ಕುಡಿಯುವ ನೀರು ಪೂರೈಕೆಗೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಿ :ಸಚಿವ ಡಿ.ಸುಧಾಕರ್

 

ಚಿತ್ರದುರ್ಗ:ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಪಟ್ಟಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರು ನಗರದ ನೆಹರು ಮೈದಾನದಲ್ಲಿ ಸೋಮವಾರ ನಗರಸಭೆ ವತಿಯಿಂದ ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ, ನೈರ್ಮಲ್ಯೀಕರಣದ ಬಗ್ಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
 ನಗರ ಮತ್ತು ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.  ನೈರ್ಮಲ್ಯ ಮತ್ತು ಕುಡಿಯುವ ನೀರಿನ ಕಾರಣಕ್ಕೆ ಸಾರ್ವಜನಿಕರಿಗೆ ತೊಂದರೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸಚಿವರು ಎಚ್ಚರಿಸಿದರು.
ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯ ಕಲುಷಿತ ನೀರು ಸೇವನೆಯ ಪ್ರಕರಣ ಮರುಕಳಿಸದ ರೀತಿಯಲ್ಲಿ ಅಧಿಕಾರಿಗಳು ಎಚ್ಚರವಹಿಸಬೇಕು. ಜೊತೆಗೆ ಸಾರ್ವಜನಿಕರೂ ತಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛವಾಗಿರಿಸಿಕೊಂಡು, ಹಾಗೂ ವೈಯಕ್ತಿಕ ಸ್ವಚ್ಛತೆ ಕಾಯ್ದುಕೊಳ್ಳುವ ಮೂಲಕ ಯಾವುದೇ ರೋಗಗಳು ಹರಡದಂತೆ, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು. ಅಲ್ಲದೆ ನೀರು ಮತ್ತು ನೈರ್ಮಲ್ಯ ಕುರಿತು ಅರಿವು ಮೂಡಿಸುವ ಕರಪತ್ರಗಳನ್ನು ಸಾರ್ವಜನಿಕರಿಗೆ ಸಚಿವರು ವಿತರಿಸಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಮನೆಯ ಕಸವನ್ನು ವಿಂಗಡಿಸಿ ಕಸದ ವಾಹನಗಳಿಗೆ ಕೊಡುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು. ಕಸವನ್ನು ಬೀದಿಗೆ ತಂದು ಸುರಿದರೆ ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ಕೊಟ್ಟಂತೆ ಆಗುತ್ತದೆ. ಬಯಲು ಶೌಚ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಬೇಕು ಎಂದು ಹೇಳಿದರು.
ಇದನ್ನು ಓದಿ: ಚಿತ್ರದುರ್ಗಕ್ಕೆ ನೂತನ ಎಸ್ಪಿ ಧರ್ಮೇಂದರ್ ಕುಮಾರ್ ಮೀನಾ
ಪ್ರತಿಯೊಬ್ಬರು ಕಾಯಿಸಿ ಆರಿಸಿದ ನೀರನ್ನೇ ಕುಡಿಯಬೇಕು. ಇದರಿಂದ ನೀರಿನಲ್ಲಿ ಯಾವುದೇ ರೋಗಕಾರಕ ಸೂಕ್ಷ್ಮಾಣು ಜೀವಿಗಳಿದ್ದಲ್ಲಿ ಅವು ನಾಶವಾಗಿ, ಶುದ್ಧ ಹಾಗೂ ರೋಗಾಣು ರಹಿತ ಕುಡಿಯುವ ನೀರು ಲಭಿಸಿದಂತಾಗುತ್ತದೆ.  ಸ್ವಚ್ಛತೆ ಕೆಲಸ ನಗರಸಭೆಯ ಜವಾಬ್ದಾರಿ ಎಂಬ ಧೋರಣೆ ಸಾರ್ವಜನಿಕರಲ್ಲಿ ಬೇಡ. ಪರಿಸರವನ್ನು ಸ್ವಚ್ಛವಾಗಿರಿಸಿಕೊಂಡು, ರಸ್ತೆಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡದೆ, ವ್ಯವಸ್ಥಿತ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ನಗರಸಭೆಯೊಂದಿಗೆ ನಾಗರೀಕರು ಸಹಕರಿಸಿದರೆ ಮಾತ್ರ ಸುಂದರ ನಗರ ನಿರ್ಮಾಣವಾಗಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಾಜೇಶ್ ಕುಮಾರ್, ಡಿವೈಎಸ್ಪಿ ಚೈತ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪ್ರಕಾಶ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಘವೇಂದ್ರ, ಪೌರಾಯುಕ್ತ ಎಚ್. ಮಹಂತೇಶ್, ಆರೋಗ್ಯ ಇಲಾಖೆಯ ವಿನಯ್, ಮುಖಂಡರಾದ ಖಾದಿರಮೇಶ್, ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಸಾದತ್ ಉಲ್ಲಾ, ಕಂದಿಕೆರೆ ಜಗದೀಶ್, ನಗರಸಭೆ ಸದಸ್ಯರು ಇದ್ದರು.

ಬೃಹತ್ ಜಾಥಾ:
******* ಶುದ್ಧ ಕುಡಿಯುವ ನೀರು ಹಾಗೂ ಸ್ವಚ್ಛತೆ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಏರ್ಪಡಿಸಿದ್ದ ಬೃಹತ್ ಜಾಗೃತಿ ಜಾಥಾ ಹಿರಿಯೂರು ನಗರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಸಂಚರಿಸಿತು.  ಜಾಥಾದಲ್ಲಿ ನಗರಸಭೆ ಸಿಬ್ಬಂದಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು, ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರಿನ ಕುರಿತು “ಬಿಸಿ ಬಿಸಿಯಾದ ಆಹಾರ ಸೇವಿಸಿ”, “ಪರಿಸರ ಸ್ವಚ್ಛತೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿ”, “ಕಾಯಿಸಿ ಆರಿಸಿದ ನೀರು ಕುಡಿಯಿರಿ”, “ಕಸಕಡ್ಡಿಗಳನ್ನು ಎಲ್ಲೆಂದರಲ್ಲಿ ಹಾಕಬೇಡಿ” ಮುಂತಾದ ಜಾಗೃತಿ ಸಂದೇಶಗಳ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತ ಘೋಷಣೆಯೊಂದಿಗೆ ಸಾಗಿದರು.

[t4b-ticker]

You May Also Like

More From Author

+ There are no comments

Add yours