ಬೆಂಗಳೂರು, ಆ. 20: ಕರ್ನಾಟಕದ ಸಾವಿರಕ್ಕೂ ಹೆಚ್ಚು ಗ್ರಾಮಗಳನ್ನು ಒಳಗೊಳ್ಳುವ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ವಿರುದ್ಧ ವಿಧಾನಸಭೆಯಲ್ಲಿಂದು ಮಹತ್ವದ ಚರ್ಚೆ ನಡೆಯಿತು. ಕೊಡಗು ಸೇರಿದಂತೆ ಪಶ್ಚಿಮಘಟ್ಟ ಪ್ರದೇಶದ ರೈತರು ಮತ್ತು ಸಾರ್ವಜನಿಕರ ಆತಂಕವನ್ನು ಸದನದ ಗಮನಕ್ಕೆ ತರುವ ನಿಟ್ಟಿನಲ್ಲಿ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ ವಿಷಯ ಪ್ರಸ್ತಾಪಿಸಿದ್ದು, ಕೇಂದ್ರದ ಕರಡು ಅಧಿಸೂಚನೆ ವಿರುದ್ಧ ನಿರ್ಣಯ ಅಂಗೀಕಾರಕ್ಕೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ . ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ರಾಜ್ಯ ಸರ್ಕಾರದಿಂದ ಶಿಫಾರಸು ಮಾಡುತ್ತೇವೆ ಎಂದು ಘೋಷಿಸಿದ್ದಾರೆ.


ನಿಲುವು ಸ್ಪಷ್ಟಪಡಿಸಿದ ರಾಜ್ಯ ಸರ್ಕಾರ
ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಅವರು ಇಂದು(ಆಗಸ್ಟ್ 20) ಸನದಲ್ಲಿ ವಿಷಯ ಪ್ರಸ್ತಾಪಿಸಿ, ಜನರ ಆತಂಕ ನಿವಾರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಪಶ್ಚಿಮಘಟ್ಟ ಭಾಗದ ಜನರ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, 10 ಜಿಲ್ಲೆಗಳ ವ್ಯಾಪ್ತಿಯಲ್ಲಿ 39 ತಾಲೂಕುಗಳಲ್ಲಿ ಕಸ್ತೂರಿ ರಂಗನ್ ವರದಿ ಪರಿಣಾಮ ಬೀರಲಿದೆ. ಈ ಹಿಂದೆಯೂ ರಾಜ್ಯ ಸರ್ಕಾರ ಇದಕ್ಕೆ ಆಕ್ಷೇಪಿಸಿತ್ತು. ರೈತರ ಬೇಡಿಕೆಗಳ ಕುರಿತು ಸರ್ಕಾರದ ಗಮನದಲ್ಲಿದೆ. ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ಹೀಗಾಗಿ ಕಸ್ತೂರಿ ರಂಗನ್ ವರದಿ ತಿರಸ್ಕಾರಕ್ಕೆ ರಾಜ್ಯ ಸರ್ಕಾರದಿಂದ ಶಿಫಾರಸು ಮಾಡುತ್ತೇವೆ ಎಂದು ನಿಲುವು ಸ್ಪಷ್ಟಪಡಿಸಿದರು.
ಏನಿದು ಕಸ್ತೂರಿ ರಂಗನ್ ವರದಿ?
ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಕೇಂದ್ರ ಸರ್ಕಾರ ಒಂದು ಸಮಿತಿ ರಚಿಸಿತ್ತು. ಈ ಸಮಿತಿಯು 2011 ಆಗಸ್ಟ್ 31ರಂದು ತನ್ನ ವರದಿ ನೀಡಿತು. ಈ ವರದಿಯು ಮಾದವ ಗಾಡ್ಗೀಳ್ ವರದಿ ಎಂದೇ ಜನಪ್ರಿಯವಾಗಿದೆ. ಏಕೆಂದರೆ, ಪರಿಸರ ತಜ್ಞ ಮಾದವ ಗಾಡ್ಗೀಳ್ ಅವರ ನೇತೃತ್ವದ ಸಮಿತಿ ನೀಡಿದ ವರದಿ ಇದಾಗಿತ್ತು. ಈ ವರದಿಯ ಪ್ರಕಾರ ಪಶ್ಚಿಮ ಘಟ್ಟದ ಶೇ. 94 ರಿಂದ 97ರಷ್ಟು ಭೂ ಭಾಗವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರ್ತಿಸಲಾಗಿತ್ತು. ಈ ಪ್ರದೇಶದಲ್ಲಿ ಜನವಸತಿಗೆ ನಿರ್ಬಂಧ ಹೇರಬೇಕೆಂದು ಶಿಫಾರಸ್ಸು ಮಾಡಲಾಗಿತ್ತು. ಈ ವರದಿ ಭಾರೀ ಆಕ್ರೋಶಕ್ಕೆ ಗುರಿಯಾಯ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಇಸ್ರೋ ಸಂಸ್ಥೆಯ ಮಾಜಿ ಮುಖ್ಯಸ್ಥ, ವಿಜ್ಞಾನಿ ಕಸ್ತೂರಿ ರಂಗನ್ ಅವರ ಸಾರಥ್ಯದಲ್ಲಿ ಮತ್ತೊಂದು ಸಮಿತಿ ರಚಿಸಿತು. ಈ ಸಮಿತಿಯು ಗಾಡ್ಗೀಳ್ ವರದಿಯಲ್ಲಿ ಇದ್ದಿರಬಹುದಾದ ಲೋಪ-ದೋಷಗಳನ್ನು, ಕುಂದುಕೊರತೆಗಳನ್ನು ನೀಗಿಸಿ ಒಂದು ವರದಿ ಸಿದ್ದಪಡಿಸಿತು. 2013 ಏಪ್ರಿಲ್ 15ರಂದು ಸಲ್ಲಿಕೆಯಾದ ಈ ವರದಿಯನ್ನು ಕೇಂದ್ರ ಸರ್ಕಾರ ಸ್ವೀಕರಿಸಿತು. ಆದ್ರೆ ಇದೀಗ ಈ ವರದಿಯೂ ವಿವಾದಾಸ್ಪದವಾಗಿದೆ.
ಕಸ್ತೂರಿ ರಂಗನ್ ವರದಿಯಲ್ಲೇನಿದೆ?
ಗುಜರಾತ್ನ ತಪತಿ ನದಿ ಮೂಲದಿಂದ ಹಿಡಿದು, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡಿನ ಕನ್ಯಾಕುಮಾರಿವರೆಗೂ 1,64,280 ಚದರ ಕಿಲೋ ಮೀಟರ್ ಪ್ರದೇಶವನ್ನು ಪಶ್ಚಿಮ ಘಟ್ಟ ಎಂದು ಗುರ್ತಿಸಲಾಗಿದೆ. ಈ ಪೈಕಿ ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಹಲವು ಭೂಭಾಗ ಪಶ್ಚಿಮ ಘಟ್ಟದ ವ್ಯಾಪ್ತಿಗೆ ಬರುತ್ತವೆ. ಈ ಪ್ರದೇಶದಲ್ಲಿ ಗಣಿಗಾರಿಕೆ, ಕ್ವಾರಿ, ಮರಳು ಗಣಿಗಾರಿಕೆ, ಕೈಗಾರಿಕೆಗಳು, ಜಲ ವಿದ್ಯುತ್ ಯೋಜನೆ, ಪವನ ವಿದ್ಯುತ್ ಯೋಜನೆ ಸೇರಿದಂತೆ ಎಲ್ಲಾ ರೀತಿಯ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. 20 ಸಾವಿರ ಚದರ ಮೀಟರ್ಗಿಂತಲೂ ದೊಡ್ಡ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಶಿಫಾರಸ್ಸು ಮಾಡಲಾಗಿದೆ. ಈ ಪ್ರದೇಶದಲ್ಲಿ ಸಿಮೆಂಟ್, ಕಲ್ಲು, ರಾಸಾಯನಿಕ ಬಳಕೆ ಹಾಗೂ ಜನವಸತಿ ಪ್ರದೇಶ ನಿರ್ಮಾಣಕ್ಕೂ ನಿಷೇಧ ವಿಧಿಸಬೇಕೆಂದು ತಿಳಿಸಲಾಗಿದೆ.
ವಿರೋಧ ಏಕೆ?
ಕಸ್ತೂರಿ ರಂಗನ್ ಅವರ ವರದಿ ಅನುಷ್ಠಾನವಾದ್ರೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಅತಿ ಸೂಕ್ಷ್ಮ ಪರಿಸರ ವಲಯವಾಗಿ ಪರಿವರ್ತನೆಯಾಗುತ್ತೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ಮಾಡುವಂತೆಯೇ ಇಲ್ಲ. ಇಡೀ ಭೂ ಭಾಗ ರಾಜ್ಯದ ನಿಯಂತ್ರಣ ಕಳೆದುಕೊಂಡು ಕೇಂದ್ರದ ಸುಪರ್ದಿಗೆ ಬರುತ್ತದೆ. ಇಲ್ಲಿರುವ ಆದಿವಾಸಿಗಳನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ವಿದ್ಯುತ್, ನೀರಾವತಿ ಸೇರಿದಂತೆ ಯಾವುದೇ ಕೈಗಾರಿಕೆ ನಡೆಸಲು ಕಷ್ಟ ಸಾಧ್ಯವಾಗಲಿದೆ. ಸದ್ಯ ಇರುವ ಕೈಗಾರಿಕೆಗಳನ್ನು 5 ವರ್ಷದೊಳಗೆ ಮುಚ್ಚಬೇಕಾಗುತ್ತದೆ. ಹೀಗಾಗಿ ಹಲವು ಜಿಲ್ಲೆಯ ಜನರು ಈ ವರದಿಗೆ ವಿರೋಧಿಸುತ್ತಿದ್ದಾರೆ.



