರೀಮಿಯರ್ ಲೀಗ್ 2026ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ರೌಂಡರ್ ಶ್ರೇಯಾಂಕಾ ಪಾಟೀಲ್ ಭರ್ಜರಿ ಸಾಧನೆ ಮಾಡುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಗುಜರಾತ್ ಜೈಂಟ್ಸ್ ವಿರುದ್ಧ 5 ವಿಕೆಟ್ ಕಬಳಿಸುವ ಮೂಲಕ WPL ಇತಿಹಾಸದಲ್ಲಿ ಅಪರೂಪದ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
- ನವಿ ಮುಂಬೈನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 9ನೇ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಶ್ರೇಯಾಂಕಾ ಪಾಟೀಲ್ 3.5 ಓವರ್ಗಳಲ್ಲಿ ಕೇವಲ 23 ರನ್ ನೀಡಿ 5 ವಿಕೆಟ್ ಕಬಳಿಸಿದರು. ಈ ಸಾಧನೆಯೊಂದಿಗೆ 23 ವರ್ಷದ ಶ್ರೇಯಾಂಕಾ, WPL ಇತಿಹಾಸದಲ್ಲಿ 5 ವಿಕೆಟ್ ಪಡೆದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಪಂದ್ಯದಿಂದ ಮತ್ತೊಂದು ಮಹತ್ವದ ದಾಖಲೆಗೂ ಶ್ರೇಯಾಂಕಾ ಸಾಕ್ಷಿಯಾಗಿದ್ದಾರೆ. ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಮೂರು ಬಾರಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಕಬಳಿಸಿದ ಏಕೈಕ ಬೌಲರ್ ಎಂಬ ದಾಖಲೆಯನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ WPLನಲ್ಲಿ ಮೂರನೇ ಬಾರಿ ಶ್ರೇಯಾಂಕಾ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದಿದ್ದಾರೆ. ಇದಕ್ಕೂ ಮುನ್ನ 2024ರ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ಓವರ್ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಅಲ್ಲದೆ 2024ರ WPL ಫೈನಲ್ನಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 12 ರನ್ ನೀಡಿ 4 ವಿಕೆಟ್ ಉರುಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.ಒಟ್ಟಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಶ್ರೇಯಾಂಕಾ ಪಾಟೀಲ್ ಇದುವರೆಗೆ 18 ಪಂದ್ಯಗಳನ್ನು ಆಡಿದ್ದು, ಈ ಪಂದ್ಯಗಳಲ್ಲಿ 317 ಎಸೆತಗಳನ್ನು ಎಸೆದು 27 ವಿಕೆಟ್ ಕಬಳಿಸಿದ್ದಾರೆ. ಈ ಪೈಕಿ ಮೂರು ಬಾರಿ 4 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್ ಪಡೆಯುವ ಮೂಲಕ WPLನಲ್ಲಿ ತಮ್ಮದೇ ಆದ ವಿಶೇಷ ಸ್ಥಾನವನ್ನು ಗಳಿಸಿದ್ದಾರೆ. ಟಗರು ಪುಟ್ಟಿ ಖ್ಯಾತಿಯ ಶ್ರೇಯಾಂಕಾ ಪಾಟೀಲ್, ತಮ್ಮ ಸತತ ಪ್ರದರ್ಶನ ಮತ್ತು ಹೋರಾಟದ ಮನೋಭಾವದಿಂದ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿದ್ದು, RCB ತಂಡದ ಬೌಲಿಂಗ್ ವಿಭಾಗದ ಪ್ರಮುಖ ಶಕ್ತಿಯಾಗಿ ಹೊರಹೊಮ್ಮಿದ್ದಾರೆ.






