ಸಾಮಾಜಿಕ ಮಾಧ್ಯಮ, ಸುಳ್ಳು ಹಾಗೂ ಕಾಸಿಗಾಗಿ ಸುದ್ದಿಯ ಮೇಲೆ ನಿಗಾ ಇರಿಸಿ:ಡಿಸಿ

 

ಚಿತ್ರದುರ್ಗ(ಕರ್ನಾಟಕ ವಾರ್ತೆ).ಫೆ.23:
ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆ ವೇಳೆ ಜಿಲ್ಲಾ ಎಂ.ಸಿ.ಎಂ.ಸಿ (ಮಾಧ್ಯಮ ಪ್ರಮಾಣೀಕರಣ ಹಾಗೂ ನಿಗಾ ಸಮಿತಿ) ಸಾಮಾಜಿಕ ಮಾಧ್ಯಮ, ಸುಳ್ಳು ಸುದ್ದಿಗಳು ಹಾಗೂ ಕಾಸಿಗಾಗಿ ಸುದ್ದಿಯ ಮೇಲೆ ಹೆಚ್ಚಿನ ನಿಗಾ ಇರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾ ಮಟ್ಟದ ಎಂ.ಸಿ.ಎಂ.ಸಿ ಸಮಿತಿಯ ಅಧಿಕಾರಿಗಳಿಗಾಗಿ  ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾದ ತರಬೇತಿ ನಂತರ ನಗರದ ಜಿಲ್ಲಾಧಿಕಾರಿ ಕಚೇರಿಯ ಕೆ-ಸ್ವಾನ್ ವಿಡಿಯೋ ಕಾನ್ಫರೆನ್ಸ್ ಹಾಲ್‍ನಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಎಂ.ಸಿ.ಎಂ.ಸಿ ಸಮಿತಿ ಕಾರ್ಯನಿರ್ವಹಿಸುತ್ತದೆ. ಚುನಾವಣೆ ಸಂಬಂಧವಾಗಿ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಬಿತ್ತರಿಸುವ ಜಾಹೀರಾತುಗಳ ಪ್ರಮಾಣೀಕರಣದ ಜೊತೆಗೆ, ಪೇಯ್ಡ್ ನ್ಯೂಸ್‍ಗಳನ್ನು ಗುರುತಿಸಿ ಅಭ್ಯರ್ಥಿ ಹಾಗೂ ರಾಜಕೀಯ ಪಕ್ಷದ ಚುನಾವಣಾ ವೆಚ್ಚಗಳಿಗೆ ಇದನ್ನು ಸೇರಿಸುವ ಕೆಲಸವನ್ನು ಎಂ.ಸಿ.ಎಂ.ಸಿ  ಮಾಡಬೇಕು. ಇಂದಿನ ಸಮಯದಲ್ಲಿ ಸಾಮಾಜಿಕ ಮಾಧ್ಯಮಗಳು ಚುನಾವಣೆಯ ಪ್ರಚಾರದಲ್ಲಿ ಹೆಚ್ಚಿನ ಪ್ರಭಾವ ಬೀರುತ್ತವೆ. ಹಾಗಾಗಿ ಮುದ್ರಣ, ಎಲೆಕ್ಟ್ರಾನಿಕ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡಲು ಪ್ರತ್ಯೇಕ ಸಮಿತಿಯನ್ನು ಎಂ.ಸಿ.ಎಂ.ಸಿ ಅಡಿ ರಚನೆ ಮಾಡಲಾಗುವುದು ಎಂದರು.
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಭಾವಿಗಳಾಗಿರುವವರು, ಸಾಮಾಜಿಕ ಮಾಧ್ಯಮಗಳನ್ನು ಬಳಸಿ ರಾಜಕೀಯ ಪಕ್ಷ ಹಾಗೂ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಬಹುದು. ಇವುಗಳನ್ನು ಜಾಹೀರಾತು ಎಂದು ಪರಿಗಣಿಸಿ, ಅಭ್ಯರ್ಥಿಯ ಚುನಾವಣೆ ವೆಚ್ಚಕ್ಕೆ ಸೇರಿಸಬೇಕು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ, ಸಾಮಾಜಿಕ ಮಾಧ್ಯಮಗಳಲ್ಲಿಯೂ ನೀತಿ ಸಂಹಿತೆಯನ್ನು ಪಾಲಿಸುವುದು ಕಡ್ಡಾಯವಾಗಿದೆ. ಇದಕ್ಕೆ ವ್ಯತಿರಿಕ್ತವಾಗಿ ಸಾಮಾಜಿಕ ಮಾಧ್ಯಮಗಳ ಬಳಕೆ ಕಂಡುಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು.

ವಿಡಿಯೋ ಕಾನ್ಫರೆನ್ಸ್‍ನಲ್ಲಿ ಎಂ.ಸಿ.ಎಂ.ಸಿ ರಚನೆ ಕಾರ್ಯಗಳ ಕುರಿತು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್ ಕುಮಾರ್ ಹಾಗೂ ಪೇಯ್ಡ್ ನ್ಯೂಸ್, ಫೇಕ್ ನ್ಯೂಸ್, ಸಾಮಾಜಿಕ ಮಾಧ್ಯಮಗಳ ಕುರಿತು ಸೂರ್ಯಸೇನ್ ತರಬೇತಿ ನೀಡಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಾರ್ತಾಧಿಕಾರಿ ತುಕಾರಾಂರಾವ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕ ಎಂ.ವೈ.ರಾಘವೇಂದ್ರ, ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಎಂ.ರೇಣುಕಾ ಪ್ರಕಾಶ್ ಸೇರಿದಂತೆ ಮತ್ತಿತರರು ಇದ್ದರು.

[t4b-ticker]

You May Also Like

More From Author

+ There are no comments

Add yours